ಆಷಾಢಮಾಸ: ಪ್ರತಿ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್​, ಖಾಸಗಿ ವಾಹನ ನಿಷೇಧ

ಆಷಾಢಮಾಸದ ಪ್ರತಿ ಶುಕ್ರವಾರ ಮತ್ತು ಚಾಮುಂಡೇಶ್ವರಿ ವರ್ಧಂತಿ ದಿನದಂದು ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು, ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಅವರು...
ಚಾಮುಂಡೇಶ್ವರಿ ದೇವಸ್ಥಾನ
ಚಾಮುಂಡೇಶ್ವರಿ ದೇವಸ್ಥಾನ

ಮೈಸೂರು: ಆಷಾಢಮಾಸದ ಪ್ರತಿ ಶುಕ್ರವಾರ ಮತ್ತು ಚಾಮುಂಡೇಶ್ವರಿ ವರ್ಧಂತಿ ದಿನದಂದು ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು, ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಅವರು ಗುರುವಾರ ತಿಳಿಸಿದ್ದಾರೆ.

ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತರಿಗೆ ಉಚಿತ ಕೆಎಸ್‌ಆರ್‌ಟಿಸಿ ಬಸ್​ ವ್ಯವಸ್ಥೆ ಕಲ್ಪಿಸಲಾಗಿದೆ. ಲಲಿತಮಹಲ್ ಮೈದಾನದಿಂದ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ಸೇವೆ ದೊರೆಯಲಿದೆ ಎಂದು ಅವರು ಹೇಳಿದ್ದಾರೆ.

ಆಷಾಢ ಮಾಸದ ಮೊದಲ ಶುಕ್ರವಾರದಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಬೆಟ್ಟಕ್ಕೆ ಬರುವ ಭಕ್ತರು ತಮ್ಮ ವಾಹನಗಳನ್ನು ಲಲಿತಮಹಲ್‌ ಮೈದಾನದಲ್ಲಿ ನಿಲುಗಡೆ ಮಾಡಿ ಜಿಲ್ಲಾಡಳಿತ ವತಿಯಿಂದ ವ್ಯವಸ್ಥೆ ಮಾಡಿರುವ ಬಸ್‌ಗಳಲ್ಲಿ ದೇವಸ್ಥಾನಕ್ಕೆ ತೆರಳಬಹುದು. ಬೆಳಗಿನ ಜಾವ 3 ಗಂಟೆಯಿಂದ ರಾತ್ರಿ 10ರವರೆಗೆ ಬಸ್‌ ಸೌಲಭ್ಯ ಇರುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ದೇವರ ದರ್ಶನಕ್ಕೆ 300 ಮತ್ತು 50 ರೂ. ಟಿಕೆಟ್ ವಿತರಣೆ ಮಾಡಲಾಗುವುದು ಎಂದೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಬಾರಿ ಪ್ಲಾಸ್ಟಿಕ್​​ ಮುಕ್ತ ಆಷಾಢಮಾಸ ಆಚರಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್​ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಮೆಟ್ಟಿಲು, ದೇವಸ್ಥಾನ ಸುತ್ತಮುತ್ತ ಸಿಸಿ ಕ್ಯಾಮರಾಗಳ ಅಳವಡಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಭಕ್ತರಿಗೆ ಪ್ರಸಾದ ವಿತರಣೆ ಮಾಡುವವರಿಗೆ ಪ್ರಮಾಣಪತ್ರ ಕಡ್ಡಾಯವಾಗಿದೆ. ಆಹಾರ ಸುರಕ್ಷತಾ ಅಧಿಕಾರಿ ಬಳಿಯಿಂದ ಪ್ರಮಾಣಪತ್ರ ಪಡೆಯಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com