ಬೆಂಗಳೂರು: ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದ ಬೆನ್ನಲ್ಲೇ ಸುಪ್ರೀಂ ಆದೇಶ ಖಂಡಿಸಿ ಪ್ರತಿಭಟನೆಗಳು ಮುಂದುವರೆದಿದ್ದು, ಶುಕ್ರವಾರ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಕಾವೇರಿ ನದಿ ಜಲಾನಯನ ಜಿಲ್ಲೆಗಳಾದ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿ ಮತ್ತು ನೆರೆ ರಾಜ್ಯಕ್ಕೆ ನೀರು ಬಿಡದಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.
ಮುಂಗಾರು ಹಂಗಾಮಿನ ಕೊರತೆಯಿಂದ ನೀರಿನ ಕೊರತೆ ಉಂಟಾಗಿರುವ ಕಾರಣ, ಕಾವೇರಿ ಜಲಾನಯನ ಪ್ರದೇಶದಲ್ಲಿ ಕುಡಿಯುವ ನೀರು ಮತ್ತು ಬೆಳೆದು ನಿಂತಿರುವ ಬೆಳೆಗಳಿಗೆ ನೀರಿನ ಅಗತ್ಯವನ್ನು ಗಣನೆಗೆ ತೆಗೆದುಕೊಂಡು ನೀರು ಬಿಡುವ ಸ್ಥಿತಿಯಲ್ಲಿಲ್ಲ ಇಲ್ಲ ಎಂದು ಕರ್ನಾಟಕ ಹೇಳುತ್ತಿದೆ.
ನಿನ್ನೆ ಮೈಸೂರು, ಮಂಡ್ಯ ಭಾಗಕ್ಕೆ ಸೀಮಿತವಾಗಿದ್ದ ಪ್ರತಿಭಟನೆ ಇಂದು ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೂ ವ್ಯಾಪಿಸಿದೆ.
ಮಂಡ್ಯದ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ.
ಕಾವೇರಿ ಹೋರಾಟಕ್ಕೆ ಕನ್ನಡ ಸಾಹಿತ್ಯ ಪರಿಷತ್, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ನಟ ಅಭಿಷೇಕ್ ಅಂಬರೀಷ್ ಸೇರಿದಂತೆ ಅನೇಕರು ಬೆಂಬಲ ಸೂಚಿಸಿದ್ದಾರೆ.
Advertisement