ಸಿಎಂ ಆಗಿ ಆಯ್ಕೆಯಾದ ಸಿದ್ದರಾಮಯ್ಯನವರು ಬೆಂಗಳೂರಿಗೆ ಆಗಮಿಸಿದ ವೇಳೆ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತ ನೀಡಿದ ಬಗೆ
ಸಿಎಂ ಆಗಿ ಆಯ್ಕೆಯಾದ ಸಿದ್ದರಾಮಯ್ಯನವರು ಬೆಂಗಳೂರಿಗೆ ಆಗಮಿಸಿದ ವೇಳೆ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತ ನೀಡಿದ ಬಗೆ

ಸಿದ್ದರಾಮಯ್ಯ, ಶಿವಕುಮಾರ್ ಇಂದು ದೆಹಲಿಗೆ: ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಮಾನ ಮನಸ್ಕ ಪಕ್ಷಗಳ ನಾಯಕರು ಭಾಗಿ

ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಕಗ್ಗಂಟು ಬಗೆಹರಿದು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ನಾಳೆ ಮೇ 20ರಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಕಗ್ಗಂಟು ಬಗೆಹರಿದು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ನಾಳೆ ಮೇ 20ರಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ನಿನ್ನೆ ರಾತ್ರಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು. ಇದಾದ ಬಳಿಕ ಈಗ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆ ಪ್ರಮುಖ ನಾಯಕರಿಗೆ ಪ್ರಮುಖ ಸವಾಲಾಗಿದೆ. 

ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರು ಲಾಬಿ ನಡೆಸುತ್ತಿದ್ದಾರೆ. ಅವರ ಪರವಾಗಿ ಸಮುದಾಯದ ಮುಖಂಡರು, ಮಠಾಧೀಶರು ಕೂಡ ಬೇಡಿಕೆಯಿಡುತ್ತಿದ್ದಾರೆ. ಸಚಿವ ಸಂಪುಟ ರಚನೆ ಬಗ್ಗೆ ಇಂದು ಪಟ್ಟಿ ಅಂತಿಮವಾಗುವ ಸಾಧ್ಯತೆಯಿದೆ. 

ಬಲ್ಲ ಮೂಲಗಳ ಪ್ರಕಾರ ಸಿಎಂ ಮತ್ತು ಡಿಸಿಎಂ ಜೊತೆ ನಾಳೆ 20 ಜನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೊದಲ ಹಂತದಲ್ಲಿ 10ರಿಂದ 15 ಅಥವಾ 20 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಎರಡನೇ ಹಂತದಲ್ಲಿ ಪೂರ್ಣ ಪ್ರಮಾಣದಲ್ಲಿ ಸಚಿವ ಸ್ಥಾನ ಭರ್ತಿಗೆ ಚಿಂತನೆ ನಡೆಸಲಾಗಿದೆ.

ಸಿದ್ದರಾಮಯ್ಯ ಇಂದು ದೆಹಲಿಗೆ: ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ರಚನೆ, ತಮ್ಮ ಸಂಪುಟಕ್ಕೆ ಸೇರ್ಪಡೆ ಮಾಡುವ ಸದಸ್ಯರ ಹೆಸರುಗಳ ಪಟ್ಟಿಯನ್ನು ಹಿಡಿದುಕೊಂಡು ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ಇಂದು ಬೆಳಗ್ಗೆಯೇ ಹೋಗುತ್ತಿದ್ದಾರೆ. ಅವರ ಜೊತೆ ಡಿಸಿಎಂ ಡಿ ಕೆ ಶಿವಕುಮಾರ್ ಸಹ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. 

ಸಿಎಂಗಳು, ಸಮಾನ ಪಕ್ಷಗಳ ನಾಯಕರು ಭಾಗಿ:  ಬೆಂಗಳೂರಿನಲ್ಲಿ ನಾಳೆ ಮಧ್ಯಾಹ್ನ ನಡೆಯಲಿರುವ ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಮಾನ ಮನಸ್ಕ ವಿರೋಧ ಪಕ್ಷಗಳ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಲವು ಮುಖ್ಯಮಂತ್ರಿಗಳು ಮತ್ತು ಪಕ್ಷದ ಮುಖಂಡರಿಗೆ ಆಹ್ವಾನವನ್ನು ನೀಡಿದ್ದಾರೆ. ಕಾರ್ಯಕ್ರಮಕ್ಕೆ ವೈಯಕ್ತಿಕವಾಗಿ ಆಹ್ವಾನಿಸಿದ್ದಾರೆ.

ಖರ್ಗೆ ಅವರು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಆಹ್ವಾನಿಸಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರಿಗೂ ಆಹ್ವಾನ ಕಳುಹಿಸಲಾಗಿದೆ.

ಇದನ್ನೂ ಓದಿ: ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ: ಮೇ.20ಕ್ಕೆ ಪದಗ್ರಹಣ

ತೆಲಂಗಾಣ ಮುಖ್ಯಮಂತ್ರಿ ಮತ್ತು ಬಿಆರ್‌ಎಸ್ ನಾಯಕ ಕೆ ಚಂದ್ರಶೇಖರ್ ರಾವ್, ಒಡಿಶಾ ಮುಖ್ಯಮಂತ್ರಿ ಮತ್ತು ಬಿಜೆಡಿ ನಾಯಕ ನವೀನ್ ಪಟ್ನಾಯಕ್, ಆಂಧ್ರಪ್ರದೇಶ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ಸಿಪಿ ನಾಯಕ ವೈಎಸ್ ಜಗನ್ ಮೋಹನ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಆಹ್ವಾನ ಕಳುಹಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರಿಗೂ ಆಹ್ವಾನವನ್ನು ಕಳುಹಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಖರ್ಗೆ ಅವರು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಆಹ್ವಾನ ಕಳುಹಿಸಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ದೆಹಲಿಯಲ್ಲಿರುವ ಸೋರೆನ್ ಅವರು ಮೊನ್ನೆ ಮೇ 16 ರಂದು ಖರ್ಗೆ ಅವರನ್ನು ಭೇಟಿ ಮಾಡಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದರು.

ಖರ್ಗೆ ಅವರು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರಿಗೂ ಖುದ್ದು ಕರೆ ಮಾಡಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವುದನ್ನು ಖಚಿತಪಡಿಸಿದ್ದಾರೆ. ಇದೇ ರೀತಿಯ ಆಹ್ವಾನವನ್ನು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರಿಗೂ ಕಳುಹಿಸಲಾಗಿದೆ.

ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಯು ವಕ್ತಾರ ರಾಜೀಬ್ ರಂಜನ್ ಹೇಳಿದ್ದಾರೆ.

ಸಿಪಿಐಎಂ ನಾಯಕ ಸೀತಾರಾಂ ಯೆಚೂರಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಮತಾ ಬ್ಯಾನರ್ಜಿ ಅವರನ್ನು ಆಹ್ವಾನಿಸಲಾಗಿದೆ. ಆದರೆ ಅವರು ಭಾಗವಹಿಸುತ್ತಿಲ್ಲ. 

ಕಾಂಗ್ರೆಸ್ ಅಧ್ಯಕ್ಷ ಮತ್ತು ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಎಂ ಕೆ ಸ್ಟಾಲಿನ್ ಅವರಿಗೆ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಾನ ಮನಸ್ಕ ಪಕ್ಷದ ನಾಯಕರನ್ನು ಆಹ್ವಾನಿಸುತ್ತಿದ್ದೇವೆ ಎಂದರು. 

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಆಹ್ವಾನ ನೀಡಲಾಗಿದೆ. 

ಅಲ್ಲದೆ, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರನ್ನೂ ಆಹ್ವಾನಿಸಲಾಗಿದ್ದು, ಅವರೆಲ್ಲ ಭಾಗವಹಿಸುವ ನಿರೀಕ್ಷೆಯಿದೆ. 

2024ರ ಲೋಕಸಭೆ ಚುನಾವಣೆಗೆ ಒಗ್ಗಟ್ಟು ಪ್ರದರ್ಶನ?: 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷ ನಾಯಕರನ್ನು ಒಟ್ಟುಗೂಡಿಸುವ ವೇದಿಕೆಯಾಗಿ ಸಿದ್ದರಾಮಯ್ಯನವರ ಪ್ರಮಾಣವಚನ ಸಮಾರಂಭವನ್ನು ಕಾಂಗ್ರೆಸ್ ಮಾಡಲು ಬಯಸುತ್ತಿದ್ದರೂ, ಕೆಲವು ಪ್ರಮುಖ ನಾಯಕರು ನಾಳೆ ಅನುಪಸ್ಥಿತರಾಗಬಹುದು. 

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್ ಆಹ್ವಾನ ನೀಡಿದರೂ ಸಮಾರಂಭದಿಂದ ಹೊರಗುಳಿಯಬಹುದು ಎಂದು ಮೂಲಗಳು ತಿಳಿಸಿವೆ. ಮಮತಾ ಪ್ರಮಾಣ ವಚನದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ ಎಂದು ತೃಣಮೂಲದ ಹಿರಿಯ ಸಂಸದರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಆದರೆ, ಮಮತಾ ಪ್ರತಿನಿಧಿಯನ್ನು ಕಳುಹಿಸಬಹುದು ಎಂದು ನಾಯಕ ಹೇಳಿದರು.

ಬಿಜೆಪಿ ವಿರೋಧಿ ಪಾಳಯದಲ್ಲಿ ಪ್ರಮುಖ ನಾಯಕಿಯಾಗಿರುವ ಮಮತಾ ಬ್ಯಾನರ್ಜಿ, ಕರ್ನಾಟಕ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಕಾಂಗ್ರೆಸ್‌ನತ್ತ ತಮ್ಮ ನಿಲುವು ಬದಲಿಸಿದ್ದಾರೆ. ಕಾಂಗ್ರೆಸ್ ಪ್ರಮುಖವಾಗಿರುವ ರಾಜ್ಯಗಳಲ್ಲಿ ಬೆಂಬಲಿಸುವುದಾಗಿ ಬ್ಯಾನರ್ಜಿ ಹೇಳಿದ್ದಾರೆ. ಕಾಂಗ್ರೆಸ್ ಕೆಲವು ತ್ಯಾಗಗಳನ್ನು ಮಾಡಬೇಕು. ಇತರ ರಾಜಕೀಯ ಪಕ್ಷಗಳಿಗೆ ಇದೇ ರೀತಿಯ ಬೆಂಬಲವನ್ನು ನೀಡಬೇಕು ಎಂದು ಅವರು ಹೇಳಿದರು.

ಬಿಜೆಪಿ ವಿರೋಧಿ ಗುಂಪಿನಲ್ಲಿ ಪ್ರಮುಖವಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. 

2018ರಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಬಿಜೆಪಿಯೇತರ ಆಡಳಿತವಿರುವ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.ರಾಜ್ಯದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಖುದ್ದು ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ.

X

Advertisement

X
Kannada Prabha
www.kannadaprabha.com