ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ನಾಮಫಲಕಗಳಲ್ಲಿ ಶೇ.60 ಕನ್ನಡ ಭಾಷೆ ಬಳಕೆ ಕಡ್ಡಾಯ; ಫೆ.28 ಗಡುವು: ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆಯಲ್ಲಿ ಇರಬೇಕೆಂದು  ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
Published on

ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವ ಕುರಿತು ನಡೆದ ಉನ್ನತ ಮಟ್ಟದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ ಎಂದರು.

ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿ ಇರತಕ್ಕದ್ದು ಎಂದಿದೆ. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ. ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. 

ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ. ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು ಎಂದು 2022ರಲ್ಲಿ ಹೈಕೋರ್ಟ್ ಆದೇಶಿಸಿದೆ. ರಾಜ್ಯ ಸರ್ಕಾರ ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ. 

ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರೇ ಆಗಲಿ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com