ಭೂ ಹಗರಣ: ಸಚಿವ ಡಿ. ಸುಧಾಕರ್‌ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

ಭೂ ಹಗರಣ ಮತ್ತು ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್‌ ಅವರ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಡಿ.ಸುಧಾಕರ್
ಡಿ.ಸುಧಾಕರ್

ಬೆಂಗಳೂರು: ಭೂ ಹಗರಣ ಮತ್ತು ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್‌ ಅವರ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ನಿರ್ದೇಶಕರೂ ಆಗಿರುವ ಸಚಿವ ಸುಧಾಕರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಪೀಠ ಈ ಆದೇಶ ನೀಡಿದೆ.

ಅರ್ಜಿಗೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಪೀಠ, ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿದ್ದು, ಅಕ್ಟೋಬರ್ 3ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

ಸಚಿವ ಸುಧಾಕರ್ ಹಾಗೂ ಇತರರ ವಿರುದ್ಧ ಯಲಹಂಕ ನಿವಾಸಿ ಸುಬ್ಬಮ್ಮ ಅವರು ಸೆ.10ರಂದು ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸುಧಾಕರ್ ಮತ್ತು ಇತರರು ತನ್ನ ಕುಟುಂಬ ಸದಸ್ಯರಿಗೆ ವಂಚಿಸಿ ದಾಖಲೆಗಳ ಮೇಲೆ ಸಹಿ ಪಡೆದಿದ್ದಾರೆ ಎಂದು ಸುಬ್ಬಮ್ಮ ಆರೋಪಿಸಿದ್ದಾರೆ. ಈ ಸಂಬಂಧ ಸಿವಿಲ್ ನ್ಯಾಯಾಲಯ ಹಾಗೂ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹೀಗಿದ್ದರೂ ಸುಧಾಕರ್ ಮತ್ತಿತರರು ಬಂದು ಮನೆಗಳನ್ನು ಖಾಲಿ ಮಾಡಿದ್ದರು. ಇದನ್ನು ಪ್ರಶ್ನಿಸಿದಾಗ 35ಕ್ಕೂ ಹೆಚ್ಚು ಮಂದಿಗೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸಚಿವ ಸುಧಾಕರ್ ಅವರು ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನನಗೆ ಎಲ್ಲ ಜಾತಿಗಳ ಬಗ್ಗೆ ಗೌರವವಿದೆ ಮತ್ತು ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಇದು ರಾಜಕೀಯ ಪ್ರೇರಿತವಾದ ಸುಳ್ಳು ಆರೋಪ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಪ್ರಕರಣದ ಬಗ್ಗೆ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು ಸಚಿವ ಸುಧಾಕರ್ ಅವರು ಜಾಗ ಖರೀದಿಸಿದ್ದಾರೆ. ಆದರೆ ಚುನಾವಣೆ ಸಂದರ್ಭದಲ್ಲಿ ಆ ಜಾಗಕ್ಕೆ ಯಾರೋ ಬೇಲಿ ಹಾಕಿದ್ದಾರೆ. ಇದು ಯಾಕೆ ಎಂದು ಪ್ರಶ್ನೆ ಮಾಡಿದ್ದಕ್ಕೆ ದಲಿತ ದೌರ್ಜನ್ಯದಡಿ ಪ್ರಕರಣ ದಾಖಲಾಗಿದೆ. ಇದೊಂದು ಸುಳ್ಳು ಕೇಸು ಎಂದು ತಮ್ಮ ಸಹೋದ್ಯೋಗಿಯ ಪರ ಬ್ಯಾಟಿಂಗ್ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com