ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ಗಳಲ್ಲಿ ಸಿಬ್ಬಂದಿ ಕೊರತೆ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ರಾಜ್ಯ ಸರ್ಕಾರ ನಡೆಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯಗಳಲ್ಲಿ ಸಿಬ್ಬಂದಿ ಕೊರತೆಗೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿ ಆಧರಿಸಿ ಹೈಕೋರ್ಟ್ ಸ್ವಯಂಪ್ರೇರಿತ ಸ್ವ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯಗಳಲ್ಲಿ ಸಿಬ್ಬಂದಿ ಕೊರತೆಗೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿ ಆಧರಿಸಿ ಹೈಕೋರ್ಟ್ ಸ್ವಯಂಪ್ರೇರಿತ ಸ್ವ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿದೆ.

ಗುರುವಾರ ವಿಚಾರಣೆ ಸಂದರ್ಭದಲ್ಲಿ ಮಾಧ್ಯಮದಲ್ಲಿ ಪ್ರಕಟವಾಗಿರುವ ವರದಿಯನ್ನು ಪ್ರಸ್ತಾಪಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್​. ದೀಕ್ಷಿತ್​ ಅವರಿದ್ದ ವಿಭಾಗೀಯ ಪೀಠ, ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು 4 ವಾರಗಳ ಕಾಲ ಮುಂದೂಡಿತು.

ಅಲ್ಲದೆ, ವಕೀಲ ನಿತಿನ್​ ರಮೇಶ್​ ಎಂಬುವರನ್ನು ಪ್ರಕರಣದ ಅಮಿಕಸ್​​ ಕ್ಯೂರಿ(ನ್ಯಾಯಾಲಯಕ್ಕೆ ನೆರವಾಗುವ ವಕೀಲರು) ಯನ್ನಾಗಿ ನೇಮಕ ಮಾಡಿ ಆದೇಶಿಸಿ, ಪ್ರಕರಣ ಸಂಬಂಧ ಎಲ್ಲ ದಾಖಲೆಗಳನ್ನು ಹಸ್ತಾಂತರ ಮಾಡುವಂತೆ ಹೈಕೋರ್ಟ್ ರಿಜಿಸ್ಟ್ರಾರ್​ಗೆ ಸೂಚನೆ ನೀಡಿತು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳ ವಿದ್ಯಾಬ್ಯಾಸ ಮಾಡುತ್ತಿರುವ ಸಮಾಜ‌ ಕಲ್ಯಾಣ ಇಲಾಖೆ ವತಿಯಿಂದ ನಡೆಸಲಾಗುತ್ತಿರುವ ವಸತಿ ನಿಲಯಗಳಲ್ಲಿನ ಕೆಲ‌ ಜಿಲ್ಲೆಗಳಲ್ಲಿ 2-3 ಹಾಸ್ಟೆಲ್​ಗಳಲ್ಲಿ ಒಬ್ಬರೇ ವಾರ್ಡನ್​​​ ಮತ್ತು ಒಬ್ಬರೇ ಮೇಲ್ವಿಚಾರಕರು ಇದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ಈ ಬೆಳವಣಿಗೆಯಿಂದ ಮಕ್ಕಳಲ್ಲಿನ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿದೆ. ಜೊತೆಗೆ ಪರೀಕ್ಷೆಗಳಲ್ಲಿ ಸೂಕ್ತ ಅಂಕಗಳು ಪಡೆಯಲಾಗುತ್ತಿಲ್ಲ. ಪರಿಣಾಮ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಗುರಿಯಾಗುವಂತೆ ಮಾಡಿದೆ ಎಂದು ನ್ಯಾಯಪೀಠ ಹೇಳಿತು.

ಅಲ್ಲದೇ, 200 ವಾರ್ಡನ್​ಗಳ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಹೇಳಲಾಗಿದೆ. ಈಗಾಗಲೇ ಖಾಲಿ ಹುದ್ದೆಗಳ ಶೀಘ್ರ ಭರ್ತಿಗೆ ಸೂಚನೆ ನೀಡಲಾಗಿದೆ. ಆದರೂ, ಸರ್ಕಾರ ಈವರೆಗೂ ಯಾವುದೇ ಹುದ್ದೆಗಳನ್ನು ಭರ್ತಿ ಮಾಡಿಲ್ಲ ಎಂದು ಪೀಠ ತಿಳಿಸಿದೆ.

ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ನಿಯಮಗಳನ್ನು ರೂಪಿಸಲಾಗಿದೆ. ಆದರೆ, ನಮ್ಮ ಸಂವಿಧಾನದ ರಚನಾಕಾರರು ಇದರ ಬಗ್ಗೆ ಪ್ರಸ್ತಾಪಿಸಿಲ್ಲ. ಈ ರೀತಿಯಲ್ಲಿ ಖಾಲಿ ಹುದ್ದೆಗಳು ಮುಂದುವರೆದಲ್ಲಿ ಇಡೀ ವ್ಯವಸ್ಥೆಗೆ ತೊಂದರೆ ಅನುಭವಿಸುವಂತಾಗುತ್ತದೆ. ಅಷ್ಟೇ ಅಲ್ಲದೆ, ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುವ ಹಲವು ಮಂದಿಗೆ ವಯೋಮಿತಿ ಮೀರುತ್ತಿದ್ದು, ಗೊಂದಲದಲ್ಲಿ ಜೀವನ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿತು.

ಇದೇ ವೇಳೆ ರಾಜ್ಯ ಸರ್ಕಾರದ ಖಾಲಿ ಹುದ್ದೆಗಳ ಭರ್ತಿಗೆ ಕಾಲ ಕಾಲಕ್ಕೆ ಸರ್ಕಾರದ ಗಮನಕ್ಕೆ ತರುವುದಕ್ಕಾಗಿ ಪ್ರತ್ಯೇಕವಾಗಿ ಯಾವುದೇ ಘಟಕವನ್ನು ಪ್ರಾರಂಭಿಸಲಾಗಿದೆಯೇ? ಎಂದು ಪ್ರಶ್ನಿಸಿದ ಪೀಠ, ಮಹಾರಾಷ್ಟ್ರದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಪ್ರತ್ಯೇಕ ಘಟಕವಿರಲಿದ್ದು, ಖಾಲಿ ಹುದ್ದೆಗಳನ್ನು ಭರ್ತಿಗೆ ಸಂಬಂಧಿಸಿದಂತೆ ಕಾಲ ಕಾಲಕ್ಕೆ ಸರ್ಕಾರದ ಗಮನಕ್ಕೆ ತಿಳಿಸಲಿದೆ. ಅದೇ ರೀತಿಯಲ್ಲಿ ರಾಜ್ಯದಲ್ಲಿ ಘಟಕವಿದೆಯೇ? ಎಂಬುದರ ಸಂಬಂಧ ಮುಂದಿನ ವಿಚಾರಣೆ ವೇಳೆ ತಿಳಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com