'ಗ್ಯಾರಂಟಿ ಭಾಗ್ಯ': ಇಂದು ಸಂಪುಟ ಸಹೋದ್ಯೋಗಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ, ಜೂನ್ 1ರಿಂದ ಜಾರಿ?

ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿರುವ ವಾಗ್ದಾನಗಳನ್ನು ಜಾರಿಗೊಳಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವ ಸಂಪುಟದ ಸದಸ್ಯರೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ.
5 ಗ್ಯಾರಂಟಿ ಯೋಜನೆಗಳ ಕುರಿತು ಇತ್ತೀಚೆಗೆ ಸರ್ಕಾರದ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ
5 ಗ್ಯಾರಂಟಿ ಯೋಜನೆಗಳ ಕುರಿತು ಇತ್ತೀಚೆಗೆ ಸರ್ಕಾರದ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿರುವ ವಾಗ್ದಾನಗಳನ್ನು ಜಾರಿಗೊಳಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವ ಸಂಪುಟದ ಸದಸ್ಯರೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ.

ಈ ಸಮಾಲೋಚನೆ ನಂತರ ಮಾಹಿತಿ ಸಂಗ್ರಹಿಸಿ, ನಾಳೆ ನಿಗದಿಯಾಗಿರುವ ಸಚಿವ ಸಂಪುಟ ಸಭೆಯಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿನ ವಾಗ್ದಾನ ಜಾರಿಗೊಳಿಸುವ ಸಂಬಂಧ ಸ್ಪಷ್ಟ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಯೋಜನೆಗಳ ಜಾರಿಯ ಸಾಧಕ-ಬಾಧಕಗಳ ಬಗ್ಗೆ ಆಯಾ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಚರ್ಚಿಸಿ ಫಲಾನುಭವಿಗಳನ್ನು ಗುರುತಿಸಿ ಸರ್ಕಾರ ರೂಪುರೇಷೆಗಳನ್ನು ಇಂದು ಸಿದ್ದಪಡಿಸಿ ನಾಳೆ ಜೂನ್ 1ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಜಾರಿ ತರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ನಿನ್ನೆ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಎಂದು ಘೋಷಿಸಿದ್ದರು. ಯಾವುದೇ ಷರತ್ತು ವಿಧಿಸದೆ ಎಪಿಎಲ್, ಬಿಪಿಎಲ್ ಕಾರ್ಡು ಹೊಂದಿರುವವರೆಲ್ಲರೂ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಶೀಘ್ರ ಜಾರಿಗೊಳಿಸುವ ಕುರಿತು ಸರಕಾರ ಕಾರ್ಯ ತತ್ಪರವಾಗಿದೆ. ಯೋಜನೆ ಜಾರಿಯ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟದ ಸಹೋ ದ್ಯೋಗಿಗಳ ಜತೆಗೆ ಇಂದು ಮಹತ್ವದ ಸಭೆ ನಡೆಸಲಿದ್ದಾರೆ. ಇದಕ್ಕೆ ಪೂರಕವಾಗಿ “ಗ್ಯಾರಂಟಿ ಇಲಾಖೆ’ಗಳ ಸಚಿವರು ಅಧಿಕಾರಿಗಳ ಸಭೆ ನಡೆಸಿದ್ದು, ಆರ್ಥಿಕ ಹೊರೆಯ ಬಗ್ಗೆ ವಿಶ್ಲೇಷಣೆ ಕೈಗೊಂಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದ್ದು, ಸಚಿವ ಸಂಪುಟದ ಎಲ್ಲ ಸದಸ್ಯರು ಭಾಗವಹಿಸಲಿದ್ದಾರೆ. ಜೂ. 1ರಂದು ನಡೆಯುವ ಸಚಿವ ಸಂಪುಟ ಸಭೆ ಯಲ್ಲಿ ಗ್ಯಾರಂಟಿಗಳ ಜಾರಿ ಬಗ್ಗೆ ಘೋಷಣೆ ಮಾಡಲೇಬೇಕಿರುವುದರಿಂದ ಎಲ್ಲ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಡಿ ಇಡಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಂದಿನ ವರ್ಷ ಲೋಕಸಭಾ ಚುನಾವಣೆ ಇರುವುದರಿಂದ ಗ್ಯಾರಂಟಿ ಜಾರಿ ವಿಳಂಬ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್‌ ವರಿಷ್ಠರೂ ಸಲಹೆ ನೀಡಿದ್ದರಿಂದ ಆದಷ್ಟು ಬೇಗ ಸ್ಪಷ್ಟ ನಿಲುವು ತೆಗೆದುಕೊಳ್ಳಲು ಸರಕಾರ ನಿರ್ಧರಿಸಿದೆ.

ಹೆಚ್ಚುವರಿ ಅಕ್ಕಿಗೆ ಕೇಂದ್ರಕ್ಕೆ ಮನವಿ:ಅನ್ನಭಾಗ್ಯ ಯೋಜನೆ ಅಡಿ 10 ಕೆ.ಜಿ. ಅಕ್ಕಿ ನೀಡುವ ರಾಜ್ಯ ಸರಕಾರದ ಭರವಸೆ ಜಾರಿಗೆ ಸಂಬಂಧಪಟ್ಟಂತೆ ಆಹಾರ ಹಾಗೂ ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳ ಜತೆಗೆ ಸಚಿವ ಕೆ.ಎಚ್‌. ಮುನಿಯಪ್ಪ ಸಭೆ ನಡೆಸಿದ್ದು, ಹೆಚ್ಚುವರಿ ಅಕ್ಕಿ ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲು ನಿರ್ಧರಿಸಿದ್ದಾರೆ.

ಎಲ್ಲ ಮಹಿಳೆಯರಿಗೂ ಉಚಿತ: ಸಾರಿಗೆ ಇಲಾಖೆ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುತ್ತೇವೆ ಎಂದು ಹಿಂದೆಯೇ ಹೇಳಿದ್ದೇವೆ. ಸರಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಎಲ್ಲ ಮಹಿಳೆಯರಿಗೆ ಷರತ್ತಿಲ್ಲದೆ ಇದನ್ನು ಒದಗಿಸುತ್ತೇವೆ. ಪ್ರಣಾಳಿಕೆಯಲ್ಲಿ ಬಿಪಿಎಲ್‌, ಎಪಿಎಲ್‌ ಎಂದು ಹೇಳಿಲ್ಲ. ಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು. ಇದರಿಂದ ಇಲಾಖೆಯ ದೈನಂದಿನ ಆದಾಯ 23 ಕೋಟಿ ರೂ. ಪೈಕಿ ಅರ್ಧದಷ್ಟು ಕಡಿಮೆಯಾಗಬಹುದು. ಸಾರಿಗೆ ಸಂಸ್ಥೆಗಳ ದೈನಂದಿನ ಡೀಸೆಲ್‌ ಬಿಲ್‌ಗೆ 15 ಕೋಟಿ ರೂ. ವೆಚ್ಚ ಮಾಡುತ್ತೇವೆ. ಉಚಿತ ಪ್ರಯಾಣದಿಂದ ಹೊರೆಯಾಗುವ ಮೊತ್ತವನ್ನು ಭರಿಸುವಂತೆ ಸರಕಾರದ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದರು.

ಅತ್ತೆಯೇ “ಗೃಹಲಕ್ಷ್ಮೀ’ ಅವರಿಗೇ 2 ಸಾವಿರ ರೂ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ ನಿನ್ನೆ ಬೆಳಗಾವಿಯಲ್ಲಿ ಮಾತನಾಡಿ, ಗ್ಯಾರಂಟಿ ಜಾರಿಯಲ್ಲಿ ಗೊಂದಲ ಇಲ್ಲ. ಯೋಜನೆಗಳ ಅನುಷ್ಠಾನ ಸಂಬಂಧ ಸಿಎಂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ನಾಳೆಯ ವೇಳೆಗೆ ಎಲ್ಲವೂ ಸ್ಪಷ್ಟವಾಗಲಿದೆ ಎಂದಿದ್ದಾರೆ. ಗೃಹಲಕ್ಷ್ಮೀ ಯೋಜನೆಯಡಿ 2 ಸಾವಿರ ರೂ. ನೆರವನ್ನು ಒಂದು ಮನೆಯಲ್ಲಿ ಅತ್ತೆಗೆ ಕೊಡಬೇಕೋ, ಸೊಸೆಗೆ ಕೊಡಬೇಕೋ ಎಂಬ ಬಗ್ಗೆ ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಅತ್ತೆಗೆ ಪ್ರಾಧಾನ್ಯ ನೀಡಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅತ್ತೆಯೇ ಮನೆಯ ಯಜಮಾನಿ. ಹಾಗಾಗಿ ಈ ನೆರವು ಅತ್ತೆಗೆ ಸಿಗುತ್ತದೆ ಎಂದರು.

ಅಧಿಕಾರಿಗಳ ಸಭೆ ನಡೆಸಿದ ಜಾರ್ಜ್‌: ಇಂಧನ ಸಚಿವ ಕೆ.ಜೆ. ಜಾರ್ಜ್‌ ತಮ್ಮ ಇಲಾಖೆಯ ಅಧಿಕಾರಿಗಳ ಜತೆ ಮೊದಲ ಸಭೆ ನಡೆಸಿದರು. ಪ್ರತೀ ಕುಟುಂಬಕ್ಕೆ 200 ಯೂನಿಟ್‌ ಉಚಿತ ವಿದ್ಯುತ್‌ ಪೂರೈಸುವುದು ಗ್ಯಾರಂಟಿಗಳಲ್ಲಿ ಒಂದಾಗಿದ್ದು, ಇದರ ಅನುಷ್ಠಾನ ಸಾಧಕ-ಬಾಧಕದ ಬಗ್ಗೆ ಮಾಹಿತಿ ಪಡೆದರು. ಇದರಿಂದ ಎಷ್ಟು ಆರ್ಥಿಕ ಹೊರೆ ಬೀಳಲಿದೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಸೂಚನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com