ಬೆಂಗಳೂರಿನಲ್ಲಿ ಎರಡು ಅಗ್ನಿ ಅವಘಡ ಪ್ರಕರಣ; ಒಂದೇ ದಿನ 13 ವಾಹನಗಳು ಸುಟ್ಟು ಕರಕಲು

ಬೆಂಗಳೂರು ನಗರದಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಬೆಂಕಿ ಅವಘಡಗಳಲ್ಲಿ 13 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ. ಎರಡೂ ಘಟನೆಗಳಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಈ ಎರಡೂ ಘಟನೆಗಳಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಅಗರಬತ್ತಿ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿ
ಅಗರಬತ್ತಿ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರು: ನಗರದಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಬೆಂಕಿ ಅವಘಡಗಳಲ್ಲಿ 13 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ. ಎರಡೂ ಘಟನೆಗಳಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಈ ಎರಡೂ ಘಟನೆಗಳಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಚೋಳೂರುಪಾಳ್ಯದಲ್ಲಿ ಶನಿವಾರ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಕಾರ್ಖಾನೆಯು ವಿಜಯನಗರದ ಪೈಪ್‌ಲೈನ್ ರಸ್ತೆಯ 7ನೇ ಕ್ರಾಸ್‌ನಲ್ಲಿದ್ದು, ಬಾಲಚಂದ್ರ ಎಂಬುವವರಿಗೆ ಸೇರಿದ್ದಾಗಿದೆ. ಕಾರ್ಖಾನೆಯನ್ನು ವಿಜಯ್ ರೇ ಮತ್ತು ಕಾಂತಿ ಲಾಲ್ ಎಂಬುವವರಿಗೆ ಬಾಡಿಗೆಗೆ ನೀಡಲಾಗಿತ್ತು.
ಮೊದಲಿಗೆ ಕಾರ್ಖಾನೆ ಹೊರಗೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳ ಪೈಕಿ ಒಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ನಂತರ ಇತರ ವಾಹನಗಳಿಗೂ ವ್ಯಾಪಿಸಿ ಎಂಟು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಮೂರು ಅಗ್ನಿಶಾಮಕ ವಾಹನಗಳ ಸತತ ಪ್ರಯತ್ನದಿಂದ ಬೆಂಕಿಯನ್ನು ಹತೋಟಿಗೆ ತರಲಾಯಿತು.

ಕಾರ್ಖಾನೆಯಲ್ಲಿ ಅಗರಬತ್ತಿಯ ಕವರ್‌ಗಳ ಮುದ್ರಣ ವಿಭಾಗದವನ್ನು ನಿರ್ವಹಿಸುವ ಕಾಂತಿ ಲಾಲ್ ಮಾತನಾಡಿ, ಬೆಳಿಗ್ಗೆ 9.15 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ಎರಡು ಗಂಟೆಗಳ ಕಾಲ ಮುಂದುವರೆಯಿತು ಎಂದು ಹೇಳಿದರು. 

ಕಾರ್ಖಾನೆಯಿಂದ ಹೊಗೆ ಬರುತ್ತಿದ್ದರಿಂದ ಗಾಬರಿಗೊಂಡ ನೆರೆಹೊರೆಯವರು ಕೂಡಲೇ ಅಗ್ನಿಶಾಮಕ ದಳ ಹಾಗೂ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. 
ಇದೇ ದಿನ ಇನ್ನೊಂದು ಘಟನೆ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಗುಜರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಲಗ್ಗೆರೆಯ ಚಾಮುಂಡಿನಗರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲಿ ನಿಲ್ಲಿಸಿದ್ದ ಐದು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ.

ಮಾಲೀಕರು ಟೈರ್ ಮತ್ತು ಇತರ ವಸ್ತುಗಳನ್ನು ಸಂಗ್ರಹಿಸಿದ್ದರಿಂದ, ವೃದ್ಧಾಶ್ರಮ ಸೇರಿದಂತೆ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ವ್ಯಾಪಿಸಿದೆ. ನಿವಾಸಿಗಳು ತಮ್ಮ ಮನೆಗಳಿಂದ ಓಡಿ ಹೊರಗೆ ಬಂದಿದ್ದಾರೆ. ವೃದ್ಧಾಶ್ರಮದಲ್ಲಿದ್ದವರನ್ನು ಬೇರೆಡೆಗೆ ಸ್ಥಳಾಂತರಿಸಬೇಕಾಯಿತು. ಅಗ್ನಿಶಾಮಕ ಸಿಬ್ಬಂದಿ ಸುಮಾರು ನಾಲ್ಕು ಗಂಟೆಗಳ ಕಾಲ ಹರಸಾಹಸಪಟ್ಟು ಬೆಂಕಿಯನ್ನು ಹತೋಟಿಗೆ ತಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com