ಮೋಡ ಬಿತ್ತನೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಎನ್ ಚೆಲುವರಾಯಸ್ವಾಮಿ
ಧಾರವಾಡ: ರಾಜ್ಯ ಸರ್ಕಾರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮೋಡ ಬಿತ್ತನೆ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಎನ್ ಚೆಲುವರಾಯ ಸ್ವಾಮಿ ಸೋಮವಾರ ಹೇಳಿದ್ದಾರೆ.
ರಾಜ್ಯದಲ್ಲಿ ಮುಂಗಾರು ಆರಂಭ ವಿಳಂಬವಾಗಿದ್ದು, ಕೆಲವೆಡೆ ನೀರಿನ ಸಮಸ್ಯೆ ಉಂಟಾಗಿದೆ ಎಂದು ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಗಳ ಪ್ರಕಾರ, ಮುಂಗಾರು ಕಳೆದ ವಾರವೇ ಪ್ರಾರಂಭವಾಗಬೇಕಿತ್ತು. ಉತ್ತಮ ಮುಂಗಾರು ನಿರೀಕ್ಷೆಯಲ್ಲಿ ರೈತರು ಬಿತ್ತನೆ ಬೀಜಗಳನ್ನು ಸಂಗ್ರಹಿಸಿ ಬಿತ್ತನೆಗೆ ಸಿದ್ಧಪಡಿಸಿದ್ದಾರೆ. ಆದಾಗ್ಯೂ, ಮುಂಗಾರು ಪೂರ್ವದಲ್ಲಿ ಉತ್ತಮ ಮಳೆಯಾಗಿರುವ ಕೆಲವು ಭಾಗಗಳಲ್ಲಿ ಕೆಲವು ರೈತರು ಖಾರಿಫ್ ಬೆಳೆಗಳನ್ನು ಬಿತ್ತನೆ ಮಾಡಿದ್ದಾರೆ ಎಂದು ಅವರು ಹೇಳಿದರು.
ಸರ್ಕಾರ ಮುಂದಿನ ಮೂರು ದಿನಗಳ ಕಾಲ ಕಾದು ನೋಡಿದ ಬಳಿಕ ಮೋಡ ಬಿತ್ತನೆ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ಜೂನ್ 15 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದರು.
ಬಿತ್ತನೆಬೀಜ, ರಸಗೊಬ್ಬರಗಳ ಬಫರ್ ದಾಸ್ತಾನು ಇದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು. ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವ ಬಗ್ಗೆ ಮುಖ್ಯಮಂತ್ರಿ ಮತ್ತು ಕ್ಯಾಬಿನೆಟ್ ಸಚಿವರು ನಿರ್ಧರಿಸುತ್ತಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ