ಪ್ರಗತಿ ಯೋಜನೆಗಳು ಕುಂಠಿತ: ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಸಚಿವ ಪ್ರಿಯಾಂಕ್‌ ಖರ್ಗೆ

ಮೈಸೂರು ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಯೋಜನೆಗಳು ಕುಂಟುತ್ತಾ ಸಾಗಿರುವುದಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು  ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಶುಕ್ರವಾರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸಚಿವ ಪ್ರಿಯಾಂಕ್ ಖರ್ಗೆ.
ಸಚಿವ ಪ್ರಿಯಾಂಕ್ ಖರ್ಗೆ.

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಯೋಜನೆಗಳು ಕುಂಟುತ್ತಾ ಸಾಗಿರುವುದಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು  ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಶುಕ್ರವಾರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ರಾಜ್ಯದ ಸರಾಸರಿಗಿಂತಲೂ ಮೈಸೂರು ಜಿಲ್ಲೆ ಕಳಪೆ ಸಾಧನೆ ತೋರಿದೆ. ನಮ್ಮ ಕಲ್ಯಾಣ ಕರ್ನಾಟಕ ಭಾಗದಲ್ಲೇ ಉತ್ತಮ ಸಾಧನೆಯಾಗಿದೆ. ಮುಖ್ಯಮಂತ್ರಿಯ ತವರು ಜಿಲ್ಲೆಯಲ್ಲೇ ಹೀಗಾದರೆ ಹೇಗೆ?’ ಎಂದು ಪ್ರಶ್ನಿಸಿದರು.

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾನವ ದಿನಗಳನ್ನು ಸೃಜಿಸುವಲ್ಲಿ ಮೈಸೂರು ರಾಜ್ಯದ ಸರಾಸರಿಗಿಂತಲೂ ಕಡಿಮೆ ಇದೆ. ಇದನ್ನು ಕ್ಷಮಿಸಲಾಗದು. ಜನರಿಗೆ ಆದಾಯ ಸಿಗುವಂತೆ ಮಾಡಬೇಕು’ ಎಂದು ಸೂಚಿಸಿದರು.

ರಾಜ್ಯದಲ್ಲಿ ಬರ ಇದೆ. ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು.  ಮುಂದಿನ 6 ತಿಂಗಳುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರುವ ಗ್ರಾಮಗಳನ್ನು ಗುರುತಿಸಿ, ಕುಡಿಯುವ ನೀರು ಪೂರೈಸುವ ಕ್ರಮಗಳನ್ನು ಗುರುತಿಸಿಕೊಳ್ಳಿ. ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸುವ ಮುನ್ನ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನರೇಗಾ ಅಡಿ ಮಾನವ ದಿನಗಳ ಸೃಜನೆಯಲ್ಲಿ ಟಿ ನರಸೀಪುರ ನಂಜನಗೂಡು ಹಾಗೂ ಪಿರಿಯಾಪಟ್ಟಣ ತಾಲ್ಲೂಕುಗಳು ಶೇ.50ಕ್ಕಿಂತ ಕಡಿಮೆ ಇದೆ. ಈ ಬಾರಿ ಎಲ್ಲಾ ಕಡೆ ಬರ ಇದೆ. ಬರ ಇರುವುದರಿಂದ ನರೇಗಾ ಯೋಜನೆಯಡಿ ಹೆಚ್ಚು ಮಾನವ ದಿನಗಳ ಕೆಲಸ ಆಗಬೇಕಿತ್ತು. ರಾಜ್ಯದಲ್ಲಿ 13 ಕೋಟಿ ಮಾನವ ದಿನಗಳ ಗುರಿ ಇತ್ತು ಇದರಲ್ಲಿ 10 ಕೋಟಿ ಮಾನವ ದಿನಗಳ ಗುರಿ ಸಾಧಿಸಿದ್ದೇವೆ. ಆದರೆ ಜಿಲ್ಲೆಯಲ್ಲಿ ಪ್ರಗತಿ ಉತ್ತಮವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲೆಯಲ್ಲಿ 34 ಲಕ್ಷ ಮಾನವ ದಿನಗಳ ಗುರಿ ನಿಗದಿಪಡಿಸಲಾಗಿದೆ. ಆರ್ಥಿಕ ವರ್ಷದ ಅಂತ್ಯದೊಳಗೆ ಈ ಗುರಿ ಸಾಧಿಸಬೇಕು. ನಂಜನಗೂಡು, ಚಾಮುಂಡಿ ಬೆಟ್ಟದ ವ್ಯಾಪ್ತಿ ಹಾಗೂ ಜಿಲ್ಲೆಯ ಇತರೆ ಕಡೆ ಸೈಕಲ್ ಅಗರಬತ್ತಿ ಅವರೊಂದಿಗೆ ಎನ್ಆರ್ ಎಲ್ ಎಂ ಯೋಜನೆಯಡಿ ಟೈ ಅಪ್ ಆಗಿ ಗುಡಿ ಕೈಗಾರಿಕೆಗಳನ್ನು ಉತ್ತೇಜಿಸುವ ಯೋಜನೆಗಳನ್ನು ರೂಪಿಸಲಾಗುವುದು. ಮೈಸೂರು ಜಿಲ್ಲೆ ಪ್ರವಾಸಿ ತಾಣಗಳನ್ನು ಹೆಚ್ಚು ಹೊಂದಿದ್ದು, ಇಲ್ಲಿ ಇರುವ ಪುರಾತನ ಕಲ್ಯಾಣಿಗಳನ್ನು ನರೇಗಾ ಯೋಜನೆಯಡಿ ಸ್ವಚ್ಛಗೊಳಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿಗಳಲ್ಲಿ ಅಕ್ರಮಗಳು ಆಗಿರುವ ಕುರಿತು ಸೋಷಿಯಲ್ ಆಡಿಟ್ ನಲ್ಲಿ ರಿಕವರಿಗೆ ಬರೆದಿರುವ ಮೊತ್ತವನ್ನು ಸಂಬಂಧಿಸಿದ ಅಧಿಕಾರಿಗಳಿಂದ ವಸೂಲಿ ಮಾಡಬೇಕು. ಬ್ಯಾಂಬೋ ಕಲ್ಟಿವೇಶನ್ ಅನ್ನು ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ, ಹುಣಸೂರು, ಪಿರಿಯಾಪಟ್ಟಣ ತಾಲ್ಲೂಕಿನ ಅರಣ್ಯ ಪ್ರದೇಶಗಳಲ್ಲಿ ಮಾಡಲು ಅವಕಾಶವಿದೆ. ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಶೇಕಡಾ 20ರಷ್ಟು  ಕಾಮಗಾರಿಗಳು ಬಾಕಿ ಉಳಿದಿವೆ. ಇವುಗಳನ್ನು ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಜಲಜೀವನ್ ಮಿಷನ್ ಯೋಜನೆಯಡಿ ಏಕ ಗ್ರಾಮ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಹಂತ 1 ರಿಂದ 4 ಹಂತಗಳ ಕಾಮಗಾರಿಗಳು ಬಾಕಿ ಉಳಿದಿವೆ. ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದಲ್ಲಿ ಕಾಮಗಾರಿಗಳನ್ನು ಮುಗಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿಯು ಸಮರ್ಪಕವಾಗಿ ಆಗಿಲ್ಲ.  ತೆರಿಗೆ ವಸೂಲಾತಿಯಲ್ಲಿ ನಿಗದಿತ ಗುರಿ ಮುಟ್ಟಿಲ್ಲ. ಇದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿಗಳ ಸಂಬಳ ನೀಡಲು ಕೊರತೆ ಉಂಟಾಗುತ್ತಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸಿ ತೆರಿಗೆ ವಸೂಲಾತಿ ಹೆಚ್ಚಿಸಬೇಕು ಎಂದು ಸೂಚನೆ ನೀಡಿದರು.

ಸಾರ್ವಜನಿಕರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ದೂರು ಬಂದಾಗ ಪರಿಶೀಲನೆ ನಡೆಸಬೇಕು. ನವೆಂಬರ್ 20 ರೊಳಗೆ ಇಲಾಖಾ ವಿಚಾರಣೆ ಪ್ರಕರಣಗಳನ್ನು ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. 15ನೇ ಹಣಕಾಸು ಯೋಜನೆಯಡಿ ಜಿಲ್ಲೆಯಲ್ಲಿ 78 ಕೋಟಿ ಬಳಕೆಯಾಗದ ಅನುದಾನ ಬಾಕಿ ಉಳಿದಿದೆ. ಶಾಸಕರ ಗಮನಕ್ಕೆ ತಂದು ಈ ಹಣವನ್ನು ಅಗತ್ಯವಾದ ಕಾಮಗಾರಿಗಳಿಗೆ ಬಳಕೆ ಮಾಡುವಂತೆ ಸೂಚನೆ ನೀಡಿದರು. ಗ್ರಾಮ ಪಂಚಾಯತ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಇ ಅಟೆಂಡೆನ್ಸ್ ಹಾಕಬೇಕು ಎಂದು ಸೂಚನೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com