ಡಿಕೆ ಶಿವಕುಮಾರ್ ಗೆ ಮತ್ತಷ್ಚು ಸಂಕಷ್ಟ: ಅಕ್ರಮ ಆಸ್ತಿ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು; 3 ತಿಂಗಳಲ್ಲಿ ವರದಿ ಸಲ್ಲಿಸಲು ಆದೇಶ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ‌ ವಿಚಾರಣೆಗೆ ಸಂಬಂಧಿಸಿದಂತೆ ಇಂದು ಹೈಕೋರ್ಟ್‌ ತೀರ್ಪು ನೀಡಿದ್ದು ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ, ಇದರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ‌ ವಿಚಾರಣೆಗೆ ಸಂಬಂಧಿಸಿದಂತೆ ಇಂದು ಹೈಕೋರ್ಟ್‌ ತೀರ್ಪು ನೀಡಿದ್ದು ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ, ಇದರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ತಮ್ಮ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ವಿಚಾರಣೆಯ ಎಫ್ಐಆರ್ ರದ್ದು ಕೋರಿದ್ದ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾ ಮಾಡಿದೆ. ತನಿಖೆಗೆ ನೀಡಿದ್ದ ಮಧ್ಯಂತರ ತಡೆ ಕೂಡ ತೆರವು ಮಾಡಲಾಗಿದೆ.

ಆದಾಯ ಮೂಲಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂಬ ಆರೋಪ ಸಂಬಂಧ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಏಪ್ರಿಲ್‌ನಲ್ಲಿ ಪೂರ್ಣಗೊಂಡಿತ್ತು. ಕರ್ನಾಟಕ ಹೈಕೋರ್ಟ್ ಆದೇಶ ಕಾಯ್ದಿರಿಸಿತ್ತು.

ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಡಿಕೆಶಿ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಅನುಮತಿ ನೀಡಿದ್ದು ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ನೀಡುವಂತೆ ಆದೇಶ ಹೊರಡಿಸಿದೆ.

ಶಿವಕುಮಾರ್ ಅವರು ಸಾಕಷ್ಟು ವಿಳಂಬದ ನಂತರ ಅರ್ಜಿ ಸಲ್ಲಿಸಿದ್ದಾರೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ. ಸಿಬಿಐನ ಬಹುತೇಕ ತನಿಖೆ ಮುಕ್ತಾಯವಾಗಿದೆ ಎಂದು ಕೋರ್ಟ್ ತಿಳಿಸಿದೆ.

ತನಿಖೆ ಪೂರ್ಣಗೊಂಡು ಪ್ರಕರಣದ ಅಂತಿಮ ವರದಿಯನ್ನು ಸಿಬಿಐ ಸಲ್ಲಿಸಿದ ನಂತರ ಪ್ರಕರಣ ರದ್ದುಗೊಳಿಸುವಂತೆ  ಶಿವಕುಮಾರ್ ಮತ್ತೊಮ್ಮೆ ನ್ಯಾಯಾಲಯವನ್ನು ಸಂಪರ್ಕಿಸಲು ಸ್ವಾತಂತ್ರ್ಯವಿದೆ ಎಂದು  ಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ನಟರಾಜನ್ ಅವರು ತೀರ್ಪಿನ ದಿನಾಂಕದಿಂದ 3 ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಲು ಸಿಬಿಐಗೆ ಆದೇಶಿಸಿದ್ದಾರೆ.

2014- 2018ರ ಸಮಯದಲ್ಲಿ ಆಸ್ತಿ ಗಳಿಕೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಡಿಕೆ ವಿರುದ್ಧ ಸಿಬಿಐ ಕೇಸ್ ದಾಖಲಿಸಿ ತನಿಖೆ ಆರಂಭಿಸಿತ್ತು. ಈ ಸಂಬಂಧ ಡಿಕೆಶಿ ಸಿಬಿಐ ತನಿಖೆ ರದ್ದು ಕೋರಿದ್ದರು. ಡಿಕೆ ಶಿವಕುಮಾರ್ ಪರ ಉದಯ್‌ ಹೊಳ್ಳ, ಸಂದೇಶ್ ಚೌಟ ಹಾಗೂ ಸಿಬಿಐ ಪರ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು.

2017ರಲ್ಲಿ ಡಿಕೆ ಶಿವಕುಮಾರ್‌ ನಿವಾಸ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಅದಾದ ಬಳಿಕ ಜಾರಿ ನಿರ್ದೇಶನಾಲಯ ಕೂಡ ಡಿಕೆ ಶಿವಕುಮಾರ್‌ ವಿರುದ್ಧ ತನಿಖೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದಂತೆ ಸಿಬಿಐ ಕೂಡ 2019ರಲ್ಲಿ ತನಿಖೆ ನಡೆಸಿತ್ತು. ಅದಾದ ಬಳಿಕ ಡಿಕೆ ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆಗೆ ಅಂದಿನ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಅನುಮತಿ ನೀಡಿತ್ತು.

ಸರ್ಕಾರದ ಅನುಮತಿ ನಂತರ ಅಕ್ಟೋಬರ್‌ 2020ರಲ್ಲಿ ಡಿಕೆ ಶಿವಕುಮಾರ್‌ ವಿರುದ್ಧ ಪ್ರಕರಣವನ್ನು ಸಿಬಿಐ ದಾಖಲಿಸಿಕೊಂಡಿತ್ತು. ನಂತರ ಇದೇ ಪ್ರಕರಣದಲ್ಲಿ ಡಿಕೆ ಶಿವಕುಮಾರ್‌ ತಿಹಾರ್‌ ಜೈಲಿಗೆ ಕೂಡ ಹೋಗಿದ್ದರು, ಜಾಮೀನು ಪಡೆದು ಹೊರ ಬಂದಿದ್ದರು. ನಂತರ ಸಿಬಿಐ ಪ್ರಕರಣ ರದ್ದುಗೊಳಿಸಬೇಕು ಎಂದು ಹೈಕೋರ್ಟ್‌ಗೆ ಡಿಕೆ ಶಿವಕುಮಾರ್‌ ಅರ್ಜಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com