ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರು ನಾಮಕರಣಕ್ಕೆ ಚಿಂತನೆ: ಡಿಕೆ ಶಿವಕುಮಾರ್

ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ, ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು ಎಂದು ತಿಳಿಸಿದ್ದಾರೆ. 

ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು. ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ನಂತರ ಈ ಜಿಲ್ಲೆಗೆ ಹಾರೋಹಳ್ಳಿ ಹೊಸ ತಾಲ್ಲೂಕು ಸೇರ್ಪಡೆಯಾಯಿತು. ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆ ಎಂದಿದ್ದಾರೆ. 

ಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ರಾಮನಗರವನ್ನು ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com