
ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ವನ್ಯಜೀವಿ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆಯೊಂದು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ಹುಣಸೂರು ವ್ಯಾಪ್ತಿಯ ಕುಗ್ರಾಮವೊಂದರ ಬಳಿಯ ಕೃಷಿ ಭೂಮಿಯ ಬೇಲಿಗೆ ಅಳವಡಿಸಿದ್ದ ಹೈಟೆನ್ಷನ್ ತಂತಿ ತಗುಲಿ ಆನೆ ಮೃತಪಟ್ಟಿದೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ,
ಗುರುವಾರ ಬೆಳಗ್ಗೆ ಆನೆಯ ಶವ ಪತ್ತೆಯಾಗಿದೆ. ವಿಚಾರ ತಿಳಿದ ಕೂಡಲೇ ನಮ್ಮ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಪ್ರಾಥಮಿಕ ತನಿಖೆಯ ಪ್ರಕಾರ ಆನೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಆನೆ ದಾಳಿ: 3 ವರ್ಷದಲ್ಲಿ ಕೊಡಗು ಒಂದರಲ್ಲೇ 18 ಮಂದಿ ಬಲಿ
ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಶವಪರೀಕ್ಷೆ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಹೇಳಿದ್ದಾರೆ.
ಆನೆ ಸಾವಿಗೆ ವಿದ್ಯುತ್ ಸ್ಪರ್ಶವೇ ಕಾರಣ ಎಂದು ಕಂಡುಬಂದರೆ ಕೃಷಿ ಭೂಮಿ ಮಾಲೀಕರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹರ್ಷಕುಮಾರ ಚಿಕ್ಕನರಗುಂದ ತಿಳಿಸಿದ್ದಾರೆ.
ಬೇಲಿಗಳಿಗೆ ವಿದ್ಯುತ್ ಸರಬರಾಜು ಮಾಡದಂತೆ ಗ್ರಾಮಸ್ಥರು ಮತ್ತು ರೈತರಿಗೆ ಪದೇ ಪದೇ ಮನವಿ ಮಾಡಿದರೂ ಮನವಿಗಳಿಗೆ ಕಿವಿಕೊಡುತ್ತಿಲ್ಲ ಎಂದು ಹೇಳಿದ್ದಾರೆ.
Advertisement