ಹೆಚ್'ಡಿ ಕುಮಾರಸ್ವಾಮಿ ಗುಣಮುಖ: ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್'ಡಿ. ಕುಮಾರಸ್ವಾಮಿಯವರು ಇದೀಗ ಗುಣಮುಖರಾಗಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆಂದು ತಿಳಿದುಬಂದಿದೆ.
ಹೆಚ್'ಡಿ.ಕುಮಾರಸ್ವಾಮಿ
ಹೆಚ್'ಡಿ.ಕುಮಾರಸ್ವಾಮಿ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್'ಡಿ.ಕುಮಾರಸ್ವಾಮಿಯವರು ಇದೀಗ ಗುಣಮುಖರಾಗಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆಂದು ತಿಳಿದುಬಂದಿದೆ.

ಶುಕ್ರವಾರ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು, ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.

ಚಿಕಿತ್ಸೆ ನೀಡಿದ ವೈದ್ಯರು ವಿಶ್ರಾಂತಿ ಪಡೆಯುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕೂಡಲೇ ಕುಮಾರಸ್ವಾಮಿ ಅವರು ಬಿಡದಿ ಬಳಿಯ ತಮ್ಮ ಫಾರ್ಮ್‌ಹೌಸ್‌ಗೆ ತೆರಳಿ ಎರಡರಿಂದ ಮೂರು ವಾರಗಳ ಕಾಲ ಅಲ್ಲಿಯೇ ಕಾಲ ಕಳೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ಕಳೆದ ಸೋಮವಾರ ಪ್ರಚಾರ ಆರಂಭಿಸಿತ್ತು. ಈ ಹಿನ್ನೆಲೆಯಲ್ಲಿ ಅನಾರೋಗ್ಯದ ನಡುವಲ್ಲೂ ಮತ್ತೆ ರಾಜಕೀಯದಲ್ಲಿ ಸಕ್ರಿಯರಾಗುತ್ತಾರೆಂಬ ಆತಂಕ ಕುಮಾರಸ್ವಾಮಿಯವರ ಕುಟುಂಬದವರಲ್ಲಿ ಮನೆ ಮಾಡಿದೆ. 

ನಿನ್ನೆಯಷ್ಟೇ ಶುಕ್ರವಾರ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಸೇರಿದಂತೆ ಜೆಡಿಎಸ್ ಕೋರ್ ಕಮಿಟಿಯ ಸುಮಾರು 20 ಸದಸ್ಯರು ವಿಡಿಯೋ ಕಾನ್ಫರೆನ್ಸ್ ನಡೆಸಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು. 

ಈ ನಡುವೆ ಜಯನಗರದ ಅಪೋಲೋ ಆಸ್ಪತ್ರೆ ಬಿಡುಗಡೆ ಮಾಡಿದ ಆರೋಗ್ಯ ಬುಲೆಟಿನ್ ನಂತೆ ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು,  ವೈದ್ಯಕೀಯ ತಜ್ಞರು ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆಂದು ತಿಳಿಸಿದೆ.

ಕುಮಾರಸ್ವಾಮಿ ಅವರ ಪತ್ನಿ ಅನಿತಾ, ಪುತ್ರ ನಿಖಿಲ್ ಮತ್ತು ಮೊಮ್ಮಗ ಅವಿಯಂದೇವ್ ಆಸ್ಪತ್ರೆಯಲ್ಲಿಯೇ ಇದ್ದು, ಕುಮಾರಸ್ವಾಮಿಯರ ಆರೋಗ್ಯವನ್ನು ವಿಚಾರಿಸುತ್ತಿದ್ದಾರೆ. 

ಕುಮಾರಸ್ವಾಮಿ ಅವರಿಗೆ ಬುಧವಾರ ಮುಂಜಾನೆ ಲಘು ಮೆದುಳಿನ ಸ್ಟ್ರೋಕ್‌ಗೆ ಒಳಗಾಗಿದ್ದು, ಅವರನ್ನು ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟದ ಸಚಿವರಾದ ಎನ್.ಚಲುವರಾಯಸ್ವಾಮಿ ಮತ್ತು ಶಿವರಾಜ್ ತಂಗಡಗಿ ಅವರು ಗುರುವಾರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com