
ಚಿಕ್ಕಬಳ್ಳಾಪುರ: ಸರ್ಕಾರ ರೈತರಿಗೆ ಏಳು ಗಂಟೆ 3-ಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಇಂದು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮಾಜಿ ಸಚಿವ ಡಾ. ಸುಧಾಕರ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ನಡೆದ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರೆಂಟ್ ಕೊಡುವುದು ಸರ್ಕಾರದ ಕರ್ತವ್ಯ. ಅದು ಅವರದೇನು ಉಪಕಾರ ಅಲ್ಲ. ಈಗ ಇಂಧನ ಇಲಾಖೆ ಯಾವ ರೀತಿ ಕೆಲಸ ಮಾಡುತ್ತಿದೆ ಅಂತ ಅಧಿಕಾರಿಗಳನ್ನು ಕೇಳಿ ಹೇಳುತ್ತಾರೆ. ನಾನು ಅಧಿಕಾರದಲ್ಲಿದ್ದಾಗ ವಿದ್ಯುತ್ ಇಲಾಖೆಗೆ ಹತ್ತು ಸಾವಿರ ಕೊಟಿ ರೂ. ನೀಡಿದ್ದೆ. ಇವರು ಯಾವುದೇ ಅನುದಾನ ನೀಡಿಲ್ಲ. ಅನುದಾನ ನೀಡಲು ಇವರ ಬಳಿ ಹಣ ಇಲ್ಲ. ಕಲ್ಲಿದ್ದಲು ಖರೀದಿಸಲು ಹಣ ಇಲ್ಲ. ಸರ್ಕಾರದವರು ರೈತರಿಗೆ ಕೇವಲ ಎರಡು ತಾಸು ಕರೆಂಟ್ ಕೊಡುತ್ತಿದ್ದಾರೆ. ಮೂರು ತಿಂಗಳಲ್ಲಿ ಎರಡು ಬಾರಿ ಕರೆಂಟ್ ಬಿಲ್ ಹೆಚ್ಚಿಸಿದ್ದು, ಇದು ರೈತ ವಿರೊಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
ಪ್ರತಿದಿನ ಎರಡು ಗಂಟೆ ವಿದ್ಯುತ್ ನೀಡುತ್ತಿರುವುದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಆದರೆ, ಕಳೆದ ಮೂರು ತಿಂಗಳಲ್ಲಿ ಎರಡು ಪಟ್ಟು ವಿದ್ಯುತ್ ಶುಲ್ಕ ಹೆಚ್ಚಿಸಲಾಗಿದೆ. ಸರ್ಕಾರ ರೈತರಿಗೆ ನಿರಂತರವಾಗಿ ಏಳು ತಾಸು ಕರೆಂಟ್ ಕೊಡದಿದ್ದರೆ, ವಿದ್ಯುತ್ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡುತ್ತೇವೆ. ನೀವು ಎಷ್ಟು ಜನರ ಮೇಲೆ ಕೇಸ್ ಹಾಕುತ್ತೀರಿ, ಎಷ್ಟು ಜನರನ್ನು ಜೈಲಿಗೆ ಹಾಕುತ್ತಿರಿ ನೀವೇ ಬಿಟ್ಟು ಕಳುಹಿಸಬೇಕು ಅಷ್ಟು ಜನ ಜೈಲಿಗೆ ಹೋಗುತ್ತೇವೆ ಎಂದು ಗುಡುಗಿದರು.
ಇದಕ್ಕೂ ಮುನ್ನಾ ಮಾತನಾಡಿದ ಬಸವರಾಜ ಬೊಮ್ಮಾಯಿ, ಇದು ಝೀರೊ ಅನುದಾನ ಸರ್ಕಾರವಾಗಿದ್ದು, ಯಾರಿಗೂ ಅನುದಾನ ಬಿಡುಗಡೆ ಮಾಡುತ್ತಿಲ್ಲ. ನಾವು ಅನುದಾನ ಹಂಚಿಕೆಯಲ್ಲಿ ಯಾರಿಗೂ ತಾರತಮ್ಯ ಮಾಡಿರಲಿಲ್ಲ. ನಾವು ವಿರೋಧ ಪಕ್ಷದ ಶಾಸಕರಿಗೆ ಅನುದಾನ ನೀಡಿದ್ದೇವೆ. ನಾವು ಎಲ್ಲರನ್ನೂ ಸಮಾನವಾಗಿ ನೀಡಿದ್ದೇವು ಎಂದರು.
ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಅವರು ಆಡಳಿತ ಪಕ್ಷದ ಶಾಸಕರಿಗೆ ಮಾತ್ರ ಅನುದಾನ ನೀಡುವುದಾಗಿ ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಾಲಕೃಷ್ಞ ಅವರು ಸರ್ಕಾರ ಅಲ್ಲ. ಅವರು ಮೊದಲು ತಮ್ಮ ಅನುದಾನ ಪಡೆಯಲಿ. ಮಾಗಡಿಯಲ್ಲಿ ಹಿಂದೆ ನಮ್ಮ ಶಾಸಕರು ಇರಲಿಲ್ಲ ಆದರೂ ಅವು ಅನುದಾನ ನೀಡಿದ್ದೆವು. ಬಾಲಕೃಷ್ಣ ಅವರು ಮೊದಲು ತಮಗೆ ಅನುದಾನ ಪಡೆಯಲಿ ನಾವು ನಮ್ಮ ಅನುದಾನ ಪಡೆದುಕೊಳ್ಳುತ್ತೇವೆ. ಈ ಸರ್ಕಾರದಲ್ಲಿ ಯಾರಿಗೂ ಅನುದಾನ ಇಲ್ಲ. ಇದು ಝಿರೊ ಅನುದಾನ ಸರ್ಕಾರ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿದರು.
Advertisement