ರಾಜ್ಯ

ಬಿಜೆಪಿ-ಜೆಡಿಎಸ್ ಮೈತ್ರಿ: ಬಿಎಸ್'ಯಡಿಯೂರಪ್ಪ ಭೇಟಿಯಾಗಿ, ಕಾಲಿಗೆ ನಮಸ್ಕರಿಸಿದ ನಿಖಿಲ್ ಕುಮಾರಸ್ವಾಮಿ

ಬಿಜೆಪಿ-ಜೆಡಿಎಸ್ ಮೈತ್ರಿ: ಬಿಎಸ್'ಯಡಿಯೂರಪ್ಪ ಭೇಟಿಯಾಗಿ, ಕಾಲಿಗೆ ನಮಸ್ಕರಿಸಿದ ನಿಖಿಲ್ ಕುಮಾರಸ್ವಾಮಿ
ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಅವರನ್ನು ಭೇಟಿಯಾದ ನಿಖಿಲ್ ಕುಮಾರ್.
Published On :

ಬೆಂಗಳೂರು: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್​ಡಿಎ) ಜೆಡಿಎಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಅವರು, ಭಾನುವಾರ ಭೇಟಿಯಾಗಿ ಆಶೀರ್ವಾದ ಪಡೆದರು.

ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಖಾಸಗಿ ನಿವಾಸ ಧವಳಗಿರಿಗೆ ಇಂದು ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದರು‌. ಈ ವೇಳೆ ನಿಖಿಲ್ ಅವರ ಮುಂದಿನ ರಾಜಕೀಯ ಜೀವನಕ್ಕೆ ಯಡಿಯೂರಪ್ಪ ಅವರು ಶುಭ ಕೋರಿದರು. ಎನ್​ಡಿಗೆ ಜೆಡಿಎಸ್​​ ಸೇರ್ಪಡೆ ಹಿನ್ನೆಲೆಯಲ್ಲಿ ಪರಸ್ಪರರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ನಾಯಕ ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಪುತ್ರ ಸಿರೀಶ್ ಹಾಗೂ ಮಾಜಿ ಸಚಿವ ಮುನಿರತ್ನ ಸೇರಿ ಹಲವರು ಉಪಸ್ಥಿತರಿದ್ದರು.

ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ನಿಖಿಲ್ ಅವರು, ಎನ್'ಡಿಎ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಎಲ್ಲರಿಗೂ ತಿಳಿದಿದೆ. ಅದರ ಆಧಾರದ ಮೇಲೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೇನೆ. ಯಡಿಯೂರಪ್ಪ ಕರ್ನಾಟಕದ ಹಿರಿಯ ನಾಯಕರು. ಹೀಗಾಗಿ ವೈಯಕ್ತಿಕವಾಗಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದುಕೊಂಡೆ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ಬಗ್ಗೆ ಚಿಂತನೆ ಮಾಡಿಲ್ಲ, ನಾನು ಮಂಡ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೂ ಅಲ್ಲ, ಸದ್ಯ ಬಿಜೆಪಿ, ಜೆಡಿಎಸ್ ನಡುವೆ ಟಿಕೆಟ್ ಬಗ್ಗೆ ಚರ್ಚೆ ಆಗಿಲ್ಲ, ನಮಗೆ 28 ಕ್ಷೇತ್ರಗಳ ಮೇಲೂ ಗಮನ ಇದೆ. ಹಾಗಾಗಿ ಎನ್​​ಡಿಎ ಕೂಟಕ್ಕೆ ಈ ಬಾರಿ 28 ಕ್ಷೇತ್ರಕ್ಕೆ 28 ಕ್ಷೇತ್ರದಲ್ಲೂ ಗೆಲುವು ನಿಶ್ಚಿತ ಎಂದು ತಿಳಿಸಿದರು.

ಇದೇ ವೇಳೆ ಕಾವೇರಿ ವಿಚಾರವಾಗ ಮಾತನಾಡಿದ ಅವರು, ರಾಜ್ಯದ ಜನತೆಗೆ, ನಮ್ಮ ರೈತರಿಗೆ ಕಳೆದ 200 ವರ್ಷಗಳಿಂದಲೂ ಆಗುತ್ತಿರುವ ಅನ್ಯಾಯ ಇದು. ತಾರತಮ್ಯದ ನಿರ್ಧಾರಗಳಾಗುತ್ತಿವೆ. ಸುಪ್ರೀಂ ಕೋರ್ಟ್ 5 ಸಾವಿರ ಕ್ಯೂಸೆಕ್ ನೀರನ್ನು 15 ದಿನಗಳ ಕಾಲ ಬಿಡುವುದಕ್ಕೆ ಆದೇಶ ನೀಡಿದೆ. ಆದರೆ ಇದನ್ನು ಪಾಲಿಸಿದಲ್ಲಿ 7.5 ಟಿಎಂಸಿ ನೀರು 15 ದಿನಗಳಲ್ಲಿ ಖಾಲಿ ಆಗುತ್ತದೆ, ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ದೆಹಲಿಗೆ ಹೋದ ಸಂದರ್ಭದಲ್ಲಿ ಅಮಿಶ್ ಶಾ, ನಡ್ಡಾ ಜೊತೆ ಚರ್ಚೆ ಮಾಡಿದ್ದೇವೆ. ಪ್ರಧಾನಿ ಮೋದಿ ಗಮನ ಸೆಳೆಯುತ್ತೇವೆ. ಮಾಜಿ ಪಿಎಂ ದೇವೇಗೌಡರು ಸಹ ಪ್ರಧಾನಿ ಭೇಟಿ ಮಾಡಲಿದ್ದಾರೆ. ನಾನು ಕೂಡ ಈ ಹೋರಾಟದಲ್ಲಿ ಭಾಗಿಯಾಗುತ್ತೇನೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.