
ಮೈಸೂರು: ನಂಜನಗೂಡಿನಲ್ಲಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವ್ಯಾಪ್ತಿಯ ಗ್ರಾಮವೊಂದರಲ್ಲಿ ಶುಕ್ರವಾರ ಹುಲಿ ದಾಳಿಗೆ 48 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಮೃತರನ್ನು 48 ವರ್ಷದ ರತ್ನಮ್ಮ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವ್ಯಾಪ್ತಿಯ ನಂಜನಗೂಡು ತಾಲೂಕಿನ ಬಲ್ಲೂರು ಹುಂಡಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಹಿಳೆಯೊಬ್ಬರು ಹುಲಿ ದಾಳಿಗೆ ಬಲಿಯಾಗಿದ್ದಾರೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ (ವನ್ಯಜೀವಿ) ಪ್ರಾಥಮಿಕ ವರದಿ ನೀಡಿದ್ದಾರೆ.
ಮೈಸೂರು ಅರಣ್ಯ ಸಂರಕ್ಷಣಾಧಿಕಾರಿ, ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement