
ಬೆಂಗಳೂರು: ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಆಸ್ತಿ ವಿವರ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಅವರ ಆಯ್ಕೆಯನ್ನು ಪ್ರಶ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕಿ ಕನೀಜ್ ಫಾತಿಮಾ ಅವರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಫಾತಿಮಾ ಅವರು ಈ ವರ್ಷ ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿ ಉತ್ತರ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದರು.
ಈ ಸಂಬಂಧ ಜೆಡಿಯು ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಎಎಸ್ ಶರಣಬಸಪ್ಪ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಏಕಸದಸ್ಯ ನ್ಯಾಯಪೀಠ, ಫಾತಿಮಾ ಅವರಿಗೆ ನೋಟಿಸ್ ಜಾರಿ ಮಾಡಿತು ಮತ್ತು ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗೆ ಅವಕಾಶ ನೀಡಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿತು.
ಅರ್ಜಿಯಲ್ಲಿ ಏನಿದೆ?
'2023ರ ಮೇ 10ರಂದು ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕನೀಜ್ ಫಾತಿಮಾ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಲಬುರಗಿ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದಾರೆ. ಈ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ಆಸ್ತಿ ವಿವರ ಹಾಗೂ ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಸರಿಯಾದ ಮಾಹಿತಿಗಳನ್ನು ನೀಡಿಲ್ಲ. ಉದ್ದೇಶಪೂರ್ವಕವಾಗಿಯೇ ಅವರು ಸತ್ಯವನ್ನು ಮರೆಮಾಚಿದ್ದು, ಇದು ಚುನಾವಣೆಯ ಫಲಿತಾಂಶಗ ಮೇಲೆ ಪರಿಣಾಮ ಬೀರಿದೆ' ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಫಾತಿಮಾ ಅವರು ಎಸ್‌ಬಿಐ ಸ್ಟೇಷನ್ ಬ್ರಾಂಚ್‌ನಲ್ಲಿರುವ ತಮ್ಮ ತನ್ನ ಬ್ಯಾಂಕ್ ಖಾತೆಯ ವಿವರಗಳನ್ನು ಬಹಿರಂಗಪಡಿಸಿಲ್ಲ.
ಫಾತಿಮಾ ಅವರು 2018 ರಲ್ಲಿ 14.5 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಘೋಷಿಸಿದ್ದರು. ಆದರೆ, ಐದು ವರ್ಷಗಳ ನಂತರವೂ ಅದರ ಮೌಲ್ಯ ಕೇವಲ 14.64 ಕೋಟಿ ರೂ. ಗಳಷ್ಟಿದೆ. 'ಇದು ಸಹ ಸ್ವೀಕಾರಾರ್ಹವಲ್ಲ'. ಇದು ಜನಪ್ರತಿನಿಧಿಗಳ ಕಾಯ್ದೆಯ ಉಲ್ಲಂಘನೆಯಾಗಿದ್ದು, ಇವರ ಆಯ್ಕೆಯನ್ನು ಅನೂರ್ಜಿತಗೊಳಿಸಿ ಇವರ ಸಮೀಪದ ಪ್ರತಿಸ್ಪರ್ಧಿಯಾಗಿ ಎರಡನೇ ಅತಿಹೆಚ್ಚು ಮತ ಪಡೆದ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಬೇಕು' ಎಂದು ಅರ್ಜಿದಾರರು ಕೋರಿದ್ದಾರೆ.
Advertisement