ಬೆಂಗಳೂರು: ಕಳಂಕಿತ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ತಮ್ಮ ಸಂಸ್ಥೆಗೆ ರಾಜ್ಯ ಸರ್ಕಾರದಿಂದ ಉತ್ತೇಜಕ ಪ್ರತಿಕ್ರಿಯೆ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆದ 2023 ನೇ ಸಾಲಿನ ಜಾಗೃತ ಅರಿವು ಸಪ್ತಾಹದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಪ್ರಕರಣದಲ್ಲಿ ಸಿಕ್ಕಿಬಿದ್ದು, ಬಳಿಕ ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಂಡ ಅಧಿಕಾರಿಗಳಿಗೆ ಅದೇ ಹುದ್ದೆ ನೀಡುತ್ತಿರುವುದರಿಂದ ಸಾರ್ವಜನಿಕರು ಸರ್ಕಾರದ ಕ್ರಮಗಳ ಬಗ್ಗೆ ನಂಬಿಕೆ ಕಳೆದುಕೊಳ್ಳುತ್ತಾರೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.
ಲೋಕಾಯುಕ್ತದಿಂದ ಅನೇಕ ಸರ್ಕಾರಿ ಕಚೇರಿಗಳ ವಿರುದ್ಧ ದಾಳಿ ನಡೆಸಿ ವಿಚಾರಣೆಯನ್ನು ಕೈಗೊಂಡು ಸರ್ಕಾರಕ್ಕೆ ಶಿಫಾರಸು ಮಾಡಿದರೂ ಈ ಬಗ್ಗೆ ಸೀಮಿತ ಫಲಿತಾಂಶ ಮಾತ್ರ ಬಂದಿದೆ. ಈ ನಿಟ್ಟಿನಲ್ಲಿ ಸಮಗ್ರ ಪರಿವರ್ತನೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಲೋಕಾಯುಕ್ತದಿಂದಷ್ಟೇ ಭ್ರಷ್ಟಾಚಾರ ತಡೆ ಅಸಾಧ್ಯ, ಲೋಕಾಯುಕ್ತ ಸಂಸ್ಥೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಆದರೆ ಈ ಸಂಸ್ಥೆಯಿಂದ ಮಾತ್ರವೇ ಭ್ರಷ್ಟಾಚಾರವನ್ನು ನಿಯಂತ್ರಣ ಮಾಡಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವ್ಯಕ್ತಿ, ಇಲಾಖಾ ಮುಖ್ಯಸ್ಥರು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಇಲಾಖಾ ವಿಚಾರಣೆ ಪ್ರಕರಣಗಳಲ್ಲಿ ಆರೋಪಗಳು ಸಾಬೀತಾಗಿ ದಂಡನೆ ವಿಧಿಸಲು ಶಿಫಾರಸು ಮಾಡಲಾದ 1074 ಪ್ರಕರಣಗಳು ಇನ್ನೂ ಸರ್ಕಾರದ ಹಂತದಲ್ಲಿ ಬಾಕಿ ಇರುವ ಅಂಶಗಳನ್ನು ಇದೇ ಸಂದರ್ಭದಲ್ಲಿ ಲೋಕಾಯುಕ್ತರು ಪ್ರಸ್ತಾಪ ಮಾಡಿದರು. ಈ ನಿಟ್ಟಿನಲ್ಲಿ ಲೋಕಾಯುಕ್ತ ಕಚೇರಿಯಿಂದ ಸರ್ಕಾರಕ್ಕೆ ಕಳಿಸಲಾಗಿರುವ ಶಿಫಾರಸ್ಸು ವರದಿಗಳ ಬಗ್ಗೆ ಸೂಕ್ತವಾಗಿ ಹಾಗೂ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಇಲಾಖಾ ಮುಖ್ಯಸ್ಥರಿಗೆ ತಾಕೀತು ಮಾಡಿದರು.
ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಕರ್ನಾಟಕ ಲೋಕಾಯುಕ್ತ ಕಾಯ್ದೆಯ ನಿಬಂಧನೆಗಳ ಕುರಿತು ಮಾತನಾಡಿದರು. ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಲೋಕಾಯುಕ್ತ ರಿಜಿಸ್ಟ್ರಾರ್ ಉಷಾರಾಣಿ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
Advertisement