ರಾಜಕೀಯ ವೇದಿಕೆಯಾಗಿ ಮಾರ್ಪಟ್ಟ ರೈತ ದಸರಾ ಕಾರ್ಯಕ್ರಮ: ಬಿಜೆಪಿ ವಿರುದ್ಧ ಸಚಿವ ಚೆಲುವರಾಯಸ್ವಾಮಿ ವಾಗ್ದಾಳಿ

ರೈತ ದಸರಾ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಸಚಿವ ಚಲುವರಾಯಸ್ವಾಮಿ
ಸಚಿವ ಚಲುವರಾಯಸ್ವಾಮಿ

ಮೈಸೂರು: ರೈತ ದಸರಾ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ಒಕ್ಕೂಟ ವ್ಯವಸ್ಥೆಯಾಗಿದ್ದರೂ ಕಾವೇರಿ ಮತ್ತು ಬರ ಪರಿಸ್ಥಿತಿ ಕುರಿತು ರಾಜ್ಯ ಸರ್ಕಾರದ ಮನವಿಗಳನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ. ಬಿಜೆಪಿಯ ಸುಳ್ಳಿನ ಕಂತೆಗಳಿಗೆ ಜನರು ಮರುಗುವ ಬದಲು ಈ ಬೆಳವಣಿಗೆಗಳನ್ನು ಅರಿತು ಚುನಾವಣೆಯ ಸಮಯದಲ್ಲಿ ತಕ್ಕ ಉತ್ತರ ನೀಡಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದರೂ ಕೇಂದ್ರ ನಾಯಕರ ಭೇಟಿ ಮಾಡಲು ಸಮಯ ಕೇಳಿದ್ದರೂ ಅವಕಾಶ ನೀಡುತ್ತಿಲ್ಲ. ರಾಜ್ಯದ ಸಂಸದರು ಕೂಡ ಯಾವುದೇ ಆಸಕ್ತಿ ತೋರುತ್ತಿಲ್ಲ. ಕಳೆದ 2 ತಿಂಗಳುಗಳಿಂದ ಪ್ರಧಾನಿ ಮೋದಿ ಭೇಟಿಗೆ ಸಮಯ ನೀಡಿಲ್ಲ. ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಕೂಡ ಅಪಾಯಿಂಟ್‌ಮೆಂಟ್ ನೀಡಿಲ್ಲ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿರುವ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಸುಪ್ರೀಂ ಕೋರ್ಟ್ ಮತ್ತು ಕಾವೇರಿ ನದಿ ನಿಗಾ ಪ್ರಾಧಿಕಾರದ ಮುಂದೆ ರಾಜ್ಯದ ವಾದವನ್ನು ಮಂಡಿಸಲು ತಮ್ಮ ಬದ್ಧತೆಯನ್ನು ತೋರಿಸಿದ್ದಾರೆ, ಜನರಿಗೆ ಕುಡಿಯುವ ನೀರಿನ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದ್ದೇವೆ. ಸರ್ಕಾರವು ತನ್ನ ವಾದವನ್ನು ಗಂಭೀರವಾಗಿ ಮಂಡಿಸದಿದ್ದರೆ ರಾಜ್ಯವು ಮತ್ತಷ್ಟು ನಷ್ಟವನ್ನು ಅನುಭವಿಸುತ್ತಿತ್ತು ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ರಾಜ್ಯ ಸರ್ಕಾರ 221 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಇದಕ್ಕಾಗಿ 5,020 ಕೋಟಿ ಪರಿಹಾರವನ್ನೂ ಕೋರಿದೆ. "ನಾವು ಪರಿಸ್ಥಿತಿಯನ್ನು ಕೇಂದ್ರಕ್ಕೆ ತಿಳಿಸಲು ಬಯಸಿದ್ದೇವೆ. ಆದರೆ, ಮೂರು ಪತ್ರಗಳನ್ನು ಬರೆದರೂ ನಮಗೆ ಭೇಟಿಗೆ ಅವಕಾಶ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ವೇಳೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಕೊಂಡಾಡಿದ ಅವರು, ನಾಲ್ಕು ಯೋಜನೆಗಳು ಮಹಿಳಾ ಕೇಂದ್ರಿತ ಮತ್ತು ಕುಟುಂಬಗಳ ಆದಾಯವನ್ನು ಹೆಚ್ಚಿಸಿದೆ ಎಂದು ಹೇಳಿದರು.

ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಮಾತನಾಡಿ, ಕಾಂಗ್ರೆಸ್ ಸರಕಾರ ರೈತರ ನೆರವಿಗೆ ಪ್ರತಿ ಲೀಟರ್ ಹಾಲಿನ ದರವನ್ನು 3 ರೂಗೆ ಹೆಚ್ಚಿಸಿ, ಪ್ರತಿ ಲೀಟರ್ ಗೆ 5 ರೂಪಾಯಿ ಆರ್ಥಿಕ ನೆರವು ನೀಡಿದೆ. ನೀರಿನ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ರೈತರು ಮೀನುಗಾರಿಕೆ, ರೇಷ್ಮೆ ಕೃಷಿ ಮತ್ತು ಕೃಷಿಯನ್ನು ಕೈಗೆತ್ತಿಕೊಂಡು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ಕೇಂದ್ರವು ನಿರೀಕ್ಷಿತ ಪ್ರಮಾಣದಲ್ಲಿ ನೆರವು ನೀಡದ ಕಾರಣ ಕೃಷಿ ಕ್ಷೇತ್ರ ಹಾಗೂ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com