ನಕಲಿ ಉಗುರನ್ನೂ ಧರಿಸುವುದು ಬೇಡ.. ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶದ ಕಾನೂನು ಬಗ್ಗೆ ಚರ್ಚೆ: ಸಚಿವ ಈಶ್ವರ್ ಖಂಡ್ರೆ

ಉಗುರು, ಚರ್ಮ ಸೇರಿದಂತೆ ವನ್ಯಜೀವಿಗಳ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸುವ ಕೊನೆಯ ಅವಕಾಶ ನೀಡುವ ಕಾನೂನು ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳ ಕುರಿತು ಪರಾಮರ್ಶಿಸಲಾಗುತ್ತಿದೆ ಎಂದು ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಸಚಿವ ಈಶ್ವರ್ ಖಂಡ್ರೆ ಸಭೆ
ಸಚಿವ ಈಶ್ವರ್ ಖಂಡ್ರೆ ಸಭೆ
Updated on

ಬೆಂಗಳೂರು: ಉಗುರು, ಚರ್ಮ ಸೇರಿದಂತೆ ವನ್ಯಜೀವಿಗಳ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸುವ ಕೊನೆಯ ಅವಕಾಶ ನೀಡುವ ಕಾನೂನು ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳ ಕುರಿತು ಪರಾಮರ್ಶಿಸಲಾಗುತ್ತಿದೆ ಎಂದು ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಹುಲಿ ಉಗುರು ಧರಿಸಿದ್ದ ಹಿನ್ನಲೆಯಲ್ಲಿ ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಬಂಧನವಾದ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಅರಣ್ಯಾಧಿಕಾರಿಗಳ ದಾಳಿ ನಡೆದಿರುವಂತೆಯೇ ಇತ್ತ ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ನೀಡಿದ್ದು, ವನ್ಯಜೀವಿಗಳ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸುವ ಕೊನೆಯ ಅವಕಾಶ ನೀಡುವ ಕಾನೂನು ಬಗ್ಗೆ ಚರ್ಚೆನಡೆಸುವ ಸಾಧ್ಯತೆಗಳ ಕುರಿತು ಪರಾಮರ್ಶಿಸಲಾಗುತ್ತಿದೆ ಎಂದು  ಹೇಳಿದ್ದಾರೆ.

ಈ ಕುರಿತು ವಿಕಾಸಸೌಧದಲ್ಲಿ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹುಲಿ ಉಗುರಿನ ನಕಲಿ ಸಹಿತ ಈ ರೀತಿಯ ಪೆಂಡೆಂಟ್ ಹಾಕಿಕೊಳ್ಳಬಾರದೆಂದು ಮನವಿ ಮಾಡುತ್ತೇನೆ. ನಕಲಿಯಿಂದಲೂ ಪ್ರೇರಣೆ ಆಗುತ್ತದೆ, ನಕಲಿ ಹಾಕಿಕೊಂಡವರ ವಿರುದ್ಧ ಕ್ರಮದ ಬಗ್ಗೆ ಕಾಯಿದೆಯಲ್ಲಿ ಇಲ್ಲ. ಆದರೆ, ನಕಲಿ ಪೆಂಡೆಂಟ್ ಗಳನ್ನು ಯಾರು ಹಾಕಿಕೊಳ್ಳಬಾರದೆಂದು ಮನವಿ ಮಾಡಿದರು. 

ನಕಲಿನೂ ಉಗುರು ಅಥವಾ ಇತರೆ ವಸ್ತುಗಳನ್ನೂ ಹಾಕಿಕೊಳ್ಳಬಾರದು, ಅದನ್ನು ಹಾಕಿಕೊಂಡ್ರೆ ಬೇರೆಯವರಿಗೆ ಪ್ರಚೋದನೆ ಮಾಡಿದಂತೆ. ಅವಾಗ ಪ್ರಾಣಿಗಳ ಹತ್ಯೆಯ ಪ್ರಯತ್ನಗಳು ಆಗುತ್ತವೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು.

ಹುಲಿ ಉಗುರಿನ ಲಾಕೆಟ್ ಇರುವ ಸರ ಧರಿಸಿರುವವರ ವಿರುದ್ಧ ನಿತ್ಯ ದೂರುಗಳು ಬರುತ್ತಿದ್ದು, ಬಹುತೇಕರಿಗೆ ಇದು ಅಪರಾಧ ಎಂಬ ಅರಿವೇ ಇಲ್ಲ ಎಂಬುದು ಗೋಚರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಕಾನೂನು ಸಾಧ್ಯತೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ತಮ್ಮ ಪೂರ್ವಜರು ಹೊಂದಿದ್ದ ವನ್ಯಜೀವಿ ಅಂಗಾಂಗದಿಂದ ಮಾಡಿದ ಟ್ರೋಫಿ, ಫಲಕ, ಪೆಂಡೆಂಟ್ ಸೇರಿದಂತೆ ಯಾವುದೇ ಉತ್ಪನ್ನಗಳನ್ನು ಅರಣ್ಯ ಇಲಾಖೆಯಿಂದ ದೃಢೀಕರಿಸಿಕೊಂಡು ಮಾಲೀಕತ್ವದ ಹಕ್ಕು ಪಡೆದುಕೊಳ್ಳಲು 2003ರವರೆಗೆ ಹಲವು ಅವಕಾಶ ನೀಡಲಾಗಿತ್ತು. ಹಲವರು ತಮ್ಮ ಬಳಿ ಇದ್ದ ವನ್ಯಜೀವಿ ಉತ್ಪನ್ನಗಳಿಗೆ ಮಾಲೀಕತ್ವದ ಹಕ್ಕು ಪಡೆದಿದ್ದಾರೆ. ಇನ್ನೂ ಅನೇಕರು ದೃಢೀಕರಣ ಮತ್ತು ಪ್ರಮಾಣ ಪತ್ರ ಪಡೆದಿಲ್ಲ ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ಕೆಲವರ ಮನೆಗಳಲ್ಲಿ ಜಿಂಕೆ ಚರ್ಮ, ಆನೆ ದಂತದಿಂದ ಮಾಡಿದ ಕಲಾಕೃತಿಗಳು, ಜಿಂಕೆ ಮತ್ತು ಸಾರಂಗದ ಕೊಂಬು ಇತ್ಯಾದಿಗಳನ್ನು ಇಟ್ಟುಕೊಂಡಿರುತ್ತಾರೆ. ಇದು ಅಪರಾಧ ಎಂಬುದೂ ಅವರಿಗೆ ತಿಳಿದಿಲ್ಲ. ವರ್ತೂರು ಸಂತೋಷ ಪ್ರಕರಣ ವರದಿಯಾದ ಬಳಿಕ, ವನ್ಯಜೀವಿ ಉತ್ಪನ್ನಗಳ ಅಕ್ರಮ ದಾಸ್ತಾನಿನ ಬಗ್ಗೆ ಹೆಚ್ಚಾಗಿ ದೂರುಗಳು ಬರುತ್ತಿವೆ. ಕಾನೂನಿನ ಅರಿವಿಲ್ಲದ ಶ್ರೀಸಾಮಾನ್ಯರಿಗೆ ಆಗುವ ತೊಂದರೆ ತಪ್ಪಿಸಲು ಒಂದು ಬಾರಿ ಕೊನೆಯದಾಗಿ ಇಂತಹ ಅಕ್ರಮ ಸಂಗ್ರಹಣೆ/ದಾಸ್ತಾನಿನ ಬಗ್ಗೆ ಘೋಷಣೆ ಮಾಡಿಕೊಳ್ಳಲು ಮತ್ತು ಸರ್ಕಾರಕ್ಕೆ ಮರಳಿಸಲು ಅವಕಾಶ ನೀಡುವ ಬಗ್ಗೆ ಪರಾಮರ್ಶಿಸಿ, ಇದಕ್ಕೆ ಇತಿಶ್ರೀ ಹಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಅಳಿವಿನಂಚಿನಲ್ಲಿರುವ, ಅಮೂಲ್ಯ ಮತ್ತು ಅಪರೂಪದ ವನ್ಯ ಜೀವಿಗಳಾದ ಹುಲಿ, ಚಿರತೆ, ಚಿಂಕಾರ, ಕೃಷ್ಣಮೃಗ, ಸಾಂಬಾರ್, ಕರಡಿ ಸೇರಿದಂತೆ ಹಲವು ಕಾಡು ಪ್ರಾಣಿಗಳನ್ನು ಪರಿಶಿಷ್ಟ 1ರಲ್ಲಿ ಪಟ್ಟಿ ಮಾಡಲಾಗಿದ್ದು, ಇಂತಹ ಪ್ರಾಣಿಗಳನ್ನು ಕೊಲ್ಲುವುದು, ಬೇಟೆ ಆಡುವುದು, ಅಂತಹ ಪ್ರಾಣಿಗಳ ದೇಹದ ಯಾವುದೇ ಭಾಗದಿಂದ ತಯಾರಿಸಿದ ವಸ್ತುವನ್ನು ಅಲಂಕಾರಿಕವಾಗಿ ಮನೆಯಲ್ಲಿಡುವುದು, ಧರಿಸುವುದು ಕೂಡ ಅಪರಾಧವಾಗಿರುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com