ಹೆಲ್ತ್ ಕೇರ್ ಹಬ್ ಆಗಿ ಕಲಬುರಗಿ ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ಕಲಬುರಗಿ ನಗರವನ್ನು ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಧಾನ ಆರೋಗ್ಯ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕಲಬುರಗಿ ನಗರವನ್ನು ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಧಾನ ಆರೋಗ್ಯ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 ಪೊಲೀಸ್ ಪರೇಡ್ ಮೈದಾನದಲ್ಲಿ ಭಾನುವಾರ ನಡೆದ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಮತ್ತು ಟ್ರಾಮಾ ಕೇರ್ ಸೆಂಟರ್ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಉದ್ಘಾಟಿಸಲಾಗುವುದು ಎಂದರು.

ಜಿಮ್ಸ್ ಆವರಣದಲ್ಲಿ ಅಂದಾಜು 200 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಲಾಗುವುದು, 162.80 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಹೇಳಿದರು.ಸಿಎಸ್ ಆರ್ ನಿಧಿಯಡಿ ಅಂದಾಜು ರೂ. 5 ಕೋಟಿ ವೆಚ್ಚದಲ್ಲಿ ಆರೋಗ್ಯ ಎಟಿಎಂಗಳನ್ನು ಪಿಎಚ್‌ಸಿಗಳು, ಸ್ವಾಸ್ಥ್ಯ ಕೇಂದ್ರಗಳು ಮತ್ತು ಇತರ ಸ್ಥಳಗಳಲ್ಲಿ ತೆರೆಯಲಾಗುವುದು, ಈ ಪ್ರದೇಶದಲ್ಲಿ ಪಿಎಚ್‌ಸಿಗಳನ್ನು ನಿರ್ಮಿಸಲು ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳನ್ನು ಅನುಸರಿಸಲು ಕೆಕೆಆರ್‌ಡಿಬಿ ಮತ್ತು ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ 371 ಜೆ ಕಲಂಗೆ ತಿದ್ದುಪಡಿ ತರುವಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ಧರಂ ಸಿಂಗ್ ಅವರ ಕೊಡುಗೆಯನ್ನು ಈ ಭಾಗದ ಜನರು ಮರೆಯಬಾರದು ಎಂದು ತಿಳಿಸಿದ ಸಿಎಂ, ಹಿಂದಿನ 2013 ರಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರದ ಅವಧಿಯಲ್ಲಿ, ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಯಿತು ಮತ್ತು 371 ಜೆ ಕಲಂ ಪ್ರಕಾರ ಯುವಕರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ವಿಶೇಷ ಮೀಸಲಾತಿಯನ್ನು ನೀಡಲು ಪ್ರಾರಂಭಿಸಲಾಯಿತು ಎಂದು ಅವರು ಹೇಳಿದರು. ಜಾತಿ, ಧರ್ಮದ ಭೇದವಿಲ್ಲದೆ ಪ್ರತಿಯೊಬ್ಬರ ಅಭಿವೃದ್ಧಿಗೆ ಕರ್ನಾಟಕ ಮಾದರಿಯಾಗಿದೆ ಎಂದು ಹೇಳಿದರು.

‘ಗ್ರಾಮೀಣ ಕೂಲಿ ಕಾರ್ಮಿಕರಿಗಾಗಿ ಕೂಸಿನ ಮನೆ’ ಶಿಶುಮಂದಿರ ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಇಂತಹ  881 ಕೇಂದ್ರಗಳನ್ನು ಸ್ಥಾಪಿಸಲಾಗುವುದು, ಇದರಲ್ಲಿ ತರಬೇತಿ ಪಡೆದ ಆರೈಕೆದಾರರು ಇರುತ್ತಾರೆ. ಕಲುಷಿತ ನೀರು ಕುಡಿಯುವುದರಿಂದ ಸಾವು ಮತ್ತು ಅನಾರೋಗ್ಯದ ಘಟನೆಗಳನ್ನು ತಪ್ಪಿಸಲು ಗ್ರಾಮೀಣ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು. 

ಗ್ರಾಮೀಣ ಪ್ರದೇಶಗಳಲ್ಲಿ ಘನತ್ಯಾಜ್ಯ ಹಾಗೂ ಬೂದು ನೀರಿನ ವೈಜ್ಞಾನಿಕ ವಿಲೇವಾರಿಗೆ ಆದ್ಯತೆ ನೀಡಲಾಗಿದೆ. 400 ಸಮುದಾಯ ಶೌಚಾಲಯ ನಿರ್ಮಿಸಲು 100 ಕೋಟಿ ರೂ. ಒದಗಿಸಲಾಗಿದೆ. ಈ ಪ್ರದೇಶದಲ್ಲಿ 218 ಸಮುದಾಯ ಶೌಚಾಲಯಗಳನ್ನು ನಿರ್ಮಿಸಲು ಸ್ಥಳಗಳನ್ನು ಗುರುತಿಸಲಾಗಿದೆ. ಗ್ರಾಮೀಣ ಗ್ರಂಥಾಲಯಗಳನ್ನು ‘ಅರಿವು ಕೇಂದ್ರ’ಗಳಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ 939 ಅರಿವು ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗಿದೆ ಎಂದರು.

ನಂತರ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ 9 ಜನ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದ ಮುಖ್ಯಮಂತ್ರಿ,  ಐವಾನ್-ಇ-ಶಾಹಿ ಅತಿಥಿಯಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಸ್ವೀಕರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com