ಬೆಂಗಳೂರು: ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೊರಡಿಸಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಹೈಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಮನವಿ ಸಲ್ಲಿಸಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ ಅವರು ಭಾರತೀಯ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ಸಲ್ಲಿಸಿದ್ದು, ಅಕ್ರಮ ಎಸಗುವ ಮೂಲಕ ಆಯ್ಕೆಯಾಗಿದ್ದಾರೆ ಎಂದು ಪರಾಜಿತ ಅಭ್ಯರ್ಥಿ ಎ ಮಂಜು ಮತ್ತು ವಕೀಲ ದೇವರಾಜೇಗೌಡ ಎಂಬುವರು ಅರ್ಜಿ ಸಲ್ಲಿಸಿದ್ದರು. ಇದನ್ನು ಹೈಕೋರ್ಟ್ ಏಕಸದಸ್ಯ ಪೀಠವು ಪುರಸ್ಕರಿಸಿತ್ತು.
ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಕಾಲಾವಕಾಶ ಅಗತ್ಯವಿದ್ದು, ಅಲ್ಲಿಯವರೆಗೂ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಪ್ರಜ್ವಲ್ ರೇವಣ್ಣ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.
ಈ ಸಂದರ್ಭದಲ್ಲಿ ದೇವರಾಜೇಗೌಡ ಅವರ ಪರ ಹಿರಿಯ ವಕೀಲ ಪ್ರಮೀಳಾ ನೇಸರ್ಗಿ ಅವರು ಪ್ರಜ್ವಲ್ ವಿರುದ್ಧದ ಅನರ್ಹ ಆದೇಶಕ್ಕೆ ತಡೆ ನೀಡಬಾರದು. ನಾವು ಆಕ್ಷೇಪಣೆ ಸಲ್ಲಿಸುತ್ತೇವೆ ಎಂದರು. ಇದನ್ನು ಆಲಿಸಿದ ಪೀಠವು ಆಕ್ಷೇಪಣೆ ಸಲ್ಲಿಸಲು ಆದೇಶಿಸಿ, ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿತು.
Advertisement