ಫೆ.27ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ: ಅಗತ್ಯ ಸಿದ್ಧತೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ

ಫೆ.27ರಂದು ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದು, ಕಾರ್ಯಕ್ರಮವನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆಗಳ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಸೂಚನೆ ನೀಡಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಬೆಳಗಾವಿ: ಫೆ.27ರಂದು ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದು, ಕಾರ್ಯಕ್ರಮವನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆಗಳ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಸೂಚನೆ ನೀಡಿದ್ದಾರೆ.

ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಮುಖ್ಯ ಕಾರ್ಯದರ್ಶಿಗಳು ಈ ಎರಡೂ ಜಿಲ್ಲೆಗಳ ಉನ್ನತ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿ, ಸಿದ್ಧತೆಗಳನ್ನು ಪರಿಶೀಲಿಸಿದರು.

ಪ್ರಧಾನಿ ಕಾರ್ಯಾಲಯದ ನಿರ್ದೇಶನದಂತೆ ಭದ್ರತಾ ವ್ಯವಸ್ಥೆ, ಶಿಷ್ಟಾಚಾರ, ವೇದಿಕೆ ನಿರ್ಮಾಣ ಸೇರಿದಂತೆ ಪ್ರತಿಯೊಂದು ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು ಎಂದು ವಂದಿತಾ ಶರ್ಮಾ ಸೂಚಿಸಿದರು.

ಅಂತಿಮ ಸಮಯದಲ್ಲಿ ಕೆಲವು ಬದಲಾವಣೆಗಳಾದರೂ ಇದನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳಬೇಕು. ತುರ್ತು ವೈದ್ಯಕೀಯ ಸೌಲಭ್ಯಗಳು, ಭದ್ರತೆ ಮತ್ತು ಸಂಚಾರ ನಿರ್ವಹಣೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ಬೆಳಗಾವಿಯ ಉಪ ಆಯುಕ್ತ ನಿತೇಶ್ ಪಾಟೀಲ್ ಮಾತನಾಡಿ, ‘ಪ್ರಧಾನಿ ಮೋದಿಯವರ ಕಾರ್ಯಕ್ರಮ ಪಟ್ಟಿಯಂತೆ ಸಂಬಂಧಪಟ್ಟ ಇಲಾಖೆಗಳು, ಪ್ರಧಾನ ಮಂತ್ರಿಗಳ ಕಚೇರಿ ಮತ್ತು ಎಸ್‌ಪಿಜಿಯೊಂದಿಗೆ ಚರ್ಚಿಸಿ ಕಾರ್ಯಕ್ರಮದ ಸಿದ್ಧತೆಗಳನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಅಧಿಕಾರಿಗಳ ನಿರ್ದೇಶನದಂತೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ವಿಡಿಯೋ ಕಾನ್ಫರೆನ್ಸ್‌ನಲ್ಲಿ  ಪ್ರಾದೇಶಿಕ ಆಯುಕ್ತ ಎಂ ಜಿ ಹಿರೇಮಠ, ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ ಎಂ ಬಿ ಬೋರಲಿಂಗಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷಲ್ ಭೋಯಾರ್, ಪೊಲೀಸ್ ವರಿಷ್ಠಾಧಿಕಾರಿ ಡಾ ಸಂಜೀವ್ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

ಇದಾದ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಡಿಸಿ ನಿತೇಶ್ ಪಾಟೀಲ್, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲಿರುವುದರಿಂದ ವಾಹನ ನಿಲುಗಡೆ ಹಾಗೂ ಊಟದ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಪ್ರತಿಯೊಬ್ಬ ಅಧಿಕಾರಿಯೂ ತಮಗೆ ವಹಿಸಿರುವ ಜವಾಬ್ದಾರಿಯನ್ನು ನಿಭಾಯಿಸಬೇಕು. ತುರ್ತು ಚಿಕಿತ್ಸಾ ಸೌಲಭ್ಯ, ಶುದ್ಧ ಕುಡಿಯುವ ನೀರು, ಸಂಚಾರಿ ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಸಹಾಯಕ ಆಯುಕ್ತ ಬಲರಾಮ್ ಚವ್ಹಾಣ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ಕೋಣಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ್ ಮಗ್ದುಮ್ ಮತ್ತಿತರರು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com