ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ: ಸಿಎಂ ಸಿದ್ದರಾಮಯ್ಯ

ರಾಜ್ಯದಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಬುಧವಾರ ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಬುಧವಾರ ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ ಎಂದು ಹೇಳಿದ್ದಾರೆ.

1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ ೫೦ ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ, ಜಗದಗಲ ಹಬ್ಬಲಿ ಕರ್ನಾಟಕ ಸಂಭ್ರಮ, ಮೊಳಗಲಿ ಕನ್ನಡ ಡಿಂಡಿಮ. ವಿಶ್ವದಾದ್ಯಂತ ನೆಲೆಸಿರುವ ಸಮಸ್ತ ಹೆಮ್ಮೆಯ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್'ಡಿ.ಕುಮಾರಸ್ವಾಮಿಯವರು ಟ್ವೀಟ್ ಮಾಡಿ, ನಾಡಿನ ಹಾಗೂ ಜಗತ್ತಿನೆಲ್ಲೆಡೆ ನೆಲೆಸಿರುವ ಸಮಸ್ತ ಕನ್ನಡ ಬಂಧುಗಳಿಗೆ 68ನೇ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಹಾಗೆಯೇ, 'ಕರ್ನಾಟಕ'ವೆಂದು ಹೆಸರಾಗಿ ಇಂದಿಗೆ 50 ವರ್ಷ. ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆಗಳನ್ನು ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರೈಸೋಣ. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಆಶಿಸುತ್ತೇನೆಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮಾಡಿ, ನಾಡಿನ ಏಕೀಕರಣಕ್ಕೆ ಹೋರಾಡಿದ ಎಲ್ಲ ಮಹನೀಯರ ಸಂಸ್ಮರಣೆಗಳ ಜೊತೆಗೆ ಕನ್ನಡ ಉಳಿಸುವ, ಬೆಳೆಸುವ ದೃಢಸಂಕಲ್ಪ ಸದಾ ನಮ್ಮದಾಗಿರಲಿ. ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಅಭಿಮಾನಪೂರ್ವಕ ಶುಭಾಶಯಗಳು ಎಂದು ಹೇಳಿದ್ದಾರೆ.

ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ, ವಿಶ್ವದ ಸಮಸ್ತ ಕನ್ನಡಿಗರಿಗೆ 68 ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು‌‌. ಜೈ ಕರ್ನಾಟಕ ಎಂದು ಹೇಳಿದ್ದಾರೆ.

ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ 1956ರ ನವೆಂಬರ್ 1ರಂದು ಮೈಸೂರು ರಾಜ್ಯವೆಂದು ಘೋಷಣೆ ಮಾಡಲಾಯಿತು.

ಮೈಸೂರು ರಾಜ್ಯ ನಿರ್ಮಾಣವಾದುದರ ಸಂಕೇತವಾಗಿ ಪ್ರತಿ ವರ್ಷ ನವೆಂಬರ್​ 1 ರಂದು ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ವಿಶ್ವದಾದ್ಯಂತ ನೆಲಸಿರುವ ಕನ್ನಡಿಗರು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಾರೆ.

ಈ ದಿನದಂದು ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 1956 ರ ನವೆಂಬರ್ 1 ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು. ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪುಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.

ನವೆಂಬರ್ 1, 1973 ರಂದು ಮೈಸೂರು ರಾಜ್ಯಕ್ಕೆ "ಕರ್ನಾಟಕ" ಎಂದು ನಾಮಕರಣ ಮಾಡಲಾಯಿತು. ಈ ವರ್ಷ ಕರ್ನಾಟಕವೆಂದು ನಾಮಕರಣ ಮಾಡಿ 50 ವರ್ಷವಾದ ಹಿನ್ನೆಲೆಯಲ್ಲಿ ಕರ್ನಾಟಕ-50 ಎಂಬ ಶಿರ್ಷಿಕೆ ಅಡಿಯಲ್ಲಿ ಸರ್ಕಾರ ವಿಶೇಷವಾಗಿ ರಾಜ್ಯೋತ್ಸವ ಆಚರಿಸಲು ನಿರ್ಧರಿಸಿದೆ. ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com