ಕೋಲಾರ: ಮಲದ ಗುಂಡಿಯೊಳಗೆ ಮಕ್ಕಳನ್ನು ಇಳಿಸಿ ಸ್ವಚ್ಛತಾ ಕಾರ್ಯ: ಪ್ರಾಂಶುಪಾಲ, ವಾರ್ಡನ್, ಶಿಕ್ಷಕ ಅಮಾನತು
ಕೋಲಾರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರಾದ ಭಾರತಮ್ಮ, ವಾರ್ಡನ್ ಮಂಜುನಾಥ್ ಹಾಗೂ ಶಿಕ್ಷಕ ಮುನಿಯಪ್ಪ ಅವರನ್ನು ಅಮಾನತು ಮಾಡಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ನವೀನ್ ಕುಮಾರ್ ರಾಜ್, ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, 'ಇದೊಂದು ತೀರಾ ಗಂಭೀರವಾದ ವಿಚಾರ. ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ದೊಡ್ಡ ಲೋಪ ಎಸಗಿದ್ದಾರೆ. ಹೀಗಾಗಿ, ಅಮಾನತುಗೊಳಿಸಿ ತನಿಖೆ ನಡೆಸಲು ನಿರ್ದೇಶನ ನೀಡಿದ್ದೇನೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಮೊರಾರ್ಜಿ ದೇಸಾಯಿ ಶಾಲೆಗೆ ಜಿಲ್ಲಾ ನ್ಯಾಯಾಧೀಶರಾದ ಸುನೀಲ್ ಹೊಸಮಣಿ ಹಾಗೂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಮಕ್ಕಳ ಬಳಿಯೂ ಸಮಸ್ಯೆಯನ್ನು ವಿಚಾರಿಸಿದ್ದಾರೆ. ಪ್ರತಿ ಕೊಠಡಿಗೂ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ ನ್ಯಾಯಾಧೀಶರು ಮಕ್ಕಳಿಂದ ದೂರು ಪಡೆದುಕೊಂಡರು.
ಈ ವೇಳೆ ಮಕ್ಕಳು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಪ್ರಾಂಶುಪಾಲೆ ಭಾರತಮ್ಮ, ವಾರ್ಡನ್ ಮಂಜುನಾಥ್ ಹಾಗೂ ಶಿಕ್ಷಕ ಅಭಿಷೇಕ್ ಅವರಿಂದ ಮಾಹಿತಿಯನ್ನು ಸಂಗ್ರಹಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ