ಮೈಸೂರು ದಸರಾ 2023: ಕೆಎಸ್ ಆರ್ ಟಿಸಿಯಿಂದ 2000 ಹೆಚ್ಚುವರಿ ಬಸ್‌ ಸೇವೆ

ಮೈಸೂರು ದಸರಾ-2023 ಮತ್ತು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.
ಕೆಎಸ್ ಆರ್ ಟಿಸಿ ಬಸ್ ಗಳ ಸಾಂದರ್ಭಿಕ ಚಿತ್ರ
ಕೆಎಸ್ ಆರ್ ಟಿಸಿ ಬಸ್ ಗಳ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮೈಸೂರು ದಸರಾ-2023 ಮತ್ತು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.

ಮುಂಬರುವ ದಸರಾ ರಜೆ ಗಮನದಲ್ಲಿಟ್ಟುಕೊಂಡು ಅಕ್ಟೋಬರ್ 24-ಅಕ್ಟೋಬರ್ 29 ರ ನಡುವೆ 2,000 ಹೆಚ್ಚುವರಿ ಬಸ್‌ ಕಾರ್ಯಾಚರಣೆಯನ್ನು ಕೆಎಸ್‌ಆರ್‌ಟಿಸಿ ಶುಕ್ರವಾರ ಪ್ರಕಟಿಸಿದೆ. ವಿಶ್ವ ವಿಖ್ಯಾತ ಮೈಸೂರು ದಸರಾ-2023 ಕ್ಕೆ ಜನರನ್ನು ಸಾಗಿಸಲು ಇನ್ನೂ 600 ಬಸ್‌ಗಳನ್ನು ನಿಯೋಜಿಸಲಾಗುವುದು.

ಒಂದು ದಿನದ ಪ್ರವಾಸದ ಪ್ಯಾಕೇಜ್‌ಗಳಿಗಾಗಿ ವಿಶೇಷ ದರ ಕಾರ್ಡ್‌ಗಳನ್ನು ಬಿಡುಗಡೆ ಮಾಡಲಾಗಿದ್ದು, ಮುಂಗಡ ಬುಕಿಂಗ್‌ಗಾಗಿ ksrtc.karnataka.gov.in ಅನ್ನು ಪ್ರವೇಶಿಸಬಹುದು. ಸಬ್ಸಿಡಿ ದರಗಳು ಅಕ್ಟೋಬರ್ 20 ರಿಂದ ಅಕ್ಟೋಬರ್ 26 ರವರೆಗೆ ಅನ್ವಯಿಸುತ್ತವೆ ಎಂದು ಕೆಎಸ್ ಆರ್ ಟಿಸಿ ಘೋಷಣೆ ಮಾಡಿದೆ.

ದಸರಾ ರಜೆಗಳಲ್ಲಿ ವಿವಿಧೆಡೆ ಪ್ರಯಾಣಿಸುವವರಿಗೆ 2000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆ ಹಾಗೂ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗಾಗಿ (Mysore Dasara) ಮೈಸೂರಿಗೆ ತೆರಳುವ ಪ್ರವಾಸಿಗರಿಗಾಗಿ 600 ದಸರಾ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗಿದೆ. ಕೆಎಸ್‌ಆರ್‌ಟಿಸಿಯಿಂದ ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್‌) ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜತೆಗೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆ ಒದಗಿಸಲಾಗುತ್ತದೆ ಎಂದು ತಿಳಿದುಬಂದಿದೆ.

ದಸರಾ ರಜೆಗಳ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅ.20ರಿಂದ 26ವರೆಗೆ ಬೆಂಗಳೂರಿನಿಂದ `ರಾಜ್ಯದ ಮತ್ತು ನೆರೆ ರಾಜ್ಯಗಳ ವಿವಿಧ ಸ್ಥಳಗಳಗೆ 2000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಈ ವಾಹನಗಳನ್ನು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್‌ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಚರಣೆ ಮಾಡಲಾಗುತ್ತದೆ. ಅದೇ ರೀತಿ ಅ. 24ರಿಂದ 29ರವರೆಗೆ ರಾಜ್ಯದ ಮತ್ತು ನೆರೆ ರಾಜ್ಯಗಳ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ರಾಜ್ಯದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು. ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್‌, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಇರುತ್ತದೆ. 

ಮೈಸೂರಿಗೆ 600 ವಿಶೇಷ ಬಸ್‌
ಬೆಂಗಳೂರಿನ ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 250 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್.ಅಣಿಕಟ್ಟು ಬೃಂದಾವನ ಉದ್ಯಾನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್‌.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಸಲು 350 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 600 ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ” ಫ್ಲೈ ಬಸ್” (Fly Bus) ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಸಲಾಗಿದೆ. ಇ-ಟಿಕೇಟ್ ಬುಕಿಂಗ್‌ ಅನ್ನು www.ksrtc.karnataka.gov.in ವೆಬ್ ಸೈಟ್ ಅಥವಾ ಮೊಬೈಲ್ ಮುಖಾಂತರ ಮಾಡಬಹುದಾಗಿದೆ. ಪ್ರಯಾಣಿಕರು ಕರ್ನಾಟಕ ಹಾಗೂ ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಪುದುಚೇರಿಲ್ಲಿರುವ ಒಟ್ಟು 703 ಗಣಕೀಕೃತ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳ ಮೂಲಕ ಮುಂಗಡವಾಗಿ ಸೀಟ್‌ ಕಾಯ್ದಿರಿಸಬಹುದಾಗಿದೆ.

ಪ್ರಯಾಣಿಕರಿಗೆ ಟಿಕೆಟ್‌ನಲ್ಲಿ ರಿಯಾಯಿತಿ
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡವಾಗಿ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ, ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೆಎಸ್‌ಆರ್‌ಟಿಸಿ ಕೋರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com