ಡಿಕೆಶಿಗೆ ಸದ್ಯ ರಿಲೀಫ್: ಸಿಬಿಐ ತನಿಖೆಗೆ ಅನುಮತಿ ಪ್ರಶ್ನಿಸಿದ್ದ ಮೇಲ್ಮನವಿ ಹಿಂಪಡೆಯಲು ಹೈಕೋರ್ಟ್ ಅಸ್ತು

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ಈ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರ ತಮ್ಮ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯಲು ಹೈಕೋರ್ಟ್ ಅನುಮತಿ ನೀಡಿದೆ.

ತಮ್ಮ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿದ ಬಿಜೆಪಿ ಸರ್ಕಾರದ ಆದೇಶ ರದ್ದುಗೊಳಿಸುವಂತೆ ಕೋರಿ ಡಿಕೆ ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಡಿಕೆಶಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. 

ಮುಖ್ಯ ನ್ಯಾಯಮೂರ್ತಿ ಪಿಬಿ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಇಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ನ್ಯಾಯಪೀಠಕ್ಕೆ ಮೆಮೊ ಮೂಲಕ ಸಲ್ಲಿಸಿದರು. ಅಲ್ಲದೆ ರಿಟ್ ಅರ್ಜಿ ಮತ್ತು ಮೇಲ್ಮನವಿಯನ್ನು ಹಿಂಪಡೆಯುವುದಾಗಿ ಡಿಕೆ ಶಿವಕುಮಾರ್ ಪರ ವಕೀಲರು ಲಿಖಿತ ಮೆಮೊ ಸಲ್ಲಿಸಿದರು.

ಮೆಮೊ ಮಾನ್ಯ ಮಾಡಿದ ಹೈಕೋರ್ಟ್ ವಿಭಾಗೀಯ ಪೀಠ, ಮೇಲ್ಮನವಿ ಹಿಂಪಡೆಯುವುದಕ್ಕೆ ಅನುಮತಿ ನೀಡಿದೆ.

ಯಾರು ಬೇಕಾದರೂ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿಬಹುದು. ಆದರೆ ರಾಜ್ಯ ಸರ್ಕಾರದ ಆದೇಶವನ್ನು ಇದುವರೆಗೂ ಯಾರೂ ಪ್ರಶ್ನೆ ಮಾಡಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ. ಅರ್ಜಿದಾರರು ಮನವಿ ಹಿಂಪಡೆಯಲಾಗಿದೆ ಎಂದು ಕೋರ್ಟ್‌ ತಿಳಿಸಿತು.

ಇನ್ನು ಪ್ರಕರಣದಲ್ಲಿ ತಮ್ಮನ್ನು ಪ್ರತಿವಾದಿಯಾಗಿ ಮಾಡುವಂತೆ ಕೋರಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅರ್ಜಿಯನ್ನು ಗಮನಿಸಿದ ಹೈಕೋರ್ಟ್, ಈ ಪ್ರಕರಣದಲ್ಲಿ ನಿಮ್ಮನ್ನು ಪರಿಗಣಿಸುವ ಅಗತ್ಯ ಇಲ್ಲ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com