
ಬೀದರ್: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಬಿಜೆಪಿ ಅಬ್ಬರ ಪ್ರಚಾರವನ್ನು ನಡೆಸುತ್ತಿದೆ. ಪ್ರಚಾರಕ್ಕಾಗಿ ಏಪ್ರಿಲ್ 29 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆಂದು ತಿಳಿದುಬಂದಿದೆ.
ಈ ಸಂಬಂಧ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಮಾಹಿತಿ ನೀಡಿದ್ದಾರೆ.
ಚುನಾವಣಾ ಪ್ರಚಾರ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಏಪ್ರಿಲ್ 29 ರಂದು ಬೀದರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆಂದು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹುಮನಾಬಾದ ತಾಲೂಕಿನ ಚಂದನಕೇರಾ ಕ್ರಾಸ್‌ನಲ್ಲಿ ಪ್ರಧಾನಿ ಮೋದಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಔರಾದ್, ಭಾಲ್ಕಿ, ಬಸವಕಲ್ಯಾಣ, ಬೀದರ್, ಹುಮನಾಬಾದ್, ಬೀದರ್ ದಕ್ಷಿಣ, ಆಳಂದ, ಚಿಂಚೋಳಿ ಹೀಗೆ ಎಂಟು ವಿಧಾನಸಭಾ ಕ್ಷೇತ್ರಗಳ ಜನರು ಭಾಗವಹಿಸುತ್ತಾರೆಂದು ತಿಳಿಸಿದ್ದಾರೆ.
ಇದೇ ವೇಳೆ ಲಿಂಗಾಯತ ಸಮುದಾಯದ ಮುಖಂಡರನ್ನು ಬಿಜೆಪಿ ನಿರ್ಲಕ್ಷಿಸಿದೆ ಎಂಬ ಆರೋಪವನ್ನು ನಿರಾಕರಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕಿಂತ ಬಿಜೆಪಿ ಲಿಂಗಾಯತ ಸಮುದಾಯಕ್ಕೆ ಹೆಚ್ಚು ಟಿಕೆಟ್ ನೀಡಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ, ಬಿಜೆಪಿ ಕಾರ್ಯಕಾರಿಣಿ ಸದಸ್ಯ ಸೋಮನಾಥ ಪಾಟೀಲ, ರಾಷ್ಟ್ರೀಯ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜೈಕುಮಾರ ಕಾಂಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಗಡಗಿ, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ ಟೊಣ್ಣೆ, ಬೀದರ್ ನಗರ ಅಧ್ಯಕ್ಷ ಶಶಿ ಹಿಸಲಿ, ಬುಡಾ ಅಧ್ಯಕ್ಷ ಬಾಬು ವಾಲಿ, ಜಿಲ್ಲಾ ವಕ್ತಾರ ಶಿವಪುತ್ರ ವೈದ್ಯ ಹಾಜರಿದ್ದರು.
Advertisement