ಶೇ.40 ಕಮಿಷನ್‌ ಹಗರಣ ಕುರಿತು ನ್ಯಾಯಾಂಗ ತನಿಖೆ: ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರಿಂದ ಶೇಕಡ 40ರಷ್ಟು ಕಮಿಷನ್‌ ಪಡೆಯುತ್ತಿದ್ದ ಆರೋಪ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರಿಂದ ಶೇಕಡ 40ರಷ್ಟು ಕಮಿಷನ್‌ ಪಡೆಯುತ್ತಿದ್ದ ಆರೋಪ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಶೇ.40 ಕಮಿಷನ್ ಸೇರಿ ಕೋವಿಡ್ ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ನೀರಾವರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನೂ ಸರ್ಕಾರ ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಎಲ್ಲಾ ಹಗರಣಗಳನ್ನುನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲು ನಿರ್ಧಾರ ಕೈಗೊಂಡಿದೆ ಎಂದು ವರದಿಗಳು ತಿಳಿಸಿವೆ.

ಈ ಕುರಿತು ನಾಲ್ಕು ದಿನಗಳ ಹಿಂದೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿ, ಕೆಲವು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಸಮಿತಿ ರಚಿಸುವಂತೆ ಸೂಚಿಸಿದ್ದಾರೆಂದು ವರದಿಗಳು ತಿಳಿಸಿವೆ. ಈ ಕುರಿತ ನಿರ್ಧಾರವನ್ನು ಮಂಗಳವಾರ ತೆಗೆದುಕೊಳ್ಳಲಾಗಿದ್ದು, ಶೀಘ್ರದಲ್ಲೇ ಆದೇಶವನ್ನು ಹೊರಡಿಸಲಾಗುವುದು, ”ಎಂದು ಮುಖ್ಯಮಂತ್ರಿಗಳ ಕಚೇರಿಯ ಮೂಲಗಳು ಮಾಹಿತಿ ನೀಡಿವೆ.

ಈ ನಡುವೆ ಸರ್ಕಾರದ ನಿರ್ಧಾವನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದ್ದಾರೆ.

ತನಿಖೆಯಿಂದ ಸತ್ಯಾಂಶಗಳು ಹೊರಬೀಳಲಿದೆ. ಸರ್ಕಾರ ಬಿಜೆಪಿ ಸರ್ಕಾರದ್ದಷ್ಟೇ ಅಲ್ಲ, 2013ರಿಂದ ರಾಜ್ಯದಲ್ಲಿ ನಡೆದಿರುವ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಮಾಜಿ ಸಚಿವ ಹಾಗೂ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅವರು ಹಿಂದಿನ ಬಿಜೆಪಿ ಸರ್ಕಾರದ ಕೆಲವು ಸಚಿವರ ವಿರುದ್ಧ ಮಾಡಿರುವ ಶೇ.40ರಷ್ಟು ಕಮಿಷನ್ ಆರೋಪಕ್ಕೆ ಯಾವುದೇ ಸಾಕ್ಷ್ಯಾಧಾರ ನೀಡದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ತಿಳಿಸಿದರು.

‘ಸರ್ಕಾರ ನಿಜವಾಗಿಯೂ ಭ್ರಷ್ಟಾಚಾರದ ವಿರುದ್ಧವಾಗಿದ್ದರೆ 2013ರಿಂದ 2023ರ ಮಾರ್ಚ್‌ವರೆಗೆ ನಡೆದಿರುವ ಎಲ್ಲಾ ಹಗರಣಗಳ ತನಿಖೆ ನಡೆಸಬೇಕು. ತಪ್ಪಿತಸ್ಥರು ಯಾರೇ ಆಗಿರಲಿ ಶಿಕ್ಷೆಗೆ ಗುರಿಯಾಗಬೇಕು, ಹಗರಣಗಳ ತನಿಖೆಗೆ ಸರ್ಕಾರ ಆಯ್ಕೆಯನ್ನೇಕೆ ಮಾಡುತ್ತಿದೆ? ಎಂದು ಪ್ರಶ್ನಿಸಿದ್ದಾರೆ.

ನಾನಾ ಇಲಾಖೆ ಕಾಮಗಾರಿ ಗುತ್ತಿಗೆಯಲ್ಲಿ ಶೇ.40ರಷ್ಟು ಕಮಿಷನ್‌ ಸಂಗ್ರಹ ನಡೆಯುತ್ತಿದೆ ಎಂಬ ಆರೋಪ ರಾಜಕೀಯ ವಲಯದಲ್ಲಿ ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲೂ ದೊಡ್ಡ ಸದ್ದು ಮಾಡಿತ್ತು. ಈ ಸಂಬಂಧ ರಾಜ್ಯ ಗುತ್ತಿಗೆದಾರರ ಸಂಘ ನೇರ ಆಪಾದನೆ ಮಾಡಿತ್ತು. 40 ಪರ್ಸೆಂಟ್‌ ಕಮಿಷನ್‌ ನೀಡದ ಹೊರತು ಕಾಮಗಾರಿ ಬಿಲ್‌ ಪಾವತಿ ಮಾಡುತ್ತಿಲ್ಲ ಎಂದು ಸಂಘ ಗಂಭೀರ ಆರೋಪ ಮಾಡಿತ್ತು. ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಈ ಸಂಬಂಧ ನೇರವಾಗಿ ಪ್ರಧಾನಿ ಕಾರ್ಯಾಲಯಕ್ಕೆ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದರು.

ಜಲಸಂಪನ್ಮೂಲ, ಲೋಕೋಪಯೋಗಿ ಇಲಾಖೆ ಸೇರಿದಂತೆ ನಾನಾ ಇಲಾಖಾ ಕಾಮಗಾರಿಗಳಲ್ಲಿ ಕಮಿಷನ್‌ ದಂಧೆ ಬಗ್ಗೆ ಆರೋಪ, ಪ್ರತ್ಯಾರೋಪಗಳು ಕಳೆದ 2 -3 ವರ್ಷಗಳಿಂದ ನಡೆದಿದ್ದವು. 40 ಪರ್ಸೆಂಟ್‌ ಕಮಿಷನ್‌ ವಿಚಾರ ಕಳೆದ ವಿಧಾನಸಭಾ ಚುನಾವಣೆಯ ಪ್ರಮುಖ ವಸ್ತು ವಿಷಯವಾಗಿತ್ತು.

40 ಪರ್ಸೆಂಟ್‌ ಕಮಿಷನ್‌ ವಿಚಾರ ಮುಂದಿಟ್ಟುಕೊಂಡು ಸರಕಾರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಹೋರಾಟ ಕೈಗೆತ್ತಿಕೊಂಡಿತ್ತು. 'ಪೇ ಸಿಎಂ' ಅಭಿಯಾನದ ಮೂಲಕ ಬಿಜೆಪಿ ಕೇಂದ್ರ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸುವ ಜೊತೆಗೆ ಸರಕಾರವನ್ನು ಸಾರ್ವಜನಿಕವಾಗಿ ತೀವ್ರ ಮುಜುಗರಕ್ಕೆ ಗುರಿ ಮಾಡಿತ್ತು.

ಸಾಮಾಜಿಕ ಜಾಲತಾಣಗಳಲ್ಲೂ ಈ ಕಮಿಷನ್‌ ದಂಧೆ ವಿಚಾರ ದೊಡ್ಡ ಸದ್ದು ಮಾಡಿತ್ತು. ಪಕ್ಷ ಅಧಿಕಾರಕ್ಕೆ ಬಂದರೆ ಕಮಿಷನ್‌ ದಂಧೆಗೆ ಕಡಿವಾಣ ಹಾಕುವ ಜತೆಗೆ ಬಿಜೆಪಿ ಅವಧಿಯ ಈ ದಂಧೆ ಬಗ್ಗೆ ತನಿಖೆ ನಡೆಸುವುದಾಗಿ ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು.

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಜನರು ಬಿಜೆಪಿಯನ್ನು ತಿರಸ್ಕರಿಸುವಂತೆ ಮಾಡಲು ಕಾಂಗ್ರೆಸ್ ಶೇ.40ರಷ್ಟು ಕಮಿಷನ್ ಆರೋಪವನ್ನೇ ಅಸ್ತ್ರವಾಗಿ ಬಳಕೆ ಮಾಡಿಕೊಂಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com