ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಜ್ಯದ ಅನುದಾನ ಬಿಡುಗಡೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಭರವಸೆ ನೀಡಿದಂತೆ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಳಗಾವಿ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಭರವಸೆ ನೀಡಿದಂತೆ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

3,542ಕೋಟಿ ರೂಗಳ ಪೂರಕ ಅಂದಾಜು ಪ್ರಸ್ತಾವನೆ ಹಾಗೂ ಈ ಕುರಿತ ಕರ್ನಾಟಕ ಧನ ವಿನಿಯೋಗ (4) ವಿಧೇಯಕಕ್ಕೆ ಅಂಗೀಕಾರ ಕೋರಿ ಮಾತನಾಡಿದ ಅವರು, ಕೇಂದ್ರದ ವಿರುದ್ಧ ಟೀಕಾಪ್ರಹಾರ ನಡೆಸಿದರು.

ರಾಜ್ಯದ ಬರಪೀಡಿತ ಪ್ರದೇಶಗಳಿಗೆ ನೆರವಾಗುವ ನಿಟ್ಟಿನಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಗೊಳಿಸಲು ಕೇಂದ್ರ ಬಜೆಟ್‌ನಲ್ಲಿ 5,300 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ. ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ನಲ್ಲೂ ಇದನ್ನೇ ಉಲ್ಲೇಖಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಕೊಟ್ಟ ಭರವಸೆಯಂತೆ ರಾಜ್ಯಕ್ಕೆ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ ಎಂದು ಆರೋಪಿಸಿದರು.

ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. 15ನೇ ಹಣಕಾಸು ಆಯೋಗದ ಭರವಸೆಯಂತೆ ರಾಜ್ಯಕ್ಕೆ 5,495 ಕೋಟಿ ವಿಶೇಷ ಅನುದಾನವೂ ಸಿಕ್ಕಿಲ್ಲ. ರಾಜ್ಯಕ್ಕೆ ಕೇಂದ್ರದಿಂದ ದೊಡ್ಡ ಅನ್ಯಾಯವಾಗಿದೆ ಎಂದು ಕಿಡಿಕಾರಿದರು.

ವಿವಿಧ ಇಲಾಖೆಗಳ ಹೆಚ್ಚುವರಿ ಕಾರ್ಯಗಳಿಗೆ ಸರ್ಕಾರ  3,552.1 ಕೋಟಿ ರೂಗಾಗಿ ಮನವಿ ಮಾಡಿದೆ. ಈ ಪೈಕಿ ರಾಜ್ಯವು 684 ಕೋಟಿ ರೂ.ಗಳನ್ನು ಕೇಂದ್ರ ನಿಧಿಯಿಂದ ಮತ್ತು 324 ಕೋಟಿ ರೂ.ಗಳನ್ನು ಮೀಸಲು ನಿಧಿಯಿಂದ ಪಡೆಯಲಿದೆ. ಇದರಲ್ಲಿ 2,627 ರೂ.ಗಳನ್ನು ರಾಜಸ್ವ ವೆಚ್ಚಕ್ಕಾಗಿ ಮತ್ತು ಉಳಿದ 915 ಕೋಟಿ ರೂ.ಗಳನ್ನು ಬಂಡವಾಳದ ವೆಚ್ಚ, ಆಸ್ತಿ ರಚನೆ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಖರ್ಚು ಮಾಡಲಾಗುವುದು. ಪೂರಕ ಬೇಡಿಕೆಯ ನಿವ್ವಳ ಬಂಡವಾಳದ ಹೊರಹರಿವು ರೂ 2,531 ಕೋಟಿಗಳಾಗಿರುತ್ತದೆ ಎಂದು ಹೇಳಿದರು.

ಪೂರಕ ಬೇಡಿಕೆಯಲ್ಲಿ ಕೋರಿರುವ ಮೊತ್ತದಲ್ಲಿ 508 ಕೋಟಿ ರೂ.ಗಳನ್ನು ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಬುಡಕಟ್ಟು ಉಪ ಯೋಜನೆ (ಟಿಎಸ್‌ಪಿ) ಗಾಗಿ ಮೀಸಲಿಡಲಾಗಿದೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ 284 ಕೋಟಿ ರೂ., ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಿಗೆ 189 ಕೋಟಿ ರೂ., ಉಗ್ರಾಣ ನಿಗಮಕ್ಕೆ 229 ಕೋಟಿ ರೂ., ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಕಮಿಷನ್ ನೀಡಲು ಮತ್ತು ಆಹಾರಧಾನ್ಯ ಸಾಗಣೆಗೆ 297 ಕೋಟಿ ರೂ. ಮೀಸಲಿಡಲಾಗಿದೆ. ಅಲ್ಲದೆ, ಹಿಂದಿನ ಸರ್ಕಾರ ಕೃಷಿ ಭಾಗ್ಯ ಯೋಜನೆ ಜಾರಿ ಮಾಡುವುದನ್ನು ನಿಲ್ಲಿಸಿದ್ದರಿಂದ ಅದರ ಪುನರಾರಂಭಿಸಲು 100 ಕೋಟಿ ರೂ. ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.

Related Stories

No stories found.

Advertisement

X
Kannada Prabha
www.kannadaprabha.com