ಭ್ರಷ್ಟಾಚಾರ ಪ್ರಕರಣಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ: ಸಿಎಂ ಬೊಮ್ಮಾಯಿ

ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡುವ ನೈತಿಕ ಶಕ್ತಿ ಬಿಜೆಪಿಗಿದೆ, ಭ್ರಷ್ಟಾಚಾರ ಪ್ರಕರಣಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಯಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದರು.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬಾಳೆಹೊನ್ನೂರು: ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡುವ ನೈತಿಕ ಶಕ್ತಿ ಬಿಜೆಪಿಗಿದೆ, ಭ್ರಷ್ಟಾಚಾರ ಪ್ರಕರಣಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಯಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದರು.

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೆಕ್ಕಕ್ಕೆ ಸಿಗದ ಎಂಟು ಕೋಟಿ ರೂ. ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ನಿವಾಸದಿಂದ ವಶಪಡಿಸಿಕೊಳ್ಳಲಾಗಿದ್ದು, ಅವರ ಪುತ್ರ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರದ ಸಚಿವ ಪುಟ್ಟರಂಗಶೆಟ್ಟಿ ವಿಧಾನಸೌಧದಲ್ಲಿ 25 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ್ದರು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರಾ? ಆಗ ಲೋಕಾಯುಕ್ತ ಇದ್ದಿದ್ದರೆ ಸಚಿವರ ಬಂಧನವಾಗುತ್ತಿತ್ತು. ಆದರೆ, ಇಂತಹ ಪ್ರಕರಣಗಳನ್ನು ಮುಚ್ಚಿ ಹಾಕಲು ಭ್ರಷ್ಟಾಚಾರ ನಿಗ್ರಹ ಸಂಸ್ಥೆಯನ್ನು ದುರ್ಬಲಗೊಳಿಸಿದರು ಎಂದು ಆರೋಪಿಸಿದರು.

ಈ ನಡುವೆ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಶನಿವಾರ ಬೆಂಗಳೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.

ಈ ಕುರಿತು ಪ್ರತಿಕ್ರಿಯೆ ನೀಡಿ, ಯಾರು ಮತ್ತು ಏಕೆ ಪ್ರತಿಭಟಿಸಿದರು ಎಂಬುದು ಜನರಿಗೆ ತಿಳಿದಿದೆ. ಆ ಪಕ್ಷ (ಕಾಂಗ್ರೆಸ್) ಮತ್ತೆ ಅಧಿಕಾರಕ್ಕೆ ಬರಲು ಬಯಸುತ್ತಿದ್ದು, ತಮ್ಮ ವಿರುದ್ಧದ ಪ್ರಕರಣಗಳನ್ನು ಮುಚ್ಚಿಹಾಕಲು ಈ ಪ್ರಯತ್ನಗಳನ್ನು ಮಾಡುತ್ತಿದೆ. ಕಾಂಗ್ರೆಸ್ ನಾಯಕರು ಕೊಲೆ, ಸುಲಿಗೆ, ಭ್ರಷ್ಟಾಚಾರ ಮತ್ತು ಲೂಟಿಯಲ್ಲಿ ತೊಡಗಿದ್ದಾರೆ. ಆಗಿನ ಕಾಂಗ್ರೆಸ್ ಸರ್ಕಾರದ ಸುಮಾರು 59 ಪ್ರಕರಣಗಳನ್ನು ಲೋಕಾಯುಕ್ತಕ್ಕೆ ಒಪ್ಪಿಸಲಾಗಿದ್ದು, ಸತ್ಯ ಹೊರಬರಲಿದೆ ಎಂದು ಹೇಳಿದರು.

ಬಳಿಕ ವಿರೂಪಾಕ್ಷಪ್ಪ ಪ್ರಕರಣ ಕುರಿತು ಮಾತನಾಡಿ, ಶಾಸಕರ ರಾಜೀನಾಮೆ ಕೇಳುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದರು.

ನಂಚಕ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶಿವಾಜಿ ಪ್ರತಿಮೆಯನ್ನು ಮತ್ತೊಮ್ಮೆ ಅನಾವರಣಗೊಳಿಸಿರುವುದು ಹಾಸ್ಯಾಸ್ಪದ ಎಂದು ಬಣ್ಣಿಸಿದ ಅವರು, ಸರ್ಕಾರದ ಅನುದಾನದಲ್ಲಿ ಪ್ರತಿಮೆಯನ್ನು ನಿರ್ಮಿಸಿ ಔಪಚಾರಿಕವಾಗಿ ಉದ್ಘಾಟಿಸಲಾಗಿದೆ ಎಂದು ಹೇಳಿದರು.

ಸಾರ್ವಜನಿಕರಿಗೆ ಔಪಚಾರಿಕವಾಗಿ ಪ್ರತಿಮೆಯನ್ನು ಅನಾವರಣಗೊಳಿಸಿದ ಬಳಿಕ ಮರು-ಉದ್ಘಾಟನೆ ಮಾಡುವ ಬಗ್ಗೆ ಯಾರೂ ನನ್ನನ್ನು ಕೇಳಿಲ್ಲ. ಇದು ಅವರ ಅಧಿಕಾರದ ಹಸಿವನ್ನು ತೋರಿಸುತ್ತದೆ ಎಂದರು.

ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಿರುವ ಕುರಿತು ಪ್ರತಿಕ್ರಿಯಿಸಿ, ಸರ್ಕಾರವು ಎನ್‌ಐಎಯೊಂದಿಗೆ ಎಲ್ಲಾ ವಿವರಗಳನ್ನು ಹಂಚಿಕೊಂಡಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com