ಕುಕ್ಕರ್ ಹಂಚಿದ್ದಾಗಿ ಪುತ್ರನ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲು!
ಮೈಸೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದಾಗಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಈಗ ಸಿಎಂ ಸಿದ್ದರಾಮಯ್ಯ ಅವರಿಗೆ ಮುಳುವಾಗಿ ಪರಿಣಮಿಸಿದೆ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಉಲ್ಲೇಖಿಸಿ ಬಿಜೆಪಿ ಈಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲುವಿವಾಗಿ ಮಡಿವಾಳ ಸಮುದಾಯದ ಮತದಾರರಿಗೆ ಕುಕ್ಕರ್ ಮತ್ತು ಐರನ್ ಬಾಕ್ಸ್ ಗಳನ್ನು. ಇದರಿಂದ ಚುನಾವಣೆ ಗೆದ್ದಿರುವುದರ ಬಗ್ಗೆ ಸಿದ್ದರಾಮಯ್ಯ ಪುತ್ರ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿವಾಳ ಸಮಾಜದ ಉದ್ಘಾಟನಾ ಸಮಾರಂಭದಲ್ಲಿ ಯತೀಂದ್ರ ಈ ವಿಷಯವನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.
ಸ್ವಯಂ ಪ್ರೇರಿತವಾಗಿ ಚುನಾವಣೆಯ ಅಪರಾಧವನ್ನು ಎಸಗಿರುತ್ತಾರೆ. ಕಾನೂನನ್ನು ಉಲ್ಲಂಘಿಸಿ ಮತದಾರರಿಗೆ ಆಮಿಷವೊಡ್ಡಿರುವುದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯಿಂದ ಸ್ಪಷ್ಟವಾಗಿ ತಿಳಿದು ಬರುತ್ತದೆ. ಈ ಖರ್ಚು ವೆಚ್ಚವನ್ನು ಸಹ ಚುನಾವಣೆಯ ಲೆಕ್ಕದಲ್ಲಿ ತೋರಿಸಿರುವುದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವನೂರು ಪ್ರತಾಪ್ ಸೇರಿ ಹಲವರು ಠಾಣೆಗೆ ತೆರಳಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ವಿರುದ್ಧ ದೂರು ನೀಡಿದ್ದಾರೆ.
ಈ ಹೇಳಿಕೆಯನ್ನ ನಾವು ಹೇಳಿಲ್ಲ. ಚುನಾವಣೆಯಲ್ಲಿ ಗೆದ್ದಿರುವ ಅಭ್ಯರ್ಥಿಯ ಪುತ್ರ ಹೇಳಿರುವ ಹೇಳಿಕೆಯಿದು. ಈಗಾಗಲೇ ಅವರು ನೀಡಿರುವ ಹೇಳಿಕೆ ಎಲ್ಲಾ ಮಧ್ಯಮಗಳಲ್ಲೂ ಬಿತ್ತರವಾಗಿದೆ ಎಂದು ಬಿಜೆಪಿ ನಾಯಕ ಭಾಸ್ಕರ್ ರಾವ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಗ್ಯಾರೆಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ಚುನಾವಣೆಯಲ್ಲಿ ಮತದಾರರಿಗೆ ಆಮಿಷವೊಡ್ಡಿ ಅಧಿಕಾರಕ್ಕೆ ಬರಲಾಗಿದೆ ಎಂದು ಆರೋಪಿಸಿ ಈಗಾಗಲೇ ಒಂದು ಪ್ರಕರಣ ದಾಖಲಾಗಿದ್ದು, ಸಿದ್ದರಾಮಯ್ಯ ಆಯ್ಕೆಯನ್ನು ಪ್ರಶ್ನಿಸಲಾಗಿತ್ತು. ಇತ್ತೀಚೆಗಷ್ಟೇ ಸಿಎಂ ಇದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ