ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕೆಂಪಣ್ಣ ಮೌನವಾಗಿರುವುದೇಕೆ?: ಬಸವರಾಜ ಬೊಮ್ಮಾಯಿ
ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಅವರು ಈಗ ಎಲ್ಲಿದ್ದಾರೆ ಎಂಬುದನ್ನು ತಿಳಿಯಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.
ಹಿಂದಿನ ಬಿಜೆಪಿ ಆಡಳಿತಾವಧಿಯಲ್ಲಿ ವಿವಿಧ ಕಾಮಗಾರಿಗಳ ಗುತ್ತಿಗೆದಾರರ ಬಿಲ್ ಕ್ಲಿಯರ್ ಮಾಡಲು ಶೇ 40 ರಷ್ಟು ಕಮಿಷನ್ ಕೇಳಲಾಗುತ್ತಿದೆ ಎಂದು ಆರೋಪಿಸಿ ಕೆಂಪಣ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.
ಬಿಜೆಪಿ ಕಚೇರಿಯಲ್ಲಿ ನಡೆದ ಹಿರಿಯ ಮುಖಂಡರ ಸಭೆಯ ನಂತರ ಬೊಮ್ಮಾಯಿ ಮಾತನಾಡಿ, ಆಡಳಿತಾರೂಢ ಕಾಂಗ್ರೆಸ್ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಲ್ಲಿಸುತ್ತಿರುವ ಬಗ್ಗೆ ಅವರು ಮೌನ ವಹಿಸುತ್ತಿದ್ದಾರೆ. ಭ್ರಷ್ಟಾಚಾರ ಆರೋಪ ಹೊರಿಸಿ ನಡೆಯುತ್ತಿರುವ ಕಾಮಗಾರಿಗಳನ್ನು ನಿಲ್ಲಿಸಲು ಕಾಂಗ್ರೆಸ್ ಸರ್ಕಾರ ಹೆಚ್ಚಿನ ಆಸಕ್ತಿ ತೋರಿಸುತ್ತಿದೆ ಎಂದು ದೂರಿದರು.
'ನಮ್ಮ ಕಾಲದಲ್ಲಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದ ಕೆಂಪಣ್ಣ ಈ ಕಾಮಗಾರಿಗಳನ್ನು ನಿಲ್ಲಿಸುವ ಬಗ್ಗೆ ಚಕಾರ ಎತ್ತುತ್ತಿಲ್ಲ. ಶೀಘ್ರವೇ ಮಳೆಗಾಲ ಆರಂಭವಾಗಲಿದ್ದು, ಏಕಾಏಕಿ ಸ್ಥಗಿತಗೊಂಡಿರುವ ಕಾಮಗಾರಿಗಳು ಪುನರಾರಂಭವಾಗುವುದಿಲ್ಲ' ಎಂದು ಆರೋಪಿಸಿದರು.
ಈಗಿನ ಸಚಿವ ಸಂಪುಟದ ಕೆಲ ಸಚಿವರು ಕಾಮಗಾರಿಗಳಿಗೆ ಕಮಿಷನ್ ನಿಗದಿ ಮಾಡುವುದರಲ್ಲಿ ನಿರತರಾಗಿದ್ದಾರೆ. ನಮ್ಮ ಕಾಲದಲ್ಲಿ ಕ್ರುಸೇಡರ್ ಆಗಿದ್ದ ಕೆಂಪಣ್ಣ ಈಗ ಮೌನ ವಹಿಸಿದ್ದಾರೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ