ಲಂಚ ಪ್ರಕರಣ: ಲೋಕಾಯುಕ್ತದಲ್ಲಿ ಹಸ್ತಕ್ಷೇಪ ಮಾಡುವ ಪ್ರಶ್ನೆಯೇ ಇಲ್ಲ- ಬಿಎಸ್ ಯಡಿಯೂರಪ್ಪ

ಲಂಚ ಪಡೆದು ಸಿಕ್ಕಿಬಿದ್ದ ಆರೋಪಿ ಪಕ್ಷದ ಶಾಸಕ ಮತ್ತು ಅವರ ಮಗನನ್ನು ರಾಜ್ಯದ ಬಿಜೆಪಿ ಸರ್ಕಾರ ರಕ್ಷಿಸುವುದಿಲ್ಲ ಮತ್ತು ಲೋಕಾಯುಕ್ತ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ಹೇಳಿದ್ದಾರೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: ಲಂಚ ಪಡೆದು ಸಿಕ್ಕಿಬಿದ್ದ ಆರೋಪಿ ಪಕ್ಷದ ಶಾಸಕ ಮತ್ತು ಅವರ ಮಗನನ್ನು ರಾಜ್ಯದ ಬಿಜೆಪಿ ಸರ್ಕಾರ ರಕ್ಷಿಸುವುದಿಲ್ಲ ಮತ್ತು ಲೋಕಾಯುಕ್ತ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಈಗಾಗಲೇ ಹೇಳಿಕೆ ನೀಡಿದ್ದಾರೆ. ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಯಾರೂ ಪ್ರಯತ್ನಿಸುತ್ತಿಲ್ಲ. ಕಾನೂನು ಚೌಕಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಹೀಗಾಗಿ, ನಾನು ಅದರ ಬಗ್ಗೆ ಇನ್ಮುಂದೆ ಮಾತನಾಡುವುದಿಲ್ಲ' ಎಂದು ಅವರು ಹೇಳಿದರು.

ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಮುಖಂಡರು ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಲು ಯಡಿಯೂರಪ್ಪ ನಿರಾಕರಿಸಿದರು.

ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಸಿದ್ಧತೆ ನಡೆಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. 

ಅವರ ಪುತ್ರ ಪ್ರಶಾಂತ್ ಮಾಡಾಳ್ ಟೆಂಡರ್ ಮಂಜೂರು ಮಾಡಲು 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಪ್ರಕರಣದಲ್ಲಿ ವಿರೂಪಾಕ್ಷಪ್ಪ ಅವರನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ. ಈ ಬೆಳವಣಿಗೆ ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಭಂಗ ಉಂಟು ಮಾಡಿದೆ.

ಪ್ರಶಾಂತ್ ಮಾಡಾಳ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಅಧ್ಯಕ್ಷರಾಗಿದ್ದ ವಿರೂಪಾಕ್ಷಪ್ಪ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದು, ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ಇದು ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ನಡೆದಿರುವ ಷಡ್ಯಂತ್ರವಾಗಿದೆ. ಆದರೂ ನನ್ನ ಮೇಲೆ ಆರೋಪ ಬಂದಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದರು.

ಕ್ರೆಸೆಂಟ್ ರಸ್ತೆಯಲ್ಲಿರುವ ಪ್ರಶಾಂತ್ ಮಾಡಾಲ್ ಅವರ ಖಾಸಗಿ ಕಚೇರಿಯಲ್ಲಿ ಒಟ್ಟು 2.02 ಕೋಟಿ ರೂ., ವಿರೂಪಾಕ್ಷಪ್ಪ ಅವರ ನಿವಾಸದಲ್ಲಿ 6.10 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದೇ ವೇಳೆ ಬೊಮ್ಮಾಯಿ ಅವರ ನಿವಾಸದ ಎದುರು ಕಾಂಗ್ರೆಸ್‌ ಪಕ್ಷವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com