ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಸ್ವಾಮಿ ವಿವೇಕಾನಂದ ಜಯಂತಿ ದಿನವಾದ ಜ.12 ರಂದು ನಗರದ ಪ್ರೀಡಂ ಪಾರ್ಕ್ ನಲ್ಲಿ ಯುವ ನಿಧಿ ಗ್ಯಾರಂಟಿ ಯೋಜನೆಗೆ ಚಾಲನೆ ದೊರೆಯಲಿದೆ ಎಂದು ಹೇಳಿದರು.
ಯೋಜನೆಗೆ ಡಿ. 26 ರಿಂದ ನೋಂದಣಿ ಆರಂಭವಾಗಲಿದೆ. ನೋಂದಣಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಿ ಸೌಲಭ್ಯ ಪಡೆಯಬೇಕು. ರಾಜ್ಯ ಮಟ್ಟದ ಕಾರ್ಯಕ್ರಮವಾಗಿರುವುದರಿಂದ ಇದು ದೊಡ್ಡಮಟ್ಟದಲ್ಲಿ ನಡೆಯಲಿದೆ. ಅಂದಿನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಸಚಿವ ಸಂಪುಟದ ಸಚಿವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಈಗಾಗಲೇ ಸರ್ಕಾರದಿಂದ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಸೌಲಭ್ಯ ಯಾರಿಗೆ ತಲುಪಿಲ್ಲ ಅದರ ಬಗ್ಗೆ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಗಮನಿಸಿ ಪರಿಹರಿಸಲಾಗುತ್ತಿದೆ. ಅಲ್ಲದೇ ಗ್ರಾಮ ಪಂಚಾಯತ್ ಮಟ್ಟಕ್ಕೆ ಅಧಿಕಾರಿಗಳೇ ಹೋಗಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲಿದ್ದಾರೆ ಎಂದು ತಿಳಿಸಿದರು.
Advertisement