ಶೀಘ್ರದಲ್ಲೇ ಚಳಿಗಾಲದ ಅಧಿವೇಶನದ ದಿನಾಂಕ ಪ್ರಕಟ: ಸ್ಪೀಕರ್ ಯು.ಟಿ.ಖಾದರ್

ಡಿಸೆಂಬರ್‌ನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಿದ್ಧತೆ ನಡೆಸಲಾಗುತ್ತಿದ್ದು, ಅಧಿವೇಶನದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಈ ಬಾರಿಯ ಅಧಿವೇಶನ ಮಾದರಿಯಾಗಲಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಮಂಗಳವಾರ ಹೇಳಿದರು.
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಅಧಿಕಾರಿಗಳು ಮಂಗಳವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪರಿಶೀಲನೆ ನಡೆಸಿದರು.
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಅಧಿಕಾರಿಗಳು ಮಂಗಳವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪರಿಶೀಲನೆ ನಡೆಸಿದರು.
Updated on: 

ಬೆಳಗಾವಿ: ಡಿಸೆಂಬರ್‌ನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಿದ್ಧತೆ ನಡೆಸಲಾಗುತ್ತಿದ್ದು, ಅಧಿವೇಶನದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಈ ಬಾರಿಯ ಅಧಿವೇಶನ ಮಾದರಿಯಾಗಲಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಮಂಗಳವಾರ ಹೇಳಿದರು.

ವಿಧಾನಮಂಡಲ ಚಳಿಗಾಲದ ಅಧಿವೇಶನ ಸಂಬಂಧ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಕೈಗೊಂಡ ಸಿದ್ಧತೆಯನ್ನು ಮಂಗಳವಾರ ಪರಿಶೀಲಿಸಿದ ನಂತರ ಸ್ಪೀಕರ್ ಯುಟಿ ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

''ಡಿಸೆಂಬರ್‌ನಲ್ಲಿ ಅಧಿವೇಶನ ನಡೆಯುವುದು ಖಚಿತ. ಅದಕ್ಕಾಗಿಯೇ ನಾವು ಇಲ್ಲಿಗೆ ಬಂದು ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ.ಅಧಿವೇಶನಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಈ ಬಾರಿಯ ಅಧಿವೇಶನ ಮಾದರಿಯಾಗಲಿದೆ ಎಂಬ ಭರವಸೆಯಿದೆ. ಅಧಿವೇಶನಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು 10 ಸಮಿತಿಗಳನ್ನು ರಚಿಸುವಂತೆ ಜಿಲ್ಲಾಧಿಕಾರಿಗೆ ತಿಳಿಸಲಾಗಿದೆ. ವಿಧಾನಸಭೆ ಮತ್ತು ಪರಿಷತ್ ಸದಸ್ಯರಿಗೂ ಸೌಲಭ್ಯ ಕಲ್ಪಿಸಲು ಸೂಚನೆ ನೀಡಲಾಗಿದೆ’ ಎಂದು ಹೇಳಿದರು.

ಬಸವರಾಜ ಹೊರಟ್ಟಿ ಮಾತನಾಡಿ, ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಸಮಯ ಮೀಸಲಿಡಲಾಗುವುದು. ಬೆಳಗಾವಿ ಅಧಿವೇಶನ ಕೇವಲ ಪ್ರತಿಭಟನೆಗೆ ಮಾತ್ರ ಎಂದು ಕೆಲವು ಸಚಿವರು ಮತ್ತು ಶಾಸಕರು ಭಾವಿಸಿದ್ದಾರೆ. ಪ್ರತಿಭಟನೆ ನಡೆಸಲು ಇಚ್ಛಿಸುವ ರೈತರು, ಕಾರ್ಮಿಕರು ಮತ್ತು ಸಂಘಟನೆಗಳ ಸದಸ್ಯರು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಿ, ಅಧಿವೇಶನ ಪ್ರಾರಂಭವಾಗುವ ಮೊದಲು ತಮ್ಮ ಸಮಸ್ಯೆಗಳನ್ನು ಪರಿಹರಿಸಿ, ಸುಗಮ ಅಧಿವೇಶನಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿಕೊಳ್ಳುತ್ತಿದ್ದೇವೆಂದು ತಿಳಿಸಿದರು.

ಸುವರ್ಣ ವಿಧಾನಸೌಧ ನಿರ್ಮಾಣಕ್ಕೆ ಜಾಗ ಗುರುತಿಸಿದಾಗ ಬೆಂಗಳೂರಿನ ವಿಧಾನಸೌಧವನ್ನು ಗಮನದಲ್ಲಿಟ್ಟುಕೊಂಡು ನೀಲನಕ್ಷೆ ಸಿದ್ಧಪಡಿಸುವಂತೆ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ನಾನು ಅಧಿಕಾರಿಗಳಿಗೆ ತಿಳಿಸಿದ್ದೆವು. ಆದರೆ, ನಂತರ ಬಂದ ಸರ್ಕಾರ ಹೊಸ ನೀಲನಕ್ಷೆ ಸಿದ್ಧಪಡಿಸಿ, ಈ ಕಟ್ಟಡ ನಿರ್ಮಿಸಿದೆ. ಬೆಂಗಳೂರಿನ ವಿಧಾನಸೌಧಕ್ಕೂ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೂ ಹೋಲಿಕೆ ಮಾಡಲಾಗದು. ಬೆಂಗಳೂರಿನಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಇದೆ. ಇಲ್ಲಿನ ಪರಿಸ್ಥಿತಿ ಹಾಗಿಲ್ಲ. ಇದರ ವಿನ್ಯಾಸದಲ್ಲಿ ಲೋಪವಿದೆ. ಕೆಲವೆಡೆ ಸೋರುತ್ತಿದೆ. ಆಗಿನ ಸರ್ಕಾರ ಈ ಬಗ್ಗೆ ಗಮನಹರಿಸಿಲ್ಲ. ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣದ ಬಗ್ಗೆ ಚರ್ಚಿಸುತ್ತೇವೆ. ಮುಖ್ಯಮಂತ್ರಿ ಅವರು ಈ ಬೇಡಿಕೆ ಈಡೇರಿಸುತ್ತಾರೆ ಎಂಬ ನಂಬಿಕೆ ಇದೆ’ ಎಂದು ಹೇಳಿದರು.

ಸುವರ್ಣ ವಿಧಾನಸೌಧದ ಹೊರಭಾಗದಲ್ಲಿ ಕೆಲವು ರಾಜ್ಯ ಮಟ್ಟದ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಆದರೆ, ಅಧಿಕಾರಿಗಳು ಉತ್ತರ ಕರ್ನಾಟಕದಲ್ಲಿ ಕೆಲಸ ಮಾಡಲು ಆಸಕ್ತಿ ತೋರುತ್ತಿಲ್ಲ. ಬೆಂಗಳೂರು ಕಚೇರಿಗಳು ಮುಚ್ಚಿದಾಗ ಮಾತ್ರ ಇಲ್ಲಿಗೆ ಬರುತ್ತಾರೆ.

ಸುವರ್ಣ ವಿಧಾನಸೌಧ ನಿರ್ಮಾಣದ ನಂತರ ಬೆಳಗಾವಿಯನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸುವ ಬೇಡಿಕೆ ಕಡಿಮೆಯಾಗಿದೆ. ಈ ರಚನೆಯು ಗಡಿ ಜಿಲ್ಲೆಗಳಲ್ಲಿ ಕನ್ನಡದ ಬಗ್ಗೆ ಪ್ರೀತಿ ಮತ್ತು ಗೌರವವನ್ನು ಮೂಡಿಸುವಂತೆ ಮಾಡಿದೆ.. “ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಬೇಕು ಎಂದು ಹಲವರು ಒತ್ತಾಯಿಸಿದ್ದಾರೆ. ಆ ನಿಟ್ಟಿನಲ್ಲಿ ಕ್ರಮಕೈಗೊಳ್ಳುತ್ತೇವೆ. ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಕಳುಹಿಸಲಾಗುವುದು' ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com