ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಜನತಾ ದರ್ಶನ ಆರಂಭ: ಅಹವಾಲು ಸಲ್ಲಿಸಲು ಸಾವಿರಾರು ಜನ ಆಗಮನ!

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತಿದ್ದು, ಈ ವೇಳೆ ಅಹವಾಲು ಹೇಳಿಕೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಭಾರಿ ಸಂಖ್ಯೆಯಲ್ಲಿ ಜನ ಬಂದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತಿದ್ದು, ಈ ವೇಳೆ ಅಹವಾಲು ಹೇಳಿಕೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಭಾರಿ ಸಂಖ್ಯೆಯಲ್ಲಿ ಜನ ಬಂದಿದ್ದಾರೆ.

ಅಹವಾಲು ಸ್ವೀಕರಿಸಲು ಒಟ್ಟು 20 ಕೌಂಟರ್ ಸ್ಥಾಪಿಸಲಾಗಿದೆ‌. ವಿಶೇಷಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಕೌಂಟರ್‌ಗಳನ್ನು ಮೀಸಲಿರಿಸಲಾಗಿದೆ. ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿ ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸುವರು.

ಇದರಂತೆ ಕೌಂಟರ್‌ಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಂತ ಜನರು, ತಮ್ಮ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ.

ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ನೀಡಲು ಆಗಮಿಸುವ ನಾಗರಿಕರು ತಮ್ಮ ಗುರುತಿಗಾಗಿ ಆಧಾರ್​ ಕಾರ್ಡ್​ ಅಥವಾ ಪಡಿತರ ಚೀಟಿ ತರಬೇಕಿದೆ. ಇದರಿಂದ ತಂತ್ರಾಂಶದಲ್ಲಿ ದಾಖಲಿಸುವ ಅರ್ಜಿಗಳ ಸ್ಥಿತಿಗತಿ ಪತ್ತೆಹಚ್ಚಲು ಅನುಕೂಲವಾಗಲಿದೆ.

ಸರ್ಕಾರದ ಎಲ್ಲ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಖುದ್ದು ಹಾಜರಿರುವಂತೆ ಹಾಗೂ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ/ಉಪವಿಭಾಗ/ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಹಾಜರಿರುವಂತೆ ಈಗಾಗಲೇ ಸೂಚಿಸಲಾಗಿದೆ.

ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರ ಗೃಹ ಕಚೇರಿಯಲ್ಲಿ ಕಳೆದ ಮೂರು ದಿನಗಳಿಂದ ಸಕಲ ಸಿದ್ಧತೆ ನಡೆಸಲಾಗುತ್ತಿದ್ದು, ಜನರಿಗೆ ಕುಡಿಯುವ ನೀರು, ಆಹಾರ ಹಾಗೂ ಶೌಚಾಲಯ ಮತ್ತು ಇತರ ವ್ಯವಸ್ಥೆಗಳನ್ನು ಸಜ್ಜುಗೊಳಿಸಲಾಗಿದೆ. ಭದ್ರತೆಗಾಗಿ ಇಬ್ಬರು ಡಿಸಿಪಿ, 3 ಎಸಿಪಿ, 10 ಪೊಲೀಸ್ ಇನ್ಸ್‌ಪೆಕ್ಟರ್, 15 ಪಿಎಸ್ಐ ಹಾಗೂ ಸುಮಾರು 550 ಪಿಸಿ, ಹೋಮ್​ ಗಾರ್ಡ್​ಗಳನ್ನು ನಿಯೋಜಿಸಲಾಗಿದೆ.

ಅಹವಾಲು ಸ್ವೀಕಾರ ಮತ್ತು ಪರಿಶೀಲನೆಗೆ 350 ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇತರೆ ಸಹಾಯಕ ಸಿಬ್ಬಂದಿ ಸೇರಿ ಒಟ್ಟು 1,000 ಅಧಿಕಾರಿ ಮತ್ತು ಸಿಬ್ಬಂದಿ ಕರ್ತವ್ಯ ನಿರತರಾಗಿದ್ದಾರೆ.

ಆನ್​ಲೈನ್​ನಲ್ಲೂ ದೂರು ಸಲ್ಲಿಸಬಹುದು. ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿಯೂ ಸಹ ಸಾರ್ವಜನಿಕರು ದೂರುಗಳನ್ನು ನೇರವಾಗಿ ಸಲ್ಲಿಸಲು ಅವಕಾಶವಿದೆ. ಹಾಗೆಯೇ 1902ಕ್ಕೆ ಕರೆ ಮಾಡಿಯೂ ಸಹ ಆನ್‌ಲೈನ್ ಮೂಲಕ ನೊಂದಾಯಿಸಿಕೊಳ್ಳಬಹುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com