ಬೆಂಗಳೂರು ಕಂಬಳ: ಐಶ್ವರ್ಯ ರೈ, ಅನುಷ್ಕಾ ಶೆಟ್ಟಿ ಭಾಗಿ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯಲಿದ್ದು, ಬೆಂಗಳೂರು ಕಂಬಳಕ್ಕೆ ಕನಿಷ್ಠ 3 ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದೆ. ಕಂಬಲಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿದೆ ಎಂದು ಬೆಂಗಳೂರು ಕಂಬಳ ಸಮಿತಿ ಗೌರವಾಧ್ಯಕ್ಷ ಕೆ ಪ್ರಕಾಶ್‌ ಶೆಟ್ಟಿ ಅವರು ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯಲಿದ್ದು, ಬೆಂಗಳೂರು ಕಂಬಳಕ್ಕೆ ಕನಿಷ್ಠ 3 ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದೆ. ಕಂಬಲಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿದೆ ಎಂದು ಬೆಂಗಳೂರು ಕಂಬಳ ಸಮಿತಿ ಗೌರವಾಧ್ಯಕ್ಷ ಕೆ ಪ್ರಕಾಶ್‌ ಶೆಟ್ಟಿ ಅವರು ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಪ್ರಕಾಶ್‌ ಶೆಟ್ಟಿ ಅವರು ಮಾತನಾಡಿದರು.

ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ ಎಂದು ಹೇಳಿದರು.

ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು, ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ. ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದು ತಿಳಿಸಿದರು.

ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ಮಾತನಾಡಿ, ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲಾ ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುವುದು. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಅಲ್ಲದೆ, ಪ್ರತಿ ತಾಲೂಕಲ್ಲೂ ಸ್ವಾಗತ-ಬೀಳ್ಕೊಡುಗೆ ಇರಲಿದೆ ಎಂದರು.

ಸಮಿತಿ ಕಾರ್ಯಾಧ್ಯಕ್ಷ, ಸಂಗೀತ ನಿರ್ದೇಶಕ ಗುರುಕಿರಣ್ ಮಾತನಾಡಿ, ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಅವರು ಮಾತನಾಡಿ, ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ 'ಬೆಂಗಳೂರು ಕಂಬಳ ನಮ್ಮ ಕಂಬಳ' ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಈ ಥೀಮ್ ಸಾಂಗ್‌ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com