ನಾಥೂರಾಂ ಗೋಡ್ಸೆ ಆರಾಧಕರ ಬಗ್ಗೆ ಜಾಗೃತರಾಗಿರಬೇಕು- ಸಿಎಂ ಸಿದ್ದರಾಮಯ್ಯ

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆ ಆರಾಧಕರ ಬಗ್ಗೆ ನಾವು ಜಾಗೃತರಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. 
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆ ಆರಾಧಕರ ಬಗ್ಗೆ ನಾವು ಜಾಗೃತರಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. 

ರಾಷ್ಟ್ರಪಿತ ಮಹಾತ್ಮ ಗಾಂಧಿ ಜನ್ಮ ದಿನಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ 'ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - 2023' ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿ, ಮಹಾತ್ಮ ಗಾಂಧಿ ದೇಶದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಲು ಕೊನೆಯವರೆಗೂ ಶ್ರಮಿಸಿದ್ದರು. ಆದರೆ ನಾಥೂರಾಂ ಗೋಡ್ಸೆಯ ಮತಾಂಧತೆಯಿಂದ ಅಸುನೀಗಿದರು. ನಾಥೂರಾಂ ಗೋಡ್ಸೆ  ಪೂಜಿಸುವವರು ಈ ದೇಶದಲ್ಲಿರುವುದು ವಿಷಾದನೀಯ. ಇಂತಹವರ ಬಗ್ಗೆ ನಾವು ಜಾಗೃತರಾಗಿರಬೇಕು ಎಂದರು.

ಭಾರತ ಹಳ್ಳಿಗಳ ದೇಶ. ಹಳ್ಳಿಗಳ ಸ್ವಾವಂಬನೆಯಿಂದ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ. ನಮ್ಮ ದೇಶಕ್ಕೆ ದೊಡ್ಡ ಕೈಗಾರಿಕೆಗಳ ಬದಲು ಗುಡಿ ಕೈಗಾರಿಕೆಗಳು ಬರಬೇಕು. ಗಾಂಧೀಜಿ ಹೇಳಿದ ಪಂಚಾಯತ್ ರಾಜ್ ವ್ಯವಸ್ಥೆಯಂತೆ ಅಧಿಕಾರ ಹಳ್ಳಿಯಿಂದ ದಿಲ್ಲಿಗೆ ಹೋಗಬೇಕೆ ಹೊರತು, ದಿಲ್ಲಿಯಿಂದ ಹಳ್ಳಿಗೆ ಬರಬಾರದು.  ದೇಶ, ರಾಜ್ಯ, ಜಿಲ್ಲೆ, ಹಳ್ಳಿ ನಾಲ್ಕು ಹಂತದಲ್ಲಿ ಅಧಿಕಾರದ ವಿಕೇಂದ್ರೀಕರಣವು, ಜನರ ಪಾಲ್ಗೊಳ್ಳುವಿಕೆಯಿಂದ ಜನತಂತ್ರದ ವಿಕೇಂದ್ರೀಕರಣ ಸಾಧ್ಯ. ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಗಾಂಧಿಯವರ ಚಿಂತನೆಗಳೇ ಪ್ರೇರಣೆ ಎಂದು ತಿಳಿಸಿದರು. 

ಮಹಿಳಾ ಸ್ವಾತಂತ್ರ್ಯ ಹಾಗೂ ಸಬಲೀಕರಣದ ಬಗ್ಗೆ ಗಾಂಧಿಯವರು ಅಪಾರವಾದ ಬದ್ಧತೆ ಹೊಂದಿದ್ದರು. ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿದೆ. ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಗಳ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿದ್ದು,  ಅನ್ನಭಾಗ್ಯ ಯೋಜನೆಗಳು ಗಾಂಧಿ ತತ್ವಗಳನ್ನು ಅವಲಂಬಿಸಿದೆ ಎಂದು ಮುಖ್ಯಮಂತ್ರಿ ಹೇಳಿದರು. 

ಮಹಾತ್ಮ ಗಾಂಧಿಯವರ ವಿಚಾರಧಾರೆ ಎಲ್ಲ ಕಾಲಕ್ಕೂ ಪ್ರಸ್ತುತ. ಅವರ ಮಾತು ಹಾಗೂ ಕೃತಿಯಲ್ಲಿ ವ್ಯತ್ಯಾಸವಿರಲಿಲ್ಲ. ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿ, ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ಅನುಸರಿಸಿದರು. ಅಹಿಂಸೆಯ ಹಾದಿಯಲ್ಲಿ ನಡೆದು ಸ್ವಾತಂತ್ರ್ಯ ಪಡೆಯಲು ಹೊರಟ ದೇಶವೆಂದರೆ ಭಾರತ. ಗಾಂಧಿಯವರು ದೊಡ್ಡ ಮಾನವತಾವಾದಿ.  ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸ್ವಭಾವವನ್ನು ಬೆಳೆಸಿಕೊಳ್ಳುವ ಮೂಲಕ ಗಾಂಧಿಯವರಿಗೆ ನಿಜವಾದ ಗೌರವ ಅರ್ಪಿಸಿದಂತಾಗುತ್ತದೆ. ಅವರು ನಡೆದ ದಾರಿಯಲ್ಲಿ ನಡೆಯುವ ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com