

ಬೆಂಗಳೂರು: ನಾಳೆ ಮಂಗಳವಾರದಿಂದ ಮೂರು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಬಹುದು.ಈ ಬಗ್ಗೆ ಪ್ರಧಾನಿ ಸಚಿವಾಲಯ ಸಮಯ ನಿಗದಿ ಮಾಡಿದೆ ಎಂದು ತಿಳಿದುಬಂದಿದೆ.
ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಈ ವರ್ಷ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಕೇಂದ್ರದಿಂದ ಇದಕ್ಕೆ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ಕೋರಲಿದ್ದಾರೆ ಎಂದು ತಿಳಿದುಬಂದಿದೆ.ಕೇಂದ್ರ ಸರ್ಕಾರದ ನರೇಗಾ ಯೋಜನೆಯಡಿ ಮಾನವ ಕೆಲಸದ ದಿನಗಳನ್ನು ಕೂಡ ಹೆಚ್ಚಿಸುವಂತೆ ಕೋರುವ ಸಾಧ್ಯತೆಯಿದೆ.
ರಾಜ್ಯದಲ್ಲಿನ ಬರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರ ಸೂಕ್ತವಾಗಿ ಸ್ಪಂದಿಸುತ್ತಿಲ್ಲ, ಪ್ರಧಾನಿ ಮೋದಿಯವರು ಭೇಟಿಗೆ ಸಮಯ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿಗಳು ಟೀಕಿಸಿದ್ದರು.
ಡಿಸೆಂಬರ್ 21ರಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ(CWC) ಸಭೆ ನಡೆಯಲಿದೆ. ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಬ್ಬರೂ ಭಾಗವಹಿಸಲಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು, ನಿಗಮ-ಮಂಡಳಿಗಳಿಗೆ ನೇಮಕಾತಿಯ ಪಟ್ಟಿ ಅಂತಿಮಗೊಳಿಸುವ ಕುರಿತು ಕೂಡ ಭೇಟಿ ಸಂದರ್ಭದಲ್ಲಿ ಚರ್ಚೆ ನಡೆಸಿ ಬೆಂಗಳೂರಿಗೆ ಇಬ್ಬರೂ ನಾಯಕರು ವಾಪಸ್ಸಾಗಲಿದ್ದಾರೆ.