ಸರ್ಕಾರಿ ಆಸ್ಪತ್ರೆಗಳಿಗೆ ಶೀಘ್ರದಲ್ಲಿಯೇ 3,000 ವೈದ್ಯಾಧಿಕಾರಿಗಳ ನೇಮಕ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆಯನ್ನು ಶೀಘ್ರದಲ್ಲಿಯೇ ಪರಿಹರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್

ರಾಮನಗರ: ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆಯನ್ನು ಶೀಘ್ರದಲ್ಲಿಯೇ ಪರಿಹರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ‘ಸ್ವಚ್ಛ ಆಸ್ಪತ್ರೆ- ನಮ್ಮ ಆದ್ಯತೆ’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಡ್ಡಾಯವಾಗಿ ಗ್ರಾಮೀಣ ಸೇವೆಯಡಿ 3 ಸಾವಿರಕ್ಕೂ ಹೆಚ್ಚು ವೈದ್ಯರು ಸರ್ಕಾರಿ ಆಸ್ಪತ್ರೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದರು. 

'ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಒಂದು ವರ್ಷ ಕಡ್ಡಾಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಬೇಕು. ಮುಂದಿನ ತಿಂಗಳಿನಿಂದ ವೈದ್ಯರ ಕೊರತೆಯನ್ನು ಹಂತಹಂತವಾಗಿ ನೀಗಿಸಲಾಗುವುದು, ಎಲ್ಲೆಲ್ಲಿ ಕೊರತೆ ಇದೆಯೋ ಅಲ್ಲೆಲ್ಲ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುವುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಣಕಾಸು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ನರ್ಸ್‌ಗಳ ನೇಮಕಾತಿ ಹಾಗೂ ಖಾಲಿ ಇರುವ ಗ್ರೂಪ್‌ಡಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. 

ಅಭಿಯಾನದಡಿ ಪ್ರತಿ ತಿಂಗಳ ಮೂರನೇ ಶನಿವಾರ ಸ್ವಚ್ಛತೆ ಕೈಗೊಳ್ಳಲಾಗುವುದು, ಇದರ ಅಡಿಯಲ್ಲಿ ಆಸ್ಪತ್ರೆಗಳಲ್ಲಿ ಅನುಪಯುಕ್ತ ವಸ್ತುಗಳು ಮತ್ತು ಪರಿಕರಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಯೋಜನೆಯನ್ನು ರೂಪಿಸಲಾಗಿದೆ. ನಿರುಪಯುಕ್ತವಾದ ಗಿಡಗಳನ್ನು ತೆಗೆದು ಅದರ ಬದಲಾಗಿ ಗಿಡಮೂಲಿಕೆ ಗಿಡಗಳಿಗೆ ಸ್ಥಳವನ್ನು ನಿರ್ಮಿಸಲಾಗುವುದು, ಆಸ್ಪತ್ರೆಯಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯವನ್ನು ಸುಧಾರಿಸಲು ಕ್ರಮಕೈಗೊಳ್ಳಲಾಗವುದು ಎಂದರು. 

ಸೊಳ್ಳೆ ಮತ್ತು ಸೋಂಕು ನಿಯಂತ್ರಣ ಕ್ರಮಗಳನ್ನೂ ಕೈಗೊಳ್ಳಲಾಗುವುದು, ಅಭಿಯಾನದ ಭಾಗವಾಗಿ, ವೈಯಕ್ತಿಕ ನೈರ್ಮಲ್ಯ ಕ್ರಮಗಳು, ಪೋಷಣೆ ಕುರಿತು ಕಿರು ಉಪನ್ಯಾಸಗಳು ಮತ್ತು ಪ್ರಾತ್ಯಕ್ಷಿಕೆ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com