ಕಾವೇರಿ ವಿವಾದ: ಇಂದು ಸಂಜೆ ಮಹತ್ವದ ಸಚಿವ ಸಂಪುಟ ಸಭೆ, ಮುಂದಿನ ನಡೆ ಬಗ್ಗೆ ನಿರ್ಧಾರ

ಕಾವೇರಿ ನದಿ ನೀರು ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆಯಾಗಿದ್ದು, ಇದರ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಂದು ಸಚಿವ ಸಂಪುಟ ಸಭೆ ನಡೆಯಲಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಕಾವೇರಿ ನದಿ ನೀರು ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆಯಾಗಿದ್ದು, ಇದರ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಂದು ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಕಾವೇರಿ ಬಿಕ್ಕಟ್ಟು ಕುರಿತು ಚರ್ಚೆಗಳು ನಡೆಸಲಿದ್ದು, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಕುರಿತು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಗಳಿವೆ.

ವಿಧಾನಸೌಧದಲ್ಲಿ ಸಂಜೆ 6 ಗಂಟೆಗೆ ಸಭೆ ನಡೆಯಲಿದೆ. ಸುಪ್ರೀಂ ಕೋರ್ಟ್ ತಮಿಳುನಾಡಿಗೆ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ನಿರ್ದೇಶನ ನೀಡಿದೆ. ಇತ್ತ ಕೆಆರ್​​ಎಸ್ ಜಲಾಶಯ ಬತ್ತಿ ಹೋಗಿದ್ದು, ಕುಡಿಯುವ ನೀರಿಗೂ ಸಂಚಕಾರ ಉಂಟಾಗುವ ಆತಂಕವಿದೆ. ಕೋರ್ಟ್ ಆದೇಶದಿಂದ ರೊಚ್ಚಿಗೆದ್ದಿರುವ ರೈತರು, ಕನ್ನಡಪರ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ.

ಕೋರ್ಟ್ ಆದೇಶದಿಂದ ತೀವ್ರ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರ, ಮುಂದಿನ ನಡೆ ಏನು ಎಂಬ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಿದೆ. ಮುಂದಿನ ಕಾನೂನು ಹೋರಾಟ, ಆಯ್ಕೆಗಳು, ಸುಪ್ರೀಂ ಆದೇಶ ಪಾಲಿಸುವ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ಸರ್ಕಾರ ಒಂದು ತೀರ್ಮಾನಕ್ಕೆ ಬರಲಿದೆ. ರೈತರು ಬೀದಿಗಿಳಿದು ಹೋರಾಟ ತೀವ್ರಗೊಳಿಸಿದ್ದು, ಯಾವ ರೀತಿ ರೈತರನ್ನು ಸಮಾಧಾನಪಡಿಸುವುದು ಎಂಬ ಬಗ್ಗೆಯೂ ಚರ್ಚಿಸುವ ಸಾಧ್ಯತೆ ಇದೆ.

ಉಳಿದಂತೆ, ಬರದ ಬಗ್ಗೆಯೂ ಪ್ರಸ್ತಾಪವಾಗಲಿದೆ.‌ ಕುಡಿಯುವ ನೀರು ಸರಬರಾಜು, ಪರಿಹಾರ ಕಾರ್ಯ, ಕೇಂದ್ರ ಸರ್ಕಾರಕ್ಕೆ ಪರಿಹಾರ ಕೋರಿ ಮೆಮೊರಾಂಡಮ್ ಸಲ್ಲಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಬರ ನಿರ್ವಹಣೆಯ ಬಗ್ಗೆಯೂ ಮಾತುಕತೆ ನಡೆಯಲಿದೆ. ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸುವ ಬಗೆಗೂ ಸಂಪುಟ ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸುವ ಸಂಭವ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com