ಅಮುಲ್ ಉತ್ಪನ್ನ ಖರೀದಿಸದಿರಲು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು- ಸಿದ್ದರಾಮಯ್ಯ
ಐಸ್ ಕ್ರೀಮ್ ಸೇರಿದಂತೆ ಹಲವು ಉತ್ಪನ್ನಗಳನ್ನು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಅಮುಲ್ , ಈಗ ಹಾಲು ಮತ್ತು ಮೊಸರು ಮಾರಾಟಕ್ಕೆ ಮುಂದಾಗಿದೆ. ಕ್ಲಿಕ್ ಕಾರ್ಮಸ್ ಪ್ಲಾಟ್ ಫಾರ್ಮ್ ಮೂಲಕ ಮನೆಗಳಿಗೆ ತಲುಪಿಸಲು ಹೊರಟಿದೆ.
Published: 07th April 2023 01:14 PM | Last Updated: 07th April 2023 01:15 PM | A+A A-

ಸಿದ್ದರಾಮಯ್ಯ
ಬೆಂಗಳೂರು: ಐಸ್ ಕ್ರೀಮ್ ಸೇರಿದಂತೆ ಹಲವು ಉತ್ಪನ್ನಗಳನ್ನು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಅಮುಲ್ , ಈಗ ಹಾಲು ಮತ್ತು ಮೊಸರು ಮಾರಾಟಕ್ಕೆ ಮುಂದಾಗಿದೆ. ಕ್ಲಿಕ್ ಕಾರ್ಮಸ್ ಪ್ಲಾಟ್ ಫಾರ್ಮ್ ಮೂಲಕ ಮನೆಗಳಿಗೆ ತಲುಪಿಸಲು ಹೊರಟಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಅಮುಲ್ ಉತ್ಪನ್ನ ಖರೀದಿಸುವುದಿಲ್ಲ ಎಂದು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು ಎಂದಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕು ಎಂದು ಕರೆ ನೀಡಿದ್ದಾರೆ. ಭಾಷಾದ್ರೋಹ ಮತ್ತು ನೆಲದ್ರೋಹದ ಜೊತೆಗೆ ಈಗ ಕೆಎಂಎಫ್ ಅನ್ನು ಮುಚ್ಚಿಸುವ ಮೂಲಕ ರೈತದ್ರೋಹ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಹೊರಟಿದೆ ಎಂದು ಅವರು ಕಿಡಿಕಾರಿದ್ದಾರೆ.
ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. ಅಮುಲ್ ಉತ್ಪನ್ನಗಳನ್ನು ಖರೀದಿಸವುದಿಲ್ಲ ಎಂದು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು.
10/11#SaveNandini pic.twitter.com/5DF1h3xFQD— Siddaramaiah (@siddaramaiah) April 7, 2023
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ. ಗೃಹ ಸಚಿವ ಅಮಿತ್ ಶಾ ಅವರ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣ ತಕ್ಷಣ ಮಧ್ಯಪ್ರವೇಶಿಸಿ ಹಿಂಬಾಗಿಲಿನಿಂದ ಪ್ರವೇಶಿಸುತ್ತಿರುವ ಅಮುಲ್ ಸಂಸ್ಥೆಯನ್ನು ತಡೆಯಬೇಕಾಗಿದೆ. ಈ ಸಂಬಂಧ ಕೇಂದ್ರ ಗೃಹಸಚಿವರಾದ ಅಮಿತ್ ಶಾ ಅವರಿಗೆ ರಾಜ್ಯದ ಜನಾಭಿಪ್ರಾಯವನ್ನು ಗಮನಕ್ಕೆ ತಂದು ಈ ದ್ರೋಹ ಚಿಂತನೆಯನ್ನು ನಿಲ್ಲಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.