ರಾಜ್ಯ ವಿಧಾನಸಭಾ ಚುನಾವಣೆ 2023: ಸ್ಪಷ್ಟ ಬಹುಮತದತ್ತ ಕಾಂಗ್ರೆಸ್, ಸಿಎಂ ಆಯ್ಕೆಗೆ ಶುರುವಾಯ್ತು ಕಸರತ್ತು, ಯಾರಿಗೆ ಸಿಗಲಿದೆ ಪಟ್ಟ?

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳಲು ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತಪಡೆದು ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಾಗತೊಡಗಿದೆ. ಸ್ಪಷ್ಟಬಹುಮತದತ್ತ ಕಾಂಗ್ರೆಸ್ ಸಾಗಿದ್ದು, ಈಗಾಗಲೇ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳಲು ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತಪಡೆದು ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಾಗತೊಡಗಿದೆ. ಸ್ಪಷ್ಟಬಹುಮತದತ್ತ ಕಾಂಗ್ರೆಸ್ ಸಾಗಿದ್ದು, ಈಗಾಗಲೇ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಈ ನಡುವಲ್ಲೇ ಮುಖ್ಯಮಂತ್ರಿ ಯಾರಾಗುತ್ತಾರೆನ್ನುವ ಬಗ್ಗೆಯೂ ಚರ್ಚೆಗಳು ಆರಂಭವಾಗಿವೆ.

ಕಾಂಗ್ರೆಸ್​ ಪಕ್ಷದಲ್ಲಿ ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಗೆದ್ದರೆ, ಅವರು ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಸ್ಫರ್ಧಿಯಾಗಲಿದ್ದಾರೆ. ಅದರಂತೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಕೂಡ ಸಿದ್ದರಾಮಯ್ಯ ಬದಲಿಗೆ ತಮ್ಮನ್ನೇ ಮುಖ್ಯಮಂತ್ರಿ ಮಾಡುವಂತೆ ಪಕ್ಷದ ಹೈ ಕಮಾಂಡ್​ ಮೇಲೆ ಒತ್ತಡ ಹೇರಿದ್ದಾರೆಂಬ ಮಾತುಗಳು ಕೇಳಿಬಂದಿವೆ.

ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದರೆ, ಹಿರಿಯ ಕಾಂಗ್ರೆಸ್​ ಮುಖಂಡರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಅವರಲ್ಲಿ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಗೊಂದಲಗಳು ಹೈಕಮಾಂಡ್'ಗೆ ಎದುರಾಗಲಿದೆ.

ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಕರೆದಿದ್ದು, ಶಾಸಕರ ವೋಟಿಂಗ್ ಆಧಾರದ ಮೇಲೆ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡುವ ತೀರ್ಮಾನಕ್ಕೆ ಹೈಕಮಾಂಡ್ ಬರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಚುನಾವಣೆ ಮೂಲಕವೇ ಆಯ್ಕೆ ಮಾಡುವುದು ಅಂತಿಮವಾದರೆ, ಶಾಸಕರ ಪ್ರತಿ ವೋಟು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಅವರಿಗೆ ಅತ್ಯಗತ್ಯವಾಗಿರುತ್ತದೆ.

ಹೀಗಾಗಿ ಚುನಾವಣೆಯಲ್ಲಿ ಗೆಲ್ಲುವ ಭರವಸೆ ಇರುವ, ಕಾಂಗ್ರೆಸ್​ ಅಭ್ಯರ್ಥಿಗಳ ಬೆಂಬಲವನ್ನು ಪಡೆಯಲು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರು ತಮ್ಮದೇ, ನೆಟ್​ವರ್ಕ್​ಗಳ ಮೂಲಕ ಕಸರತ್ತು ನಡೆಸುತ್ತಿದ್ದಾರೆಂದ ಮಾತುಗಳು ಕೇಳಿ ಬರುತ್ತಿವೆ.

ಈಗಾಗಲೇ ಹೈಕಮಾಂಡ್ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯೂ ಸೇರಿದಂತೆ ಕಾಂಗ್ರೆಸ್​ ಸರ್ಕಾರದ ರಚನೆ ಪ್ರಕ್ರಿಯೆ ಸುಗಮಗೊಳಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್​ ಸಿಂಗ್​ ಸುರ್ಜೇವಾಲಾ ಮತ್ತು ಕೆಸಿ ವೇಣುಗೋಪಾಲ್​ ಅವರನ್ನು ಪ್ರತಿನಿಧಿಯನ್ನಾಗಿ ರಾಜ್ಯಕ್ಕೆ ರವಾನಿಸಿದೆ.

ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರು ಬೆಂಗಳೂರಿನಲ್ಲಿಯೇ ಬೀಡು ಬಿಟ್ಟಿದ್ದು, ಅವರು ಕೂಡ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ, ಸರ್ಕಾರ ರಚನೆಯಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com