ಕರ್ನಾಟಕ ಚುನಾವಣೆ ಫಲಿತಾಂಶಕ್ಕೆ ಕೌಂಟ್ ಡೌನ್; ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಭದ್ರತೆ

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ಮುಗಿದು ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. 
ವಿಧಾನಸೌಧ
ವಿಧಾನಸೌಧ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ಮುಗಿದು ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. 

ನಾಳೆ ಮಧ್ಯಾಹ್ನ 12 ಗಂಟೆಗೆ ಹೊತ್ತಿಗೆ ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಸ್ಪಷ್ಟ ಚಿತ್ರಣ ಹೊರಬರಲಿದೆ. ಸಂಜೆ ವೇಳೆಗೆ ಪೂರ್ಣ ಫಲಿತಾಂಶ ಪ್ರಕಟವಾಗಲಿದೆ. ಹಲವು ಸುತ್ತುಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳು, ಅಂಚೆ ಮತಗಳ ಲೆಕ್ಕ ಹಾಕಲಾಗುತ್ತದೆ. 

ಮತ ಎಣಿಕೆ ಕೇಂದ್ರಗಳು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ 34 ಕೇಂದ್ರಗಳಲ್ಲಿ ಏಕಕಾಲಕ್ಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತ ಯಂತ್ರಗಳನ್ನು ಭದ್ರವಾಗಿ ಇಡಲಾಗಿದ್ದು, ಸ್ಟ್ರಾಂಗ್ ರೂಂಗಳಲ್ಲಿ 3 ಹಂತದ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ಬಿಗಿ ಭದ್ರತೆ: 28 ವಿಧಾನಸಭೆ ಕ್ಷೇತ್ರ ಹೊಂದಿರುವ ಬೆಂಗಳೂರು ನಗರದಲ್ಲಿ ನಾಳೆ ಮತ ಎಣಿಕೆ ಸಂದರ್ಭದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 10 ಡಿಸಿಪಿಗಳು ಮತ್ತು ಇತರ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸುವುದರೊಂದಿಗೆ ನಗರದ ಎಲ್ಲಾ ಐದು ಎಣಿಕೆ ಕೇಂದ್ರಗಳಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. 

ಪ್ರತಿ ಮತ ಎಣಿಕೆ ಕೇಂದ್ರದಲ್ಲಿ ಅರೆಸೇನಾ ಪಡೆಗಳ ಜೊತೆಗೆ ಎಸಿಪಿಗಳು, ಇನ್‌ಸ್ಪೆಕ್ಟರ್‌ಗಳು, ಸಬ್‌ಇನ್‌ಸ್ಪೆಕ್ಟರ್‌ಗಳ ನಂತರ ಇಬ್ಬರು ಡಿಸಿಪಿಗಳು ಇರುತ್ತಾರೆ. ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಕೂಡ ಜಾರಿ ಮಾಡಲಾಗಿದೆ. ಮತ ಎಣಿಕೆ ಸಂದರ್ಭದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ವಿಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್, ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜು, ತಿಲಕನಗರದ ಎಸ್‌ಎಸ್‌ಎಂಆರ್‌ವಿ ಕಾಲೇಜು ಮತ್ತು ದೇವನಹಳ್ಳಿಯ ಆಕಾಶ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮತ ಎಣಿಕೆ ಕೇಂದ್ರಗಳಿವೆ.

ಪೂರ್ವ ಮತ್ತು ಪಶ್ಚಿಮ ವಿಭಾಗದ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು ಭದ್ರತಾ ವ್ಯವಸ್ಥೆಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ. 10 ಡಿಸಿಪಿಗಳು, 15 ಸಹಾಯಕ ಪೊಲೀಸ್ ಆಯುಕ್ತರು (ACP's), 38 ಪೊಲೀಸ್ ಇನ್ಸ್‌ಪೆಕ್ಟರ್‌ಗಳು, 250 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳು ಮತ್ತು ನಗರ ಪೊಲೀಸ್‌ನ ಇತರ 1,200 ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಅರೆಸೇನಾ ಪಡೆಗಳ 12 ಕಂಪನಿಗಳು, 36 ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಮತ್ತು ಸಿಟಿ ಆರ್ಮ್ಡ್ ರಿಸರ್ವ್ (CAR) ತುಕಡಿಗಳನ್ನು ನಿಯೋಜಿಸಲಾಗಿದೆ. 

ಪ್ರತಿ ಮತ ಎಣಿಕೆ ಕೇಂದ್ರಕ್ಕೆ ಮೂವರು ಎಸಿಪಿಗಳು, ಆರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಮತ್ತು 50 ಸಬ್ ಇನ್‌ಸ್ಪೆಕ್ಟರ್‌ಗಳ ಜೊತೆಗೆ 300 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಜಿಲ್ಲೆಗಳಾದ್ಯಂತ ಮತ ಎಣಿಕೆಗೆ ಸಕಲ ಸಿದ್ಧತೆ: ಬೆಂಗಳೂರು ನಗರದಂತೆ ರಾಜ್ಯದ ಇತರ 30 ಜಿಲ್ಲೆಗಳಲ್ಲಿ ಸಹ ನಾಳೆ ಮತ ಎಣಿಕೆಗೆ ತಯಾರಿ ನಡೆಸಲಾಗಿದೆ. ಮತಗಟ್ಟೆಗಳಿಗೆ ಏಜೆಂಟ್ ಗಳನ್ನು ಕರೆತರಲಾಗುತ್ತಿದೆ. ಮತ ಎಣಿಕೆ ನಡೆಯುವ ವೇಳೆ ಯಾವುದೇ ಮಾಹಿತಿ ಸೋರಿಕೆಯಾಗದಂತೆ, ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯಾದ್ಯಂತ ಖಾಕಿ ಸರ್ಪಗಾವಲು: ಮತ ಎಣಿಕೆ ನಡೆಯುವ ಸಮಯದಲ್ಲಿ ಮತ್ತು ಫಲಿತಾಂಶ ಬಂದ ನಂತರ ಮೂರೂ ಪಕ್ಷಗಳ ಬೆಂಬಲಿಗರು, ಕಾರ್ಯಕರ್ತರ ಮಧ್ಯೆ ಘರ್ಷಣೆ, ಗಲಾಟೆ ನಡೆಯುವ ಸಾಧ್ಯತೆಯಿದ್ದು ಪರಿಸ್ಥಿತಿ ಕೈಮೀರದಂತೆ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ. ಅದೇ ರೀತಿ ರಾಜ್ಯಾದ್ಯಂತ ಮದ್ಯ ಮಾರಾಟ ಕೂಡ ನಿಷೇಧ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com