ಕೋಲಾರ: ಶೌಚ ಗುಂಡಿಗೆ ಮಕ್ಕಳನ್ನು ಇಳಿಸಿದ್ದ ಶಿಕ್ಷಕ, ಪ್ರಾಶುಪಾಲೆ ಸೇರಿ ಇಬ್ಬರ ಬಂಧನ
ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಶುಪಾಲರು ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಬಂಧಿತರು. ಹಾಸ್ಟೆಲ್ ವಾರ್ಡನ್ ಮಂಜುನಾಥ್ ಮತ್ತು ಅತಿಥಿ ಶಿಕ್ಷಕ ಅಭಿಷೇಕ್ ಪರಾರಿ ಆಗಿದ್ದು, ಹುಡುಕಾಟ ನಡೆಸಲಾಗುತ್ತಿದೆ.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ದೂರು ಹಿನ್ನೆಲೆ ಮಲಹೊರುವ ಪದ್ಧತಿ ನಿಯಂತ್ರಣ ಕಾಯ್ದೆ, ಅಟ್ರಾಸಿಟಿ ಕಾಯ್ದೆಯಡಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಶಾಲೆಗೆ ಭೇಟಿ ಕೊಟ್ಟು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ವಿಸ್ತೃತ ವಿಚಾರಣೆ ನಡೆಸಲು ಉಪ ಪೊಲೀಸ್ ವರಿಷ್ಠಾಧಿಕಾರಿ ಮಲ್ಲೇಶ್ ಅವರನ್ನು ನಿಯೋಜಿಸಲಾಗಿದೆ ಎಂದು ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಅವರು ತಿಳಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ಧಾವಿಸಿ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಘಟನೆ ಕುರಿತು ವಿಸ್ತೃತ ವರದಿ ಕೇಳಿದ್ದು, ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಅವರು ಮಾತನಾಡಿ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಜತೆಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ತನಿಖೆ ನಡೆಸಿ ವರದಿ ನೀಡಲು ಹಿರಿಯ ಅಧಿಕಾರಿಗಳನ್ನು ಶಾಲೆಗೆ ಕಳುಹಿಸಲಾಗಿದೆ. ಈ ಸಂಬಂಧ ವಿಸ್ತೃತ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಅದೇ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಅಭಿಷೇಕ್ ಪರೀಕ್ಷೆಗೆ ಸರಿಯಾಗಿ ತಯಾರಿ ನಡೆಸದ ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡಿದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ