ಕಾಂಗ್ರೆಸ್ 3ನೇ ಪಟ್ಟಿ: ಅಥಣಿ ಟಿಕೆಟ್ ಸವದಿಗೆ, ಕೋಲಾರಕ್ಕೆ ಕೊತ್ತೂರು ಮಂಜುನಾಥ್; ಶೆಟ್ಟರ್ ಗೆ 'ಕೈ' ಗಾಳ, ಹುಬ್ಬಳ್ಳಿ ಕ್ಷೇತ್ರ ನಿಗೂಢ

ಕಾಂಗ್ರೆಸ್ ಪಕ್ಷ ತನ್ನ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ್ ಸವದಿಗೆ ಅಥಣಿ ಟಿಕೆಟ್ ನೀಡಲಾಗಿದ್ದು, ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕೋಲಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಆಪ್ತ ಕೊತ್ತೂರು ಮಂಜುನಾಥ್ ಗೆ ಟಿಕೆಟ್ ನೀಡಲಾಗಿದೆ.
ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ
ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ನಿಮಿತ್ತ ನಿರೀಕ್ಷೆಯಂತೆಯೇ ಶನಿವಾರ ಕಾಂಗ್ರೆಸ್ ಪಕ್ಷ ತನ್ನ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ನಿನ್ನೆಯಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ್ ಸವದಿಗೆ ಅಥಣಿ ಟಿಕೆಟ್ ನೀಡಲಾಗಿದ್ದು, ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕೋಲಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಆಪ್ತ ಕೊತ್ತೂರು ಮಂಜುನಾಥ್ ಗೆ ಟಿಕೆಟ್ ನೀಡಲಾಗಿದೆ.

ವಿಧಾನಸಭಾ ಚುನಾವಣೆಗೆ 43 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್‌ ಹೈಕಮಾಂಡ್‌ ಇಂದು (ಶನಿವಾರ) ಪ್ರಕಟಿಸಿದ್ದು, ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ ಎನ್ನಲಾದ ಕೋಲಾರ ಕ್ಷೇತ್ರದಿಂದ ಕೊತ್ತೂರು ಮಂಜುನಾಥ್ ಅವರಿಗೆ ಟಿಕೆಟ್‌ ನೀಡಲಾಗಿದೆ. 

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಅಥಣಿ ಕ್ಷೇತ್ರದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದು,  ಅರಸಿಕೆರೆಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಬಂದಿರುವ ಶಿವಲಿಂಗೇಗೌಡ ಅವರನ್ನು ಕಣಕ್ಕಿಳಿಸಲಾಗಿದೆ.

ಉಳಿದಂತೆ ತೇರದಾಳ ಕ್ಷೇತ್ರದಿಂದ ಮಾಜಿ ಸಚಿವೆ, ನಟಿ ಉಮಾಶ್ರೀ ಅವರು ಆಕಾಂಕ್ಷಿಯಾಗಿದ್ದರು. ಆದರೆ, ಅವರಿಗೆ ಟಿಕೆಟ್ ಕೈತಪ್ಪಿದ್ದು, ಸಿದ್ದಪ್ಪ ರಾಮಪ್ಪ ಅವರಿಗೆ ಟಿಕೆಟ್‌ ನೀಡಲಾಗಿದೆ. ಹಾಸನದಿಂದ ಬನವಾಸಿ ರಂಗಸ್ವಾಮಿ ಅವರಿಗೆ ಟಿಕೆಟ್‌ ನೀಡಲಾಗಿದೆ. ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದಿಂದ ಆರ್‌.ವಿ.ದೇವರಾಜ್‌ಗೆ ಟಿಕೆಟ್ ನೀಡಲಾಗಿದೆ.  ಚಿಕ್ಕಪೇಟೆ ಆಕಾಂಕ್ಷಿಯಾಗಿದ್ದ ಮಾಜಿ ಮೇಯರ್‌ ಗಂಗಾಂಬಿಕೆ ಅವರಿಗೆ ನಿರಾಸೆಯಾಗಿದ್ದು, ಟಿಕೆಟ್ ದೊರೆಯುವ ವಿಶ್ವಾಸದಲ್ಲಿದ್ದ ಅವರು ಈಗಾಗಲೇ ನಾಮಪತ್ರವನ್ನೂ ಸಲ್ಲಿಸಿದ್ದಾರೆ.

ಶೆಟ್ಟರ್ ಗೆ ಕಾಂಗ್ರೆಸ್ ಗಾಳ, ಹುಬ್ಬಳ್ಳಿ ಕ್ಷೇತ್ರ ನಿಗೂಢ
224 ವಿಧಾನಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಈ‍ವರೆಗೆ 209 ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇನ್ನು 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಬಾಕಿ ಉಳಿದಿದೆ. ಈ ಪೈಕಿ ಬಿಜೆಪಿಯಿಂದ ಮುನಿಸಿಕೊಂಡಿರುವ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರಕ್ಕೆ ಕೂಡ ಟಿಕೆಟ್ ಘೋಷಣೆ ಮಾಡದೇ ಇರುವುದು ತೀವ್ರ ಕುತೂಹಲ ಕೆರಳಿಸಿದೆ. ಒಂದು ವೇಳೆ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ಮಿಸ್ ಆದರೆ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com