ರಾಜ್ಯದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ಮಂಡ್ಯ, ಮದ್ದೂರಿನಲ್ಲಿ ಬಂದ್​ಗೆ ಉತ್ತಮ ಪ್ರತಿಕ್ರಿಯೆ; ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ

ರಾಜ್ಯದಲ್ಲಿ ಕಾವೇರಿ ಹೋರಾಟದ ಕಿಚ್ಚು ಮತ್ತಷ್ಟು ತೀವ್ರಗೊಂಡಿದೆ. ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸದಂತೆ ಒತ್ತಾಯಿಸಿ ರೈತ ಸಂಘಟನೆಗಳು ಶನಿವಾರ ಮಂಡ್ಯ ಹಾಗೂ ಮದ್ದೂರಿನಲ್ಲಿ ಬಂದ್ ನಡೆಸುತ್ತಿದ್ದು, ಬಂದ್'ಗೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ಮಂಡ್ಯದಲ್ಲಿ ಬಿಗಿ ಭದ್ರತೆ ನಿಯೋಜಿಸಿರುವುದು.
ಮಂಡ್ಯದಲ್ಲಿ ಬಿಗಿ ಭದ್ರತೆ ನಿಯೋಜಿಸಿರುವುದು.

ಬೆಂಗಳೂರು: ರಾಜ್ಯದಲ್ಲಿ ಕಾವೇರಿ ಹೋರಾಟದ ಕಿಚ್ಚು ಮತ್ತಷ್ಟು ತೀವ್ರಗೊಂಡಿದೆ. ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸದಂತೆ ಒತ್ತಾಯಿಸಿ ರೈತ ಸಂಘಟನೆಗಳು ಶನಿವಾರ ಮಂಡ್ಯ ಹಾಗೂ ಮದ್ದೂರಿನಲ್ಲಿ ಬಂದ್ ನಡೆಸುತ್ತಿದ್ದು, ಬಂದ್'ಗೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಆಟೋ ಚಾಲಕರು, ಖಾಸಗಿ ವಾಹನ ಮಾಲೀಕರು, ಸ್ಟುಡಿಯೋ ಮಾಲೀಕರು, ಜಿಲ್ಲೆಯ ಎಲ್ಲಾ ವರ್ಗದ ಜನತೆ, ವಿದ್ಯಾರ್ಥಿ ಸಮೂಹ, ರೈತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿಗಳು, ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘಟನೆಗಳು ಸ್ವಯಂಪ್ರೇರಿತವಾಗಿ ಬಂದ್‌ನಲ್ಲಿ ಭಾಗವಹಿಸಿ ಬೆಂಬಲ ಸೂಚಿಸುತ್ತಿವೆ.

ಬೆಳಿಗ್ಗೆ 8ರಿಂದ ಸಂಜೆ 6 ಗಂಟೆವರೆಗೂ ಬಂದ್ ಇರಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಇನ್ನು ಮದ್ದೂರಿನಲ್ಲಿ ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದ್ದು, ಟಿಬಿ ಸರ್ಕಲ್ ನಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಬೆಂಗಳೂರು ಮೈಸೂರು ಹೆದ್ದಾರಿ ತಡೆದು ತಲೆಯ ಮೇಲೆ ಕಬ್ಬಿನ ಹೊರೆ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳೂ ಕೂಡ ಭಾಗಿಯಾಗಿರುವುದು ಕಂಡು ಬಂದಿದೆ.

ತಮಿಳುನಾಡಿಗೆ ನೀರು ಹರಿಸುವ ಮೂಲಕ ಮಂಡ್ಯ ಜಿಲ್ಲೆಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಕೆಆರ್'ಎಸ್ ಜಲಾಶಯದ ಬಳಿಯೂ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು. ಅಲ್ಲದೆ, ಪೆಟ್ರೋಲ್, ಡೀಸೆಲ್ ಸೇವಾ ಕೇಂದ್ರಗಳು ಸೇರಿದಂದೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರಿಗಳು, ಮಾಲೀಕರು ಬಂದ್ ನಡೆಸುವ ಮೂಲಕ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡರು. ಈ ವೇಳೆ ಅಂಗಡಿ ತೆರೆದಿದ್ದ ಹಲವರು ಅಂಗಡಿಗಳನ್ನು ಬಂದ್ ಮಾಡಿ ಬೆಂಬಲ ವ್ಯಕ್ತಪಡಿಸಿದರು.

ಮಂಡ್ಯ ರಕ್ಷಣಾ ವೇದಿಕೆಯ ಸದಸ್ಯರು ಬೈಕ್ ರ್ಯಾಲಿ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು. ತಮಿಳುನಾಡಿಗೆ ನೀರು ಬಿಡಲಾಗುತ್ತಿದ್ದು, ಇದರಿಂದ ಮಂಡ್ಯ ಮತ್ತು ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಘೋಷಣೆಗಳನ್ನು ಕೂಗಿದರು.

ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5,000 ಕ್ಯೂಸೆಕ್ ನೀರು ಬಿಡುವುದನ್ನು ಮುಂದುವರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಕರ್ನಾಟಕಕ್ಕೆ ಸೂಚಿಸಿತ್ತು. ಸುಪ್ರೀಂಕೋರ್ಟ್ ಕೂಡ ಆದೇಶದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ನಿರಾಕರಿಸಿತ್ತು. ಈ ಬೆಳವಣಿಗೆ ಬಳಿಕ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ಭುಗಿಲೆದ್ದಿವೆ.

ಈ ನಡುವೆ ಶುಕ್ರವಾರ ಹೇಳಿಕೆ ನೀಡಿದ್ದ ರಾಜ್ಯ ಸರ್ಕಾರ, ರಾಜ್ಯದ ಜನರು ಹಾಗೂ ರೈತರ ಹಿತಾಸಕ್ತಿ ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಬೆಳೆಗಳಿಗೆ ಹಾಗೂ ಕುಡಿಯುವ ನೀರು ಒದಗಿಸಲಾಗುವುದು ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com