ಜಲಾಶಯಗಳಿಗೆ ಒಳಹರಿವು ಕಡಿಮೆ; ಬೇಕಿರುವುದು 106 ಟಿಎಂಸಿ ನೀರು, ಇರುವುದು 56 ಟಿಎಂಸಿ: ಡಿಕೆ ಶಿವಕುಮಾರ್
ಬೆಂಗಳೂರು: ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗುತ್ತಿದೆ. ಸದ್ಯ ಜಲಾಶಯಗಳಲ್ಲಿ ಅಗತ್ಯಕ್ಕಿಂತ ಅರ್ಧದಷ್ಟು ನೀರು ಇದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ನಮಗೆ 106 ಸಾವಿರ ಮಿಲಿಯನ್ ಕ್ಯೂಬಿಕ್ ಅಡಿ (ಟಿಎಂಸಿ) ನೀರು ಬೇಕು. ಆದರೆ, ನಮ್ಮ ಜಲಾಶಯಗಳಲ್ಲಿ ಸದ್ಯ 56 ಟಿಎಂಸಿ ನೀರಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿನ ಅಲ್ಪ ಪ್ರಮಾಣದ ಮಳೆಯಿಂದಾಗಿ ಸುಮಾರು 25 ಕ್ಯೂಸೆಕ್ಸ್ ನೀರು ಹರಿದು ಬಂದಿದೆ. ಈಗ ಒಳಹರಿವು ಕಡಿಮೆಯಾಗುತ್ತಿದೆ' ಎಂದು ತಿಳಿಸಿದರು.
ಜಲಾಶಯಗಳಲ್ಲಿ ನೀರಿನ ಕೊರತೆಯಿರುವ ಕಾರಣ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂದಿನ ಬೆಳೆ ಬೆಳೆಯಲು ಅವಕಾಶ ನೀಡದಿರಲು ಕೃಷಿ ಇಲಾಖೆಗೆ ಸೂಚಿಸಲಾಗಿದೆ. ಬೆಳೆದು ನಿಂತಿರುವ ಬೆಳೆಗಳನ್ನು ಉಳಿಸಬೇಕು. ಬರ ಘೋಷಣೆ ಮಾಡಲಾಗಿದೆ. ಹೆಚ್ಚಿನ ಮಳೆಯ ನಿರೀಕ್ಷೆಯಲ್ಲಿದ್ದೇವೆ. ಈ ವರ್ಷ ಸಂಕಷ್ಟದ ವರ್ಷವಾಗಿದೆ ಎಂದು ಶಿವಕುಮಾರ್ ಹೇಳಿದರು.
ಕಾವೇರಿ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ತಮ್ಮ ಆರೋಪವನ್ನು ಪುನರುಚ್ಚರಿಸಿದ ಅವರು, ಕಾವೇರಿ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ಮಾಡಲಿ, ರಾಜ್ಯದ ಹಿತಾಸಕ್ತಿ ಕಾಪಾಡಲು ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ ಎಂದರು.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಸುದೀರ್ಘ ಹಗ್ಗಜಗ್ಗಾಟ ನಡೆಸುತ್ತಲೇ ಇವೆ. ಈ ನದಿಯು ಎರಡು ರಾಜ್ಯಗಳ ಜನರಿಗೆ ಜೀವನಾಧಾರಕ್ಕೆ ಪ್ರಮುಖ ಮೂಲವಾಗಿದೆ.
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 15 ರವರೆಗೆ ಬಿಳಿಗುಂಡ್ಲುವಿಗೆ ಪ್ರತಿದಿನ 3,000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶಿಸಿತ್ತು.
ಈ ಆದೇಶದ ವಿರುದ್ಧ ಕರ್ನಾಟಕ ಸುಪ್ರೀಂ ಕೋರ್ಟ್ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿತ್ತು.